- ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತ ಪ್ರಗತಿ ಪರಿಶೀಲನಾ ಸಭೆ,
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಜಿಲ್ಲೆಯ ಅಮೃತಮಹಲ್ ಕಾವಲ್‌ನ ಒತ್ತುವರಿ ಪ್ರದೇಶವನ್ನು ಕೂಡಲೇ ತೆರವುಗೊಳಿಸುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅಧಿಕಾರಿಗಳಿಗೆ ಸೂಚಿಸಿದರು.
ಜಿಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಒತ್ತುವರಿಯಾಗಿರುವ ಭೂಪ್ರದೇಶವನ್ನು ತೆರವುಗೊಳಿಸುವಂತೆ ಹಿಂದಿನ ಸಭೆಯಲ್ಲಿ ಸೂಚಿಸಿದ್ದರೂ ಇದುವರೆಗೆ ಕ್ರಮ ಕೈಗೊಳ್ಳದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಕೂಡಲೇ ಜಂಟಿ ಸರ್ವೇ ನಡೆಸಿ ಒತ್ತುವರಿ ತೆರವುಗೊಳಿಸಿ ಆ ಪ್ರದೇಶವನ್ನು ವಶಕ್ಕೆ ಪಡೆಯುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.60 ಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ಅನುದಾನಿತ ಶಾಲೆಗಳ ವಿರುದ್ಧ ಕ್ರಮ ಜರುಗಿಸುವಂತೆ ಸೂಚಿಸಲಾಗಿತ್ತು. ಈ ಬಗ್ಗೆ ಇದುವರೆಗೆ ಕ್ರಮ ಜರುಗಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಮಾಹಿತಿ ನೀಡಿ, ಶೇ.60ಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ಜಿಲ್ಲೆಯ ಅನುದಾನಿತ ಶಾಲೆಗಳಿಗೆ ಕಾರಣ ಕೇಳಿ ನೋಟಿಸು ಜಾರಿ ಮಾಡಲಾಗಿದೆ. ಶೇ. 50 ಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ 13 ಅನುದಾನಿತ ಪ್ರೌಢಶಾಲೆಗಳ ಮಾನ್ಯತೆ ರದ್ದುಪಡಿಸುವ ಕುರಿತು ಆಡಳಿತ ಮಂಡಳಿಗೆ ನೋಟಿಸು ಜಾರಿ ಮಾಡಲಾಗಿದೆ. 2025-26 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಬರಲು 29 ಅಂಶಗಳ ಕಾರ್ಯಕ್ರಮ ಪರಿಣಾಮಕಾರಿ ಯಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ, ಜಿಲ್ಲೆಯಲ್ಲಿ ಈ ಬಾರಿ ಜೂನ್‌ನಿಂದ ಇದುವರೆಗೆ ಆಗಿರುವ ಮಳೆ-ಗಾಳಿ ಯಿಂದ ಜಿಲ್ಲಾದ್ಯಂತ 1273 ವಿದ್ಯುತ್ ಕಂಬಗಳು ಧರೆಗುರುಳಿದ್ದು, ಮೆಸ್ಕಾಂಗೆ ₹217.51 ಲಕ್ಷ ನಷ್ಟ ಸಂಭವಿಸಿದೆ. ಹಾನಿ ಗೊಳಗಾದ ವಿದ್ಯುತ್ ಕಂಬಗಳನ್ನು ಬದಲಾಯಿಸುವ ಕಾರ್ಯ ತ್ವರಿತವಾಗಿ ನಡೆದಿದ್ದು, ಚಿಕ್ಕಮಗಳೂರಲ್ಲಿ 523, ಮೂಡಿಗೆರೆ ಯಲ್ಲಿ 79, ಕಳಸ 87, ಕಡೂರು 22, ತರೀಕೆರೆ 33, ಎನ್.ಆರ್.ಪುರ 250, ಕೊಪ್ಪ 145 ಹಾಗೂ ಶೃಂಗೇರಿಯಲ್ಲಿ 97 ವಿದ್ಯುತ್ ಕಂಬಗಳನ್ನು ಬದಲಿಸಲಾಗಿದೆ ಎಂದರು. ಜಿಲ್ಲೆಯಲ್ಲಿ ಒಟ್ಟು 11.49 ಕಿ.ಮೀ.ನಷ್ಟು ರಾಜ್ಯ ಹೆದ್ದಾರಿ ಹಾನಿ ಉಂಟಾಗಿದ್ದು, ₹6.15 ಕೋಟಿ ರು. ನಷ್ಟ ಸಂಭವಿಸಿದೆ. 10.97 ಕಿ.ಮೀ.ನಷ್ಟು ಜಿಲ್ಲಾ ಮುಖ್ಯ ರಸ್ತೆ ಹಾನಿಗೀಡಾಗಿ ₹1959 ಲಕ್ಷ ರು. ನಷ್ಟ ಸಂಭವಿಸಿದೆ. ಒಟ್ಟು 16 ಸೇತುವೆಗಳು ಹಾನಿಗೊಳಗಾಗಿವೆ. ಒಟ್ಟಾರೆ ರಸ್ತೆ ಮತ್ತು ಸೇತುವೆ ಹಾನಿಯಿಂದಾಗಿ ₹4525 ಲಕ್ಷ ರು. ನಷ್ಟ ಸಂಭವಿಸಿದೆ ಎಂದು ತಿಳಿಸಿದರು. ಜಿಲ್ಲೆಯ 525.36 ಕಿ.ಮೀ. ಗ್ರಾಮೀಣ ರಸ್ತೆಗಳು ಹಾನಿಯಾಗಿವೆ. ₹2788 ಲಕ್ಷ ರು. ನಷ್ಟ ಸಂಭವಿಸಿದೆ. ಗ್ರಾಮೀಣ ಭಾಗದಲ್ಲಿ 28 ಸೇತುವೆ ಮತ್ತು ಕಲ್ವರ್ಟ್‌ಗಳು ಹಾನಿಗೀಡಾಗಿದ್ದು, ₹440 ಲಕ್ಷ ರು. ನಷ್ಟವಾಗಿದೆ. ಇದೇ ಅವಧಿಯಲ್ಲಿ 11 ಸರ್ಕಾರಿ ಶಾಲಾ ಕಟ್ಟಡಗಳು ಮಳೆಯಿಂದ ಹಾನಿಗೀಡಾಗಿದ್ದು ₹22 ಲಕ್ಷ ರು. ನಷ್ಟ ಸಂಭವಿಸಿದೆ. ಚಿಕ್ಕಮಗಳೂರು ತಾಲೂಕಿನಲ್ಲಿ ಎರಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹಾನಿಯಾಗಿ ₹4 ಲಕ್ಷ ನಷ್ಟವಾಗಿದೆ. ಒಟ್ಟಾರೆ ಸರ್ಕಾರಿ ಕಟ್ಟಡಗಳ ಹಾನಿಯಿಂದ ₹26 ಲಕ್ಷ ನಷ್ಟವುಂಟಾಗಿದೆ ಎಂದರು. ಜಿಲ್ಲೆಯಲ್ಲಿ ಮಳೆಯಿಂದಾಗಿ ಜೂನ್‌ನಿಂದ ಈವರೆಗೆ 38 ಮನೆಗಳಿಗೆ ಹಾನಿಯಾಗಿವೆ. ಈ ಪೈಕಿ 9 ಮನೆಗಳು ಪೂರ್ಣ ಪ್ರಮಾಣ ದಲ್ಲಿ ಹಾನಿಗೊಳಗಾಗಿದ್ದು, 8 ಮನೆಗಳಿಗೆ ಪರಿಹಾರ ನೀಡಲಾಗಿದೆ. ಉಳಿದಂತೆ 16 ಮನೆಗಳಿಗೆ ಪರಿಹಾರ ನೀಡುವುದು ಬಾಕಿ ಉಳಿದಿದೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಉಪ ವಿಭಾಗಾಧಿಕಾರಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.25 ಕೆಸಿಕೆಎಂ 1ಚಿಕ್ಕಮಗಳೂರಿನ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಡಿಸಿ ಮೀನಾ ನಾಗರಾಜ್, ಎಸ್ಪಿ ಡಾ. ವಿಕ್ರಂ ಅಮಟೆ, ಜಿಪಂ ಸಿಇಓ ಕೀರ್ತನಾ ಇದ್ದರು.