ಕನ್ನಡಪ್ರಭ ವಾರ್ತೆ ನಂಜನಗೂಡು
ತಾಲೂಕಿನ ದೊಡ್ಡಕವಲಂದೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲದೆ ಬಯಲೇ ಶೌಚಾಲಯವಾಗಿದ್ದು, ವಿದ್ಯಾರ್ಥಿಗಳು ಶೌಚಾಲಯ ವ್ಯವಸ್ಥೆ ಕಲ್ಪಿಸದೆ ಹೋದಲ್ಲಿ ಶಾಲೆಯನ್ನು ತೊರೆಯುವ ನಿರ್ಧಾರ ಮಾಡಿದ್ದಾರೆ.ಸ್ವಚ್ಛತಾ ಆಂದೋಲನ ಪ್ರಮುಖ ಉದ್ದೇಶ ದೇಶದ ಪ್ರತಿ ಹಳ್ಳಿಗಳಲ್ಲಿ ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಕನಸು, ಆದರೆ ತಾಲೂಕಿನ ಕವಲಂದೆ ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರ ಪರಿಸ್ಥಿತಿ ಹೇಳತಿರದು. ಶಾಲೆಯಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲ, ಪರಿಣಾಮ ಶಾಲೆಯ ವಿದ್ಯಾರ್ಥಿನಿಯರು ಶೌಚಾಲಯಕ್ಕೆಂದು ಒಂದು ಕಿಲೋಮೀಟರ್ ದೂರ ಕ್ರಮಿಸಿ ನಿರ್ಜನ ಪ್ರದೇಶಕ್ಕೆ ತೆರಳಬೇಕಿದೆ, ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿನಿಯರಿಗೆ ರಕ್ಷಣೆ ನೀಡುವವರು ಯಾರು ಎಂಬ ಪ್ರಶ್ನೆಯು ಉದ್ಭವಿಸಿದೆ, ಶೌಚಾಲಯ ವ್ಯವಸ್ಥೆ ಕಲ್ಪಿಸುವಂತೆ ಶಾಲೆಯ ಮುಖ್ಯೋಪಾಧ್ಯಾಯರಾದ ಸಿಸಿಲಿಯ ಮೇರಿ ಕವಲಂದೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ತಾಲೂಕು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ನಿರಂತರವಾಗಿ ಪತ್ರ ಬರೆದಿದ್ದರೂ ಸಹ, ಶೌಚಾಲಯ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳು ಮುಂದಾಗಿಲ್ಲ. ಗ್ರಾಪಂ ವತಿಯಿಂದ ಕಳೆದ ಎರಡು ವರ್ಷಗಳ ಹಿಂದೆ ಶಾಲೆಯಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ನರೇಗಾ ಯೋಜನೆ ಅಡಿಯಲ್ಲಿ 3.30 ಲಕ್ಷ ವೆಚ್ಚದಲ್ಲಿ ಗುದ್ದಲಿ ಪೂಜೆ ನೆರವೇರಿಸಿ ಅಡಿಪಾಯ ಹಾಕಲಾಗಿತ್ತು. ಆದರೆ ಅಧಿಕಾರಿಗಳ ಹಿತಾಸಕ್ತಿಯ ಕೊರತೆಯಿಂದ ಕಾಮಗಾರಿಯನ್ನು ಅಡಿಪಾಯಕಷ್ಟೇ ಸೀಮಿತಗೊಳಿಸಿ ನಾಪತ್ತೆಯಾಗಿದ್ದಾರೆ. ಇದರಿಂದ ಶಿಕ್ಷಕಿಯರು ಸಹ ಶೌಚಾಲಯ ವ್ಯವಸ್ಥೆ ಇಲ್ಲದೆ ಕಾರ್ಯನಿರ್ವಹಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಶಾಲೆಯ ಮುಖ್ಯೋಪಾಧ್ಯಾಯರಾದ ಸಿಸಿಲಿಯ ಮೇರಿ ಮಾತನಾಡಿ, ಶಾಲೆಯಲ್ಲಿ ಒಂದರಿಂದ ಏಳನೇ ತರಗತಿವರೆಗೆ ಸುಮಾರು ನೂರಕ್ಕೂ ಹೆಚ್ಚು ಮಕ್ಕಳಿದ್ದಾರೆ. ಆದರೆ ಶಾಲೆಯಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲದಿರುವುದರಿಂದ ವಿದ್ಯಾರ್ಥಿನಿಯರು ಬಯಲಲ್ಲೇ ಶೌಚಾ ಕಾರ್ಯ ಮುಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.ಶಾಲೆಯಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಶಿಕ್ಷಕಿಯರು ಇದರಿಂದ ಹೊರತಾಗಿಲ್ಲ. ಇದು ನಾಗರಿಕ ಸಮಾಜ ತಲೆತಗ್ಗಿಸುವಂತಹ ವಿಚಾರವಾಗಿದೆ. ಈ ಕೂಡಲೇ ಅಧಿಕಾರಿಗಳು ಜನಪ್ರತಿನಿಧಿಗಳು ಕ್ರಮವಹಿಸಿ ಶಾಲೆಯಲ್ಲಿ ಶೌಚಾಲಯ ನಿರ್ಮಾಣ ಮಾಡಿಕೊಡಲು ಕ್ರಮವಹಿಸಬೇಕಿದೆ.
ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ, ತಾಲೂಕಿನ ದೊಡ್ಡ ಕವಲಂದೆ ಸರ್ಕಾರಿ ಶಾಲೆಯಲ್ಲಿ ಗ್ರಾಪಂ ವತಿಯಿಂದ ಅತಿ ತುರ್ತಾಗಿ ಶೌಚಾಲಯ ನಿರ್ಮಿಸಿಕೊಡಲು ಕ್ರಮವಹಿಸುತ್ತೇನೆ ಎಂದರು.