ಕನ್ನಡಪ್ರಭ ವಾರ್ತೆ ಮಂಡ್ಯ
ವಿಕಾಸಸೌಧದಲ್ಲಿ ಬುಧವಾರ ಕಾವೇರಿ ಆರತಿ ಆಯೋಜನೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿ, ಕಳೆದ ಬಾರಿ ಕಾವೇರಿ ಆರತಿ ಆಯೋಜನೆಯಲ್ಲಿ ತೊಡಗಿಸಿಕೊಂಡಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನೇ ಬಳಸಿಕೊಂಡು ಸಂಪ್ರದಾಯ ಬದ್ಧವಾಗಿ, ಯಾವುದೇ ಲೋಪವಿಲ್ಲದೆ ಅಚ್ಚುಕಟ್ಟಾಗಿ ಕಾರ್ಯಕ್ರಮ ನಡೆಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮುಖ್ಯಮಂತ್ರಿಗಳ ನಿರ್ದೇಶನದಂತೆ ಕಾವೇರಿ ಆರತಿಯನ್ನು ಅರ್ಥಪೂರ್ಣವಾಗಿ ನೆರವೇರಿಸಬೇಕು. ಈ ಹಿಂದೆ ಅವರೇ ಜಲಸಂಪನ್ಮೂಲ ಸಚಿವರಾಗಿದ್ದಾಗ ಆರಂಭಿಸಿದ್ದ ಈ ಕಾರ್ಯಕ್ರಮವನ್ನು ಈ ಬಾರಿ ಇನ್ನಷ್ಟು ಅರ್ಥಪೂರ್ಣವಾಗಿ ಆಯೋಜಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.ಕಳೆದ ವರ್ಷ ಮೊದಲ ಬಾರಿಗೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಆರಂಭಿಸಲಾಗಿತ್ತು. ಇಂತಹ ಸಾಂಪ್ರದಾಯಿಕ ಆಚರಣೆಗಳು ನಿಲ್ಲಬಾರದು ಎಂಬ ಸದುದ್ದೇಶದಿಂದ ಈ ವರ್ಷವೂ ಮುಂದುವರಿಸಲಾಗುತ್ತಿದೆ. ರಾಜ್ಯದಲ್ಲಿ ಬರ ಮತ್ತು ತಮಿಳುನಾಡು ನೀರು ಹಂಚಿಕೆ ವಿವಾದಗಳಿದ್ದರೂ, ನಾಡಿನ ಸಂಸ್ಕೃತಿಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು.
ಮುಖ್ಯಮಂತ್ರಿಗಳು ಆಗಮಿಸುವುದರಿಂದ ‘ಡಿ-ಝೋನ್’ ಭದ್ರತಾ ನಿಯಮಗಳ ಪಾಲನೆಯಾಗಬೇಕು ಮತ್ತು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮುಕ್ತ ಅವಕಾಶ ಕಲ್ಪಿಸಬೇಕು ಎಂದು ನಿರ್ದೇಶಿಸಿದರು.
ಕಳೆದ ಬಾರಿಯ ಕಾವೇರಿ ಆರತಿಯ ಮೇಲ್ವಿಚಾರಣೆ ವಹಿಸಿದ್ದ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ರಾಮಪ್ರಸಾದ್ ಅವರೊಂದಿಗೆ ವಿಡಿಯೋ ಕಾಲ್ ಮೂಲಕ ಸಮಾಲೋಚನೆ ನಡೆಸಿದ ಸಚಿವರು, ಈ ವರ್ಷವೂ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ 6 ದಿನಗಳ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ರೂಪಿಸುವಂತೆ ಮತ್ತು ಸ್ಥಳೀಯ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡುವಂತೆ ಕೋರಿದರು.
ಸಭೆಯಲ್ಲಿ ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಒ ನಂದಿನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯುಕ್ತೆ ಮಂಜುಶ್ರೀ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಉಪಸ್ಥಿತರಿದ್ದರು.