ಸಂವಿಧಾನದ ಪ್ರಸ್ತಾವನೆಯಲ್ಲಿನ ಭಾರತದ ಪ್ರಜೆಗಳಾದ ನಾವು ಎಂಬ ಮೊದಲ ಸಾಲು ದೇಶದ ಏಕತೆ, ಅಖಂಡತೆ ಹಾಗೂ ರಾಷ್ಟ್ರೀಯ ಭಾವೈಕ್ಯತೆಯ ಆಶಯವನ್ನು ಸಾರುತ್ತದೆ. ಯಾವುದೇ ಧರ್ಮ, ಜಾತಿ ಅಥವಾ ವರ್ಗಕ್ಕೆ ಸೇರಿದವರಾಗಿದ್ದರೂ ಮೊದಲು ನಾವೆಲ್ಲರೂ ಭಾರತೀಯರು ಎಂಬ ರಾಷ್ಟ್ರೀಯ ಪ್ರಜ್ಞೆ ಪ್ರತಿಯೊಬ್ಬರಲ್ಲೂ ಗಟ್ಟಿಯಾಗಬೇಕು.
ಕನ್ನಡಪ್ರಭ ವಾರ್ತೆ ಮಂಡ್ಯ
ಸಂವಿಧಾನವನ್ನು ಓದಿ ಅರ್ಥ ಮಾಡಿಕೊಳ್ಳುವ ಬದಲು ಅಪಾರ್ಥ ಮಾಡಿಕೊಳ್ಳುವ ಪ್ರವೃತ್ತಿ ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿ. ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರೂ ಸಂವಿಧಾನವನ್ನು ಅಧ್ಯಯನ ಮಾಡಿ ಅದರಲ್ಲಿನ ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಸಹೋದರತ್ವದ ಮೌಲ್ಯಗಳನ್ನು ಜೀವನದಲ್ಲಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ನಗರದ ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ನಡೆದ ಸಂವಿಧಾನ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಸಂವಿಧಾನ ದಿನ ಕೇವಲ ಆಚರಣೆ, ಭಾಷಣ ಹಾಗೂ ಕಾರ್ಯಕ್ರಮಗಳಿಗೆ ಸೀಮಿತವಾಗಬಾರದು. ಅದರ ಆಶಯಗಳನ್ನು ಸರಿಯಾಗಿ ಅರ್ಥಮಾಡಿಕೊಂಡು ಅವುಗಳನ್ನು ನಮ್ಮ ಆಲೋಚನೆ, ನಡವಳಿಕೆ ಮತ್ತು ಕಾರ್ಯಗಳಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಸಂವಿಧಾನದ ಪ್ರಸ್ತಾವನೆಯಲ್ಲಿನ ಭಾರತದ ಪ್ರಜೆಗಳಾದ ನಾವು ಎಂಬ ಮೊದಲ ಸಾಲು ದೇಶದ ಏಕತೆ, ಅಖಂಡತೆ ಹಾಗೂ ರಾಷ್ಟ್ರೀಯ ಭಾವೈಕ್ಯತೆಯ ಆಶಯವನ್ನು ಸಾರುತ್ತದೆ. ಯಾವುದೇ ಧರ್ಮ, ಜಾತಿ ಅಥವಾ ವರ್ಗಕ್ಕೆ ಸೇರಿದವರಾಗಿದ್ದರೂ ಮೊದಲು ನಾವೆಲ್ಲರೂ ಭಾರತೀಯರು ಎಂಬ ರಾಷ್ಟ್ರೀಯ ಪ್ರಜ್ಞೆ ಪ್ರತಿಯೊಬ್ಬರಲ್ಲೂ ಗಟ್ಟಿಯಾಗಬೇಕು ಎಂದರು.
ಪ್ರತಿಯೊಂದು ಮನೆಯಲ್ಲೂ ಸಂವಿಧಾನದ ಪ್ರತಿ ಇರಿಸಿಕೊಂಡು ಓದುವ ಮತ್ತು ಅರ್ಥಮಾಡಿಕೊಳ್ಳುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಮಕ್ಕಳಿಗೆ ಬಾಲ್ಯದಿಂದಲೇ ಸಂವಿಧಾನದ ಮಹತ್ವ, ಪ್ರಜಾಪ್ರಭುತ್ವದ ಆಶಯಗಳು ಹಾಗೂ ನಾಗರಿಕರ ಹಕ್ಕು ಮತ್ತು ಕರ್ತವ್ಯಗಳ ಕುರಿತು ಅರಿವು ಮೂಡಿಸಬೇಕು. ಮಾನವೀಯತೆ, ಸಮಾನತೆ ಮತ್ತು ಸಹಬಾಳ್ವೆಯನ್ನು ಸಾರುವ ಸಂವಿಧಾನವನ್ನು ಬದುಕಿನ ಮಾರ್ಗದರ್ಶಕ ಗ್ರಂಥವನ್ನಾಗಿ ಸ್ವೀಕರಿಸಬೇಕು ಎಂದರು.
ಸಂವಿಧಾನ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ದೂರದೃಷ್ಟಿ, ಅಧ್ಯಯನಶೀಲತೆ ಹಾಗೂ ಪರಿಶ್ರಮವನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ವಿವಿಧ ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ, ಸುದೀರ್ಘ ಚರ್ಚೆ ಮತ್ತು ಪರಿಶ್ರಮದ ಮೂಲಕ ವಿಶ್ವದ ಅತಿ ದೊಡ್ಡ ಲಿಖಿತ ಸಂವಿಧಾನವನ್ನು ದೇಶಕ್ಕೆ ಕೊಡುಗೆಯಾಗಿ ನೀಡಿದ ಅವರ ಸೇವೆ ಅನನ್ಯವಾದುದು. ಅಂಬೇಡ್ಕರ್ ಅವರ ಚಿಂತನೆಗಳನ್ನು ಕೇವಲ ಸ್ಮರಿಸುವುದಕ್ಕೆ ಸೀಮಿತಗೊಳಿಸದೆ ಜೀವನದಲ್ಲಿ ಅನುಸರಿಸುವ ಮೂಲಕ ಅವರಿಗೆ ನಿಜವಾದ ಗೌರವ ಸಲ್ಲಿಸಬೇಕು ಎಂದರು.
ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರೂ ಅದನ್ನು ಅನುಷ್ಠಾನಗೊಳಿಸುವವರು ಉತ್ತಮ ಮೌಲ್ಯಗಳನ್ನು ಹೊಂದಿರದಿದ್ದರೆ ಅದರ ಆಶಯಗಳು ಸಂಪೂರ್ಣವಾಗಿ ಸಾಕಾರಗೊಳ್ಳುವುದಿಲ್ಲ ಎಂಬ ಅಂಬೇಡ್ಕರ್ ಅವರ ವಿಚಾರವನ್ನು ಎಲ್ಲರೂ ಅರಿತುಕೊಳ್ಳಬೇಕು. ಸಂವಿಧಾನದ ಮಹತ್ವದ ಕುರಿತು ಮಾತನಾಡುವುದಷ್ಟೇ ಮುಖ್ಯವಲ್ಲ; ಅದರ ಮೌಲ್ಯಗಳು ನಮ್ಮ ನಡೆ-ನುಡಿಯಲ್ಲಿ ಪ್ರತಿಬಿಂಬಿಸಬೇಕು. ಆಗ ಮಾತ್ರ ಸಂವಿಧಾನದ ಆಶಯಗಳಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದರು.
ಸಂವಿಧಾನದ ಅರಿವು ಪ್ರತಿಯೊಬ್ಬರಿಗೂ ಅಗತ್ಯ:
ಮಂಡ್ಯ ವಿವಿ ಉಪನ್ಯಾಸಕ ಎಸ್.ಜೆ.ಅನಿಲ್ ಕುಮಾರ್ ಮಾತನಾಡಿ, ಭಾರತೀಯ ಸಂವಿಧಾನದ ಮಹತ್ವ, ರಚನೆಯ ಹಿನ್ನೆಲೆ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಹಾಗೂ ಸಂವಿಧಾನದ ಆಶಯಗಳ ಕುರಿತು ವಿವರಿಸಿದರು.
ಸಂವಿಧಾನವು ಕೇವಲ ಕಾನೂನುಗಳ ಸಂಗ್ರಹವಲ್ಲ, ಪ್ರತಿಯೊಬ್ಬ ಪ್ರಜೆಯ ಬದುಕಿಗೆ ದಾರಿದೀಪವಾಗಿದೆ. ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಕಳ್ಳತನವಾದಾಗ ದೇವರು ಬಂದು ತಡೆಯುವುದಿಲ್ಲ. ಬದಲಾಗಿ ಕಾನೂನು ಮತ್ತು ಸಂವಿಧಾನದ ಆಶಯದಂತೆ ಕಾರ್ಯನಿರ್ವಹಿಸುವ ಅಧಿಕಾರಿಗಳೇ ನ್ಯಾಯ ಒದಗಿಸಬೇಕು ಎಂಬ ವಿದ್ಯಾರ್ಥಿಯ ಅಭಿಪ್ರಾಯವನ್ನು ಉಲ್ಲೇಖಿಸಿ ಸಮಾಜದಲ್ಲಿ ಕಾನೂನು ಮತ್ತು ಸಂವಿಧಾನದ ಅರಿವು ಹೊಂದಿರುವುದು ಎಷ್ಟು ಮುಖ್ಯ ಎಂಬುದನ್ನು ವಿವರಿಸಿದರು.
ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ.ಶೋಭಾರಾಣಿ, ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪ, ಉಪವಿಭಾಗಾಧಿಕಾರಿ ಶಂಕರಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ.ಶ್ರೀನಿವಾಸ್ ಹಾಗೂ ದಲಿತ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.