ಸಾಮೂಹಿಕ ವಿವಾಹಗಳ ಮೇಲೆ ನಿಗಾ ಇರಲಿ: ಸಚಿವ ಎಚ್.ಕೆ. ಪಾಟೀಲ

KannadaprabhaNewsNetwork |  
Published : Oct 21, 2025, 01:00 AM IST
ಗದಗದಲ್ಲಿ ಬಾಲ ನ್ಯಾಯ ಮಂಡಳಿ ನೂತನ ಕಟ್ಟಡವನ್ನು ಸಚಿವ ಎಚ್.ಕೆ.ಪಾಟೀಲ ಉದ್ಘಾಟಿಸಿದರು. | Kannada Prabha

ಸಾರಾಂಶ

ಮುಂದಿನ ದಿನಗಳಲ್ಲಿ ಸಾಮೂಹಿಕ ವಿವಾಹ ನಡೆಸುವ ಸಂಘ- ಸಂಸ್ಥೆಗಳು, ಆಯೋಜಕರು ಕಡ್ಡಾಯವಾಗಿ ಮಕ್ಕಳ ರಕ್ಷಣಾ ಘಟಕದಿಂದ ನಿರಪೇಕ್ಷಣಾ ಪತ್ರ ಪಡೆದುಕೊಳ್ಳಬೇಕು.

ಗದಗ: ಸಾಮೂಹಿಕ ವಿವಾಹಗಳಲ್ಲಿ ನಡೆಯುವ ಬಾಲ್ಯವಿವಾಹ ತಡೆಗಟ್ಟಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.ಇಲ್ಲಿನ ಗಾಂಧಿ ನಗರ(ಸೆಟ್ಲಮೆಂಟ್) ದಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಬಾಲ ನ್ಯಾಯ ಮಂಡಳಿ ಮತ್ತು ಮಕ್ಕಳ ಕಲ್ಯಾಣ ಸಮಿತಿ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದರು.ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿ, ಸಾಮೂಹಿಕ ವಿವಾಹಗಳು ನಡೆಯುವ ಕಡೆ ಒಂದು ದಿನ ಮುಂಚಿತವಾಗಿಯೇ ಹೋಗಬೇಕು. ಪೊಲೀಸರ ನೆರವು ಪಡೆದು ವಿಡಿಯೋ ಚಿತ್ರೀಕರಣದ ಮೂಲಕ ಪರಿಶೀಲನೆ ನಡೆಸಿ, ಬಾಲ್ಯವಿವಾಹ ನಡೆಯದಂತೆ ನೋಡಿಕೊಳ್ಳಬೇಕು ಎಂದರು.ಮುಂದಿನ ದಿನಗಳಲ್ಲಿ ಸಾಮೂಹಿಕ ವಿವಾಹ ನಡೆಸುವ ಸಂಘ- ಸಂಸ್ಥೆಗಳು, ಆಯೋಜಕರು ಕಡ್ಡಾಯವಾಗಿ ಮಕ್ಕಳ ರಕ್ಷಣಾ ಘಟಕದಿಂದ ನಿರಪೇಕ್ಷಣಾ ಪತ್ರ ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಸೂಕ್ತ ಮಾರ್ಗಸೂಚಿ ಪ್ರಕಟಿಸಲಿದ್ದು, ಅಧಿಕಾರಿಗಳು ಅದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.ಮಕ್ಕಳ ಸಹಾಯವಾಣಿ 1098ಗೆ ಯಾವ ಸಂದರ್ಭದಲ್ಲಿ ಮತ್ತು ಯಾವ ಉದ್ದೇಶಕ್ಕೆ ಕರೆ ಮಾಡಬೇಕು. ಬಾಲ ನ್ಯಾಯ ಮಂಡಳಿಯ ಕಾರ್ಯಗಳ ಬಗ್ಗೆ ಸಾರ್ವಜನಿಕರಿಗೆ ವ್ಯಾಪಕ ಜಾಗೃತಿ ಕೈಗೊಳ್ಳಬೇಕು. ಬಾಲ ನ್ಯಾಯ ಮಂಡಳಿ ಆವರಣದಲ್ಲಿ ವಿಶಾಲವಾದ ಜಾಗವಿದ್ದು, ತೋಟಗಾರಿಕೆ ಇಲಾಖೆ ನೆರವಿನಿಂದ ಉದ್ಯಾನ ನಿರ್ಮಾಣ ಮಾಡಬೇಕು ಎಂದರು.ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮಾತನಾಡಿ, ಅಪರಾಧ ಚಟುವಟಿಕೆಯಲ್ಲಿ ತೊಡಗಿದ 18 ವರ್ಷದೊಳಗಿನ ಮಕ್ಕಳನ್ನು ಬಾಲ ನ್ಯಾಯ ಮಂಡಳಿ ಎದುರು ಹಾಜರುಪಡಿಸಿ, ಅವರಿಗೆ ಸೂಕ್ತ ತಿಳಿವಳಿಕೆ ನೀಡುವ ಕೆಲಸವನ್ನು ಬಾಲ ನ್ಯಾಯ ಮಂಡಳಿ ಮಾಡಲಿದೆ ಎಂದರು.ಈ ವೇಳೆ ಜಿಲ್ಲಾಧಿಕಾರಿ ಶ್ರೀಧರ ಸಿ.ಎನ್., ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ಅಶೋಕ ಮಂದಾಲಿ, ನಗರಸಭೆ ಸದಸ್ಯ ಸುರೇಶ ಕಟ್ಟಿಮನಿ, ಪ್ರಭು ಬುರಬುರೆ, ಎಸ್.ಎನ್. ಬಳ್ಳಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.ಅಧಿಕಾರಿಗಳಲ್ಲಿ ಇಲ್ಲ ಸ್ಪಷ್ಟತೆ

ಬಾಲ ನ್ಯಾಯ ಮಂಡಳಿ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ನಡೆಯುವ ಸ್ಥಳದ ಬಗ್ಗೆ ಅಧಿಕಾರಿಗಳಲ್ಲಿ ಸ್ಪಷ್ಟತೆ ಇಲ್ಲದಿರುವುದು ಗೊಂದಲಕ್ಕೆ ಕಾರಣವಾಯಿತು.

ಕಾಮಗಾರಿಯ ಫಲಕದಲ್ಲಿ ಹೆಲ್ತ್ ಕ್ಯಾಂಪ್ ಎಂದು ನಮೂದಿಸಿದ್ದನ್ನು ಕಂಡು ನಗರಸಭೆ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಆದರೆ ಮಕ್ಕಳ‌ ರಕ್ಷಣಾ ಅಧಿಕಾರಿ, ಇದು ನಮ್ಮ ತಪ್ಪಲ್ಲ, ಬೇರೆ ಇಲಾಖೆಯವರು ಮಾಡಿದ್ದಾರೆ ಎನ್ನುವ ಉಡಾಫೆ ಉತ್ತರ ನೀಡಿದರು. ಇದರಿಂದ ಸದಸ್ಯರು ಮತ್ತಷ್ಟು ಆಕ್ರೋಶ ವ್ಯಕ್ತಪಡಿಸಿದಾಗ, ಬಿಳಿ ಹಾಳೆಯಲ್ಲಿ ಗಾಂಧಿ ನಗರ ಎಂದು ಬರೆದು ಫಲಕದ ಮೇಲೆ ತೇಪೆ ಹಚ್ಚಿ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದರು.

PREV

Recommended Stories

ಮಲೆನಾಡು, ಕರಾವಳಿಯಲ್ಲಿ ಮಳೆ : ಜನಜೀವನ ಅಸ್ತವ್ಯಸ್ತ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ