ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಸಭೆ । ಇಲಾಖೆ ಅಧಿಕಾರಿಗಳಿಗೆ ತೀವ್ರ ತರಾಟೆ
ಶಾಲೆ ಬಿಟ್ಟ ಮಕ್ಕಳ ಚಲನವಲನದ ಮೇಲೆ ನಿಗಾ ವಹಿಸುವ ಜೊತೆಗೆ ಬಾಲಕಾರ್ಮಿಕ ಪದ್ಧತಿ ಅಲ್ಲಲ್ಲಿ ವರದಿಯಾಗುತ್ತಿದ್ದು, ಬಾಲ ಕಾರ್ಮಿಕತೆ ನಿರ್ಮೂಲನೆಯಲ್ಲಿ ಅಂತರ ಇಲಾಖೆಗಳ ಮಧ್ಯೆ ಸಮನ್ವಯದ ಕೊರತೆ ಸ್ಪಷ್ಟವಾಗಿ ಗೋಚರವಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅಧಿಕಾರಿಗಳಿಗೆ ಚಾಟಿ ಬೀಸಿದರು.
ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಂಗಳವಾರ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯ ಜಿಲ್ಲಾ ಮಟ್ಟದ ಕಾರ್ಯಪಡೆ ಹಾಗೂ ಕಾರ್ಯಕಾರಿಣಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಾಲ ಕಾರ್ಮಿಕರು ಜಿಲ್ಲೆಯ ಯಾವುದೇ ಭಾಗದಲ್ಲಿ ಕಂಡು ಬಂದರೂ ತಕ್ಷಣವೇ ಎಲ್ಲಾ ಇಲಾಖೆ ಅಧಿಕಾರಿಗಳು ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದರು.2024ರ ಏಪ್ರಿಲ್‌ನಿಂದ 2025ರ ಮಾರ್ಚ್ ವರೆಗೆ ಜಿಲ್ಲೆಯಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ನಿಷೇಥ ಮತ್ತು ನಿಯಂತ್ರಣ 1986ರ ಕಾಯ್ದೆ ಕಲಂ 16 ಮತ್ತು 17ರಡಿ 372 ಕಡೆ ತಪಾಸಣೆ ಮಾಡಿ, 23 ಬಾಲಕಾರ್ಮಿಕರನ್ನು ಪತ್ತೆ ಮಾಡಿ, ಪ್ರಕರಣ ದಾಖಲಿಸಲಾಗಿದೆ. ಆದರೆ, ಒಂದು ವರ್ಷದ ಅವದಿಯಲ್ಲಿ ಇಷ್ಟು ಮಾತ್ರ ಬಾಲಕಾರ್ಮಿಕರನ್ನು ಪತ್ತೆ ಮಾಡಿರುವುದು ಅಂತರ ಇಲಾಖೆಗಳ ಅಧಿಕಾರಿಗಳ ಮಧ್ಯೆ ಸಮನ್ವಯದ ಕೊರತೆ ಕಾರಣವೆಂಬುದನ್ನು ತೋರಿಸುತ್ತದೆ ಎಂದು ತರಾಟೆಗೆ ತೆಗೆದುಕೊಂಡರು.
ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿನ ಫಲಿತಾಂಶ ಕಡಿಮೆಯಾಗಿರುವ ಕಾರಣ ಮುಂದಿನ ದಿನಗಳಲ್ಲಿ ಫಲಿತಾಂಶ ಸುಧಾರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸಹ ವಿದ್ಯಾರ್ಥಿಗಳಂತೆ ಪಾಠ ಕೇಳುವ ಕೆಲಸವನ್ನು ಮಾಡಲು ಸೂಚಿಸಲಾಗಿದೆ. ಖುದ್ದು ಜಿಲ್ಲಾಧಿಕಾರಿ, ಜಿಪಂ ಸಿಇಓ, ಜಿಲ್ಲಾ ಪೊಲೀಸ್ ಅಧೀಕ್ಷಕರು, ಹಿರಿಯ ಅಧಿಕಾರಿಗಳು ಸಹ ವಿದ್ಯಾರ್ಥಿಗಳಂತೆ ಪಾಠ ಕೇಳಲು ಶಾಲೆ ಮತ್ತು ಕಾಲೇಜುಗಳಿಗೆ ತೆರಳಲಿದ್ದಾರೆ. ಈ ತಿಂಗಳಾಂತ್ಯದ ವೇಳೆಗೆ ಈ ಕೆಲಸ ಶುರುವಾಗಲಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಮಹಾವೀರ ಮ.ಕರಣ್ಣನವರ್, ಹೆಚ್ಚುವರಿ ರಕ್ಷಣಾಧಿಕಾರಿ ಜಿ.ಮಂಜುನಾಥ, ಜಿಪಂ ಉಪ ಕಾರ್ಯದರ್ಶಿ ಮಮತಾ ಹೊಸಗೌಡರ, ಕಾರ್ಮಿಕ ಇಲಾಖೆ ಸಹಾಯಕ ಆಯುಕ್ತ ಅವಿನಾಶ, ವಿವಿಧ ಸಂಘ ಸಂಸ್ಥೆಗಳ ರೂಪ್ಲಾ ನಾಯ್ಕ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.