ಕನ್ನಡಪ್ರಭ ವಾರ್ತೆ ರಾಯಚೂರು
ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಇದರಿಂದ ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಾರುತಿ ಎಸ್. ಬಾಗಡೆ ಅವರು ಹೇಳಿದರು.ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ರಾಯಚೂರು ನಗರಸಭೆ ವತಿಯಿಂದ ‘ಸ್ವಚ್ಛತಾ ಹಿ ಸೇವಾ ಅಭಿಯಾನ’ ಕಾರ್ಯಕ್ರಮದ ಅಂಗವಾಗಿ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಆಸ್ಪತ್ರೆಯ ನರ್ಸ್ ಹಾಗೂ ಪೌರ ಕಾರ್ಮಿಕರ ಕಾರ್ಯ ಮೆಚ್ಚುವಂಥದ್ದು, ಅವರನ್ನು ನಿರ್ಲಕ್ಷ್ಯ ಮಾಡದೆ ಅವರ ಕಾರ್ಯಕ್ಕೆ ಸಾಥ ನೀಡಬೇಕು. ಪೌರಕಾರ್ಮಿಕರು ಹಾಗೂ ನರ್ಸ್ಗಳು ತಮ್ಮ ಕಾಯಕ ನಿಲ್ಲಿಸಿದರೆ. ಜನರು ಹಾಗೂ ನಗರಗಳ ಗತಿ ಅದೋಗತಿ ಆಗುತ್ತದೆ. ಸಾರ್ವಜನಿಕರು ತಮ್ಮ-ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಇದರ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಅಕ್ಟೋಬರ್ 02 ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕೇಂದ್ರ ಬಸ್ ನಿಲ್ದಾಣದ ಸಮಗ್ರ ಸ್ವಚ್ಛತೆಯನ್ನು ಮಾಡಲಾಗುತ್ತದೆ ಎಂದು ಹೇಳಿದರು.ಈ ವೇಳೆ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರಧಾನ ಕೌಟುಂಬಿಕ ನ್ಯಾಯಾಧೀಶರಾದ ಶ್ರೀಕಾಂತ್ ಎಸ್.ವಿ, 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹತ್ತಿಕಾಳ್ ಪ್ರಭು ಸಿದ್ದಪ್ಪ, ಹಿರಿಯ ಶ್ರೇಣಿ ದಿವಾನಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಚ್.ಎ.ಸಾತ್ವಿಕ್ ಸೇರಿ ಇತರೆ ನ್ಯಾಯಾಧೀಶರು ಹಾಗೂ ನ್ಯಾಯಾಲಯದ ಸಿಬ್ಬಂದಿಗಳು ಇದ್ದರು.