ಕನ್ನಡಪ್ರಭ ವಾರ್ತೆ ಮಡಿಕೇರಿ
ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು 27ರಂದು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಅರ್ಥಪೂರ್ಣವಾಗಿ ಆಯೋಜಿಸಬೇಕಿದ್ದು, ಆ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಪ್ರಬಂಧ ಸ್ಪರ್ಧೆ ಹಾಗೂ ಚಿತ್ರಕಲೆ ಸ್ಪರ್ಧೆ ಏರ್ಪಡಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರ ಈ ಬಾರಿ ಕೆಂಪೇಗೌಡರ ಆಡಳಿತ ಹಾಗೂ ಅವರ ಜೀವನ ಚರಿತ್ರೆ ಪರಿಚಯಿಸುವ ನಿಟ್ಟಿನಲ್ಲಿ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಯೋಜಿಸಲು ನಿರ್ಧರಿಸಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಕೆಂಪೇಗೌಡರ ಆಡಳಿತ ವ್ಯವಸ್ಥೆ ಪರಿಚಯಿಸಲು ಶಾಲಾ ಕಾಲೇಜು ಹಂತದಲ್ಲಿ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಿ, ವರದಿ ನೀಡುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.ತಾಲೂಕು ಮಟ್ಟದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ಮೂವರನ್ನು ಜಿಲ್ಲಾ ಮಟ್ಟಕ್ಕೆ ಕಳುಹಿಸಿ ಕೊಡುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಸ್ಥಳೀಯ ಸಂಸ್ಥೆಗಳು ತಾಲೂಕು ಹಾಗೂ ಜಿಲ್ಲಾಡಳಿತದ ಜೊತೆ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸುವಂತೆ ಸೂಚಿಸಿದರು.ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಮಾತನಾಡಿ, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸುವಲ್ಲಿ ಪ್ರತಿಯೊಬ್ಬರೂ ಕೈಜೋಡಿಸುವಂತೆ ಸೂಚಿಸಿದರು.
ಕೊಡಗು ಗೌಡ ವಿದ್ಯಾಸಂಘದ ಅಧ್ಯಕ್ಷರಾದ ಅಂಬೆಕಲ್ಲು ನವೀನ್, ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಕಾರ್ಯದರ್ಶಿ ಎಸ್.ಎಲ್.ಬಸವರಾಜು ಮಾತನಾಡಿ ಕೆಂಪೇಗೌಡ ದಿನಾಚರಣೆಗೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಹೇಳಿದರು.ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ರಂಗಧಾಮಪ್ಪ ಅವರು ಕೆಂಪೇಗೌಡ ಜಯಂತಿ ಆಚರಣೆ ಸಂಬಂಧ ಪ್ರಬಂಧ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆ ಏರ್ಪಡಿಸಿ ಆಯ್ಕೆ ಮಾಡಿ ವರದಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಜಿ.ಪಂ.ಉಪ ಕಾರ್ಯದರ್ಶಿ ಎಸ್.ಧನರಾಜ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಬಸಪ್ಪ, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಾಲಸುಬ್ರಮಣ್ಯ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್, ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಲಿಂಗರಾಜು ದೊಡ್ಡಮನಿ, ಜಿ.ಪಂ.ಎಂಜಿನಿಯರ್ ಮುತ್ತುರಾಜ್, ಸುರೇಶ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜು, ಪಿಎಂಜಿಎಸ್‌ವೈ ಎಂಜಿನಿಯರ್ ಪ್ರಭು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ವಿಕಲಚೇತನರ ಅಧಿಕಾರಿ ವಿಮಲ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್, ಶಿಕ್ಷಣಾಧಿಕಾರಿ ಕೃಷ್ಣಪ್ಪ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ದಿವಾಕರ ಇತರರು ಇದ್ದರು.