ಖಾದಿ ನಮ್ಮ ಸ್ವಾಭಿಮಾನ, ಸ್ವಾವಲಂಬನೆ ಸಂಕೇತ

KannadaprabhaNewsNetwork |  
Published : Sep 10, 2025, 01:05 AM IST
ರಾಜ್ಯಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಆರಂಭ | Kannada Prabha

ಸಾರಾಂಶ

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟ ಮೇಳಗಳಲ್ಲಿ ಭಾಗವಹಿಸಿ ಖಾದಿ ಉತ್ಪನ್ನಗಳನ್ನು ಖರೀದಿಸುವ ಮೂಲಕ ಪ್ರೋತ್ಸಾಹಿಸಬೇಕು

ಕನ್ನಡಪ್ರಭ ವಾರ್ತೆ ವಿಜಯಪುರ

ಖಾದಿ ಬಟ್ಟೆ ಸ್ವಾತಂತ್ರ್ಯ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಖಾದಿ ದೇಶಾಭಿಮಾನದ ಪ್ರತೀಕವಾಗಿದೆ ಎಂದು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಹಾಗೂ ಮಸ್ಕಿ ಕ್ಷೇತ್ರದ ಶಾಸಕ ಬಸನಗೌಡ ತುರವಿಹಾಳ ಹೇಳಿದರು.

ಜಿಲ್ಲಾಡಳಿತ, ಜಿಪಂ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಬೆಂಗಳೂರು ಸಂಯುಕ್ತಾಶ್ರಯದಲ್ಲಿ ನಗರದ ಇಂಡಿ ರಸ್ತೆಯ ಚಾಂದಿನಿ ಫಂಕ್ಷನ್ ಹಾಲ್‌ನಲ್ಲಿ ಸೆ.8ರಿಂದ 17ರವರೆಗೆ ಆಯೋಜಿಸಿದ ಖಾದಿ ಉತ್ಸವ-2025 ರಾಜ್ಯಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯದಲ್ಲಿ ಖಾದಿ ಉತ್ಪಾದನೆಗೆ ಇತಿಹಾಸವಿದೆ. ಖಾದಿ ನಮ್ಮ ಸ್ವಾಭಿಮಾನ-ಸ್ವಾವಲಂಬನೆಯ ಸಂಕೇತವಾಗಿದೆ. ವಿಶಿಷ್ಟ ಸ್ಥಾನ ಪಡೆದುಕೊಂಡಿರುವ ಖಾದಿ ಉತ್ಪಾದನೆ ಉತ್ತೇಜಿಸಲು ಇಂತಹ ಮಾರಾಟ ಮೇಳಗಳು ಸಹಕಾರಿಯಾಗಿವೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟ ಮೇಳಗಳಲ್ಲಿ ಭಾಗವಹಿಸಿ ಖಾದಿ ಉತ್ಪನ್ನಗಳನ್ನು ಖರೀದಿಸುವ ಮೂಲಕ ಪ್ರೋತ್ಸಾಹಿಸಬೇಕು ಎಂದರು.

ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಮಾತನಾಡಿ, ಖಾದಿ ನಮ್ಮ ದೇಶದ ಅಸ್ಮಿತೆಯಾಗಿದೆ. ಖಾದಿ ಉತ್ಸವ ಮನೆ-ಮನಗಳ ಉತ್ಸವವಾಗಬೇಕು. ಅಂದಾಗ ಈ ಉತ್ಸವದ ಸಾರ್ಥಕತೆ ಸಾಕಾರಗೊಳ್ಳುತ್ತದೆ. ಯುವಕರು ಖಾದಿಯ ಬಗ್ಗೆ ಒಲವು ಹೊಂದಿ ಖಾದಿ ಬಟ್ಟೆ ಬಳಸಬೇಕು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಖಾದಿ ಉತ್ಪನ್ನಕ್ಕೆ ಬ್ರ್ಯಾಂಡ್ ಸಿಗುವಂತಾಗಬೇಕು ಎಂದರು.

ಕೆಕೆಜಿಎಸ್ ಅಧ್ಯಕ್ಷ ಬಿ.ಬಿ.ಪಾಟೀಲ (ಶೇಗುಣಸಿ) ಮಾತನಾಡಿ, ಈ ಹಿಂದೆ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಖಾದಿ ಉತ್ಸವಕ್ಕೆ ಜನರಿಂದ ಅಪಾರ ಪ್ರೋತ್ಸಾಹ ದೊರೆತಿರುವುದನ್ನು ಈ ಸಂದರ್ಭದಲ್ಲಿ ಸ್ಮರಿಸಿದರು. ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಡಿ.ಬಿ.ನಟೇಶ ಮಾತನಾಡಿ, ಖಾದಿ ಮತ್ತು ಗ್ರಾಮೋದ್ಯೋಗ ಉತ್ಪನ್ನಗಳ ಮಾರಾಟವನ್ನು ದ್ವಿಗುಣಗೊಳಿಸಲು ಆರ್‌ಇಪಿಜಿ ಹಾಗೂ ಪಿಎಂಇಜಿಪಿಯಡಿ ಆರ್ಥಿಕ ನೆರವು ಪಡೆದ ಘಟಕಗಳ ಉತ್ಪನ್ನಗಳನ್ನು ಸಾರ್ವಜನಿಕರಿಗೆ ತಲುಪಿಸಲು ರಾಜ್ಯ ಸರ್ಕಾರದ ನೆರವಿನಿಂದ ಹಲವಾರು ಕಾರ್ಯಕ್ರಮಗಳನ್ನು ಮಂಡಳಿ ಅನುಷ್ಠಾನಗೊಳಿಸುತ್ತಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ನಾರಾಯಣ ಕಾಂಬಳೆ, ಯಾದವಾಡ ಸಿದ್ದನಗೌಡ, ವೆಂಕಟೇಶವರಾವ ಸೇರಿದಂತೆ ವಿವಿಧ ಮಾರಾಟಗಾರರು, ಸಾರ್ವಜನಿಕರು ಉಪಸ್ಥಿತರಿದ್ದರು.

ಸೆ.17ರವರೆಗೆ ಖಾದಿ ಉತ್ಸವ

ವಿಜಯಪುರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದ ಹತ್ತಿರ ಇರುವ ಚಾಂದನಿ ಪಂಕ್ಷನ್ ಹಾಲ್‌ನಲ್ಲಿ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಸೆ.8ರಿಂದ ಸೆ.17ರವರೆಗೆ 10 ದಿನಗಳ ಕಾಲ ಖಾದಿ ಉತ್ಸವವನ್ನು ಆಯೋಜಿಸಿದೆ. ಪ್ರತಿದಿನ ಬೆಳಿಗ್ಗೆ 10 ರಿಂದ ರಾತ್ರಿ 9ಗಂಟೆಯ ವರೆಗೆ ನಡೆಯುವ ಈ ಉತ್ಸವದಲ್ಲಿ ಜಿಲ್ಲೆ, ರಾಜ್ಯ, ಹೊರ ರಾಜ್ಯದ ಖಾದಿ ಉತ್ಪನ್ನಗಳ ಪ್ರದರ್ಶನ ಮಾರಾಟ ನಡೆಯಲಿದೆ. ವಿಜಯಪುರ ಜಿಲ್ಲೆಯ ಸಾರ್ವಜನಿಕರು ಈ ವಸ್ತು ಪ್ರದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ, ಖಾದಿ ಉತ್ಪನ್ನಗಳಿಗೆ ಪ್ರೋತ್ಸಾಹಿಸಬೇಕೆಂದು ಜಿಲ್ಲಾ ಖಾದಿ ಗ್ರ‍್ರಾಮೋದ್ಯೋಗ ಅಧಿಕಾರಿಗಳು ಮನವಿ ಮಾಡಿದ್ದಾರೆ.

PREV

Recommended Stories

ಅಕ್ಕಿ ಅಕ್ರಮ ಹಗರಣ: ಸತ್ತವರಿಗೂ ಅನ್ನಭಾಗ್ಯ !
ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ 2 ರೈಸ್‌ಮಿಲ್‌ ಜಫ್ತಿ: ಕೇಸು