ಶೋಷಿತರ ಏಳಿಗೆಗೆ ಶ್ರಮಿಸಿದ್ದ ಅರಸರು: ಪೌರಾಡಳಿತ ಸಚಿವ ರಹೀಂಖಾನ್

KannadaprabhaNewsNetwork | Published : Aug 21, 2024 12:41 AM

ಸಾರಾಂಶ

ಬೀದರ್ ನಗರದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಡಿ. ದೇವರಾಜ ಅರಸು ಜಯಂತಿ ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ಬೀದರ್‌

ಕೆಳವರ್ಗದ ಶೋಷಿತ ಜನರ ಏಳಿಗೆಗಾಗಿ ಸಾಮಾಜಿಕ ಕ್ರಾಂತಿ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಶ್ರಮಿಸಿದ್ದರು ಎಂದು ಪೌರಡಾಳಿತ ಹಾಗೂ ಹಜ್ ಸಚಿವ ರಹೀಂಖಾನ್ ತಿಳಿಸಿದರು.

ಅವರು ಮಂಗಳವಾರ ನಗರದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೀದರ್‌ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು 109ನೇ ಜನ್ಮ ದಿನಚಾರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಿಂದುಳಿದ ವರ್ಗದ ಸಣ್ಣ- ಸಣ್ಣ ಜಾತಿಗಳನ್ನು ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕವಾಗಿ ಮುಂದೆ ಬರಲು ಅವರ ಕೊಡುಗೆ ಬಹಳಷ್ಟು ಇದೆ. ಹಲವಾರು ವಸತಿ ನಿಲಯ ಹಾಗೂ ಶಾಲೆಗಳನ್ನು ತೆರೆದು ಗ್ರಾಮೀಣ ಭಾಗದ ಬಡ ಮಕ್ಕಳಿಗೆ ಅನುಕೂಲವಾಗುವಂತೆ ಮಾಡಿದರು. ಹಾಗೂ ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಒತ್ತು ನೀಡಿದ್ದರು ಎಂದು ಹೇಳಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ ಚಿಮಕೋಡೆ ಮಾತನಾಡಿ, ಪ್ರಗತಿಪರ ಸಾಧನೆಗಳ ಸರದಾರ ಸಾಮಾಜಿಕ ಪರಿವರ್ತನೆ ಹರಿಕಾರ ಅರಸರು ಮುಖ್ಯಮಂತ್ರಿಗಳಾದ ಮೊದಲ ಬಾರಿಗೆ ಮಲ ಹೋರುವ ಪದ್ಧತಿ ತೆಗೆದು ಹಾಕಿದರು. ಬಡವರು ನಿರ್ಗತಿಕರಿಗೆ ವಸತಿ ಯೋಜನೆ ಸೇರಿದಂತೆ ಹಲವು ಯೋಜನೆ ಕಾರ್ಯಗತಕ್ಕೆ ತಂದರು ಎಂದರು.

ಬೀದರ್‌ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರದ ಸಹ ಪ್ರಾಧ್ಯಾಪಕ ಡಾ.ಸುಚಿತಾನಂದ ಕೆ.ಮಲ್ಕಾಪೂರೆ ಅವರು ವಿಶೇಷ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ವಸತಿ ನಿಲಯಗಳಲ್ಲಿ ವ್ಯಾಸಂಗ ಮಾಡಿ ಎಸ್ಎಸ್ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ನಗರಸಭೆ ಅಧ್ಯಕ್ಷ ಮಹ್ಮದ ಗೌಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಜಿ.ಪಂ ಯೋಜನಾಧಿಕಾರಿ ಜಗನ್ನಾಥ ಮೂರ್ತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಸಂಗೀತಾ ಬಿರದಾರ ಸೇರಿದಂತೆ ಹಿಂದುಳಿದ ವರ್ಗಗಳ ವಸತಿ ನಿಲಯದ ವಿದ್ಯಾರ್ಥಿಗಳು, ಶಿಕ್ಷಕರು, ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Share this article