ಶಿಗ್ಗಾಂವಿ: ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಳ್ಳುವ ಜ್ಞಾನ ಸಂಪಾದನೆ ಮಾಡಿಕೊಳ್ಳುವುದು ಮುಖ್ಯವಾಗಿದೆ. ಅದಕ್ಕೆ ವಿದ್ಯಾರ್ಥಿ ಜೀವನದಲ್ಲಿ ಪರಿಶ್ರಮ ವಹಿಸುವುದು ಅವಶ್ಯವಾಗಿದೆ. ಹೀಗಾಗಿ ಬದುಕು ಕಟ್ಟಿಕೊಳ್ಳುವ ಶಿಕ್ಷಣದ ಮಾರ್ಗದತ್ತ ಸಾಗುವುದನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಬೆಂಗಳೂರು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಶ್ರೀಕಾಂತ ಜಿ. ಸಲಹೆ ನೀಡಿದರು.ತಾಲೂಕಿನ ಗುಡ್ಡದಚನ್ನಾಪುರ ಚನ್ನಕೇಶವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಗುರುವಾರ ನಡೆದ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಪರಿವೀಕ್ಷಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಸಿವಿಲ್, ಕಂಪ್ಯೂಟರ್ ಸೈನ್ಸ್, ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಮತ್ತು ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಗಳು ಸಂಸ್ಥೆಯಲ್ಲಿ ಕಾರ್ಯಗತಗೊಳಿಸಲಾದ ಅಭಿವೃದ್ಧಿ ಕಾರ್ಯಗಳು ಹಾಗೂ ಪ್ರಸ್ತುತವಾಗಿ ಲಭ್ಯವಿರುವ ತಾಂತ್ರಿಕ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಉತ್ತಮ ಜ್ಞಾನಾರ್ಜನೆ ಗಳಿಸಿ, ತಮ್ಮ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳುವುದರಲ್ಲಿ ಯಶಸ್ವಿಯಾಗಿ, ಸಮಾಜಕ್ಕೆ ಉತ್ತಮ ಸೇವೆ ನೀಡಿ ಎಂದರು.
ಬೆಂಗಳೂರು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವೈ.ಎನ್. ದೊಡ್ಡಮನಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಗುರಿ, ಉದ್ದೇಶಗಳು ಬಹಳಷ್ಟು ಮುಖ್ಯವಾಗಿವೆ. ಅದರಿಂದ ಭವಿಷ್ಯ ಗಟ್ಟಿಗೊಳಿಸಲು ಸಾಧ್ಯವಿದೆ. ಅದಕ್ಕಾಗಿ ವಿದ್ಯಾರ್ಥಿ ಜೀವನದಲ್ಲಿ ಪ್ರತಿ ವಿಷಯಗಳ ಬಗ್ಗೆ ಜ್ಞಾನ ಸಂಪಾದನೆ ಜತೆಗೆ ಉದ್ಯೋಗಗಳಿಗೆ ಬೇಕಾಗುವ ಕೌಶಲಗಳನ್ನು ಬೆಳೆಸಿಕೊಳ್ಳಬೇಕು. ಕೌಶಲಗಳು ಬಹಳಷ್ಟು ಪ್ರಮುಖವಾಗಿವೆ. ಕರ್ನಾಟಕದ ಇತರ ಕಾಲೇಜುಗಳಿಗಿಂತ ಚನ್ನಕೇಶವ ಸರ್ಕಾರಿ ಪಾಲಿಟೆಕ್ನಿಕ್ ಉತ್ತಮ ಸಾಧನೆ ಮಾಡುತ್ತಿದೆ ಎಂದರು.ಪ್ರಾಚಾರ್ಯ ಹೇಮಂತಕುಮಾರ ಕೆ.ಎಸ್. ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಸಂಸ್ಥೆಯಲ್ಲಿ ನಡೆಯುತ್ತಿರುವ ಚಟುವಟಿಕೆಗಳು, ಅಭಿವೃದ್ಧಿ ಕಾರ್ಯಗಳು ಮತ್ತು ಮುಂದಿನ ಯೋಜನೆಗಳ ಬಗ್ಗೆ ಹೆಚ್ಚಿನ ಆದ್ಯತೆ ನೀಡಿದ್ದು, ಸಂಸ್ಥೆಯು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ, ಕೆಲಸ ಕಾರ್ಯಗಳನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದು, ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾದ ವಾತಾವರಣ ಮತ್ತು ಅಗತ್ಯವಿರುವ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಇನ್ನೂ ಹೆಚ್ಚಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.