ಕಲ್ಲಡ್ಕ ಪ್ರಭಾಕರ್‌ ಭಟ್‌ ಬಂಧನಕ್ಕೆ ಆಗ್ರಹಿಸಿ ಕುಶಾಲನಗರದಲ್ಲಿ ಪ್ರತಿಭಟನೆ

KannadaprabhaNewsNetwork |  
Published : Dec 28, 2023, 01:46 AM ISTUpdated : Dec 28, 2023, 01:47 AM IST
ಕುಶಾಲನಗರದ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟನೆ | Kannada Prabha

ಸಾರಾಂಶ

ಆರ್‌ಎಸ್‌ಎಸ್‌ ಮುಖಂಡ ಪ್ರಭಾಕರ್‌ ಭಟ್‌ ಹೇಳಿಕೆ ಖಂಡಿಸಿ, ಅವರ ಬಂಧನಕ್ಕೆ ಆಗ್ರಹಿಸಿ ಕುಶಾಲನಗರ, ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು.

ಕನ್ನಡಪ್ರಭ ವಾರ್ತೆ ಕುಶಾಲನಗರ

ಆರ್‌ಎಸ್ಎಸ್‌ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್‌ ಭಟ್‌ ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ, ಅವರನ್ನು ಬಂಧಿಸುವಂತೆ ಆಗ್ರಹಿಸಿ ಕುಶಾಲನಗರ ತಾಲೂಕು ಮುಸ್ಲಿಂ ಒಕ್ಕೂಟದ ವತಿಯಿಂದ ಕುಶಾಲನಗರದ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕುಶಾಲನಗರದ ಕಾರ್ಯಪ್ಪ ವೃತ್ತದಲ್ಲಿ ಒಕ್ಕೂಟದ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿ ಕಲ್ಲಡ್ಕ ಪ್ರಭಾಕರ್ ಅವರನ್ನು ಬಂಧಿಸುವಂತೆ ಆಗ್ರಹಿಸಿದರು. ನಂತರ ಕಲ್ಲಡ್ಕ ಪ್ರಭಾಕರ್ ಭಟ್‌ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕುಶಾಲನಗರ ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಅಬ್ದುಲ್ ಕಲೀಂ ಮಾತನಾಡಿ, ಇಂದು ಭಾರತದಲ್ಲಿ ಹಿಂದೂ ಮುಸಲ್ಮಾನರು ಪರಸ್ಪರ ಶಾಂತಿ, ಪ್ರೀತಿ ವಿಶ್ವಾಸದಿಂದ ಬದುಕು ಸಾಗಿಸುತ್ತಿದ್ದಾರೆ. ಕಲ್ಲಡ್ಕ ಪ್ರಭಾಕರ್ ಭಟ್‌ ಮುಸಲ್ಮಾನ ಹೆಣ್ಣು ಮಕ್ಕಳನ್ನು ಅವಹೇಳನ ಮಾಡಿರುವುದು ಖಂಡನೀಯ. ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ಅಲ್ಪಸಂಖ್ಯಾತರ ಮತವನ್ನು ಪಡೆದು ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷಕ್ಕೆ‌ ನೈತಿಕತೆಯಿದ್ದರೆ, ಕಾಂಗ್ರೆಸ್ ಜಾತ್ಯತೀತ ಪಕ್ಷವೇ ಆಗಿದ್ದರೆ ಕಲ್ಲಡ್ಕ ಪ್ರಭಾಕರ್ ಅವರಂತಹ ಸಮಾಜಕ್ಕೆ ಮಾರಕವಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದರು.

ಕುಶಾಲನಗರ ಎಸ್.ಡಿ.ಪಿ.ಐ ಅಧ್ಯಕ್ಷ ಝಕ್ರಿಯ ಮಾತನಾಡಿ, ಇಂದು ಭಾರತದಲ್ಲಿ ಹಿಂದೂ ಮುಸಲ್ಮಾನರು ಪರಸ್ಪರ ಶಾಂತಿ, ಸೌಹಾರ್ದತೆಯಿಂದ ಬಾಳುತ್ತಿದ್ದೇವೆ. ಇಂತಹ ಸಮಾಜಘಾತುಕ ಶಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾಗಿದೆ ಎಂದರು.

ಪ್ರತಿಭಟನೆಯಲ್ಲಿ ಕುಶಾಲನಗರ ತಾಲೂಕು ಮುಸ್ಲಿಂ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಮೀರ್, ಉಪಾಧ್ಯಕ್ಷ ಪಾಷಾ, ಅನ್ವರ್,‌ ಅಕ್ಬರ್, ಖಲೀರ್, ಶರೀಫ್, ಸಲೀಂ, ಮೊಯ್ದೀನ್, ಸಮಿ, ಅಶ್ರಫ್, ಜರೀನಾ, ಹಮೀದ್, ಸಾಹುಲ್‌ ಹಾಗೂ ಸಂಘಟನೆ ಸದಸ್ಯರು ಇದ್ದರು.

ಕೊಡಗು ಕಾಂಗ್ರೆಸ್‌ ಅಲ್ಪಸಂಖ್ಯಾತ ಘಟಕ ಒತ್ತಾಯ: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಹಾಗೂ ಯುವತಿಗೆ ಬೆದರಿಕೆ ಹಾಕಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಕಾನೂನು ಕ್ರಮ ಜರುಗಿಸಿ ಕೂಡಲೇ ಬಂಧಿಸಬೇಕೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಒತ್ತಾಯಿಸಿದೆ.

ಈ ಕುರಿತು ಘಟಕದ ವತಿಯಿಂದ ಅಧ್ಯಕ್ಷ ಪಿ.ಎ. ಹನೀಫ್ ನೇತೃತ್ವದಲ್ಲಿ ಮಡಿಕೇರಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮತ್ತು ಗೃಹ ಸಚಿವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.ಮಂಡ್ಯದಲ್ಲಿ ಇತ್ತೀಚೆಗೆ ನಡೆದ ಹನುಮ ಸಂಕೀರ್ತನ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಹಿಂದೂ ಸಂಘಟನೆ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರು ಮುಸ್ಲಿಂ ಮಹಿಳೆಯರ ಬಗ್ಗೆ ತೀರಾ ತುಚ್ಚವಾಗಿ ಮಾತನಾಡಿರುವುದು ಈಗಾಗಲೇ ಎಲ್ಲಾ ಪ್ರಮುಖ ಮಾಧ್ಯಮಗಳಲ್ಲಿ ಪ್ರಕಟಗೊಂಡಿದೆ. ಕಲ್ಲಡ್ಕ ಪ್ರಭಾಕರ ಭಟ್ ಆಡಿರುವ ಈ ಅವಹೇಳನಾಕಾರಿ ಮಾತುಗಳನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ತೀವ್ರವಾಗಿ ಖಂಡಿಸುತ್ತದೆ ಎಂದರು.ಮನವಿ ಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಪ್ರಮುಖರಾದ ಕೆ.ಎಂ. ಸಯ್ಯದ್ ಬಾವಾ ಮತ್ತು ಕೋಳುಮಂಡ ರಫೀಕ್ ಇದ್ದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ