ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಸಮಸ್ಯೆಗಳ ಅನಾವರಣ

KannadaprabhaNewsNetwork |  
Published : Jul 06, 2024, 12:47 AM IST
ಚಿತ್ರ :  5ಎಂಡಿಕೆ2 : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ವಿದ್ಯಾರ್ಥಿಗಳ ಜತೆವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಚರ್ಚಿಸಿದರು.  | Kannada Prabha

ಸಾರಾಂಶ

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜಿಗೆ ಶುಕ್ರವಾರ ಭೇಟಿ ನೀಡಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. ಈ ಸಂದರ್ಭ ಸಂಸ್ಥೆಯ ಹಲವು ಸಮಸ್ಯೆಗಳು ಅನಾವರಣಗೊಂಡಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜಿಗೆ ಶುಕ್ರವಾರ ಭೇಟಿ ನೀಡಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. ಈ ಸಂದರ್ಭ ಸಂಸ್ಥೆಯ ಹಲವು ಸಮಸ್ಯೆಗಳು ಅನಾವರಣಗೊಂಡಿತು.

ಆರಂಭದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಮಾತನಾಡಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ತುಂಬಾ ದೂರವಿದ್ದು, ಬಸ್ ಸೌಲಭ್ಯ ಸಮರ್ಪಕವಾಗಿಲ್ಲದೆ ಕಠಿಣ ಪರಿಸ್ಥಿತಿ ಪ್ರತಿನಿತ್ಯ ಎದುರಿಸುತ್ತಿದ್ದು, ಈ ಸಂಬಂಧ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಅಂತರ್ಜಾಲ ಸಂಪರ್ಕವಿಲ್ಲದೆ ಅಧ್ಯಯನ ಮತ್ತು ಮಾಹಿತಿ ಸಂಗ್ರಹಕ್ಕೆ ತುಂಬಾ ತೊಂದರೆಯಾಗಿದೆ. ಈಗಿರುವ ವೈಫೈ ಸೇವೆ ಒಂದು ಅಥವಾ ಎರಡು ಕೊಠಡಿಗೆ ಸಾಲುವುದಿಲ್ಲ. ಆದ್ದರಿಂದ ಟವರ್ ನಿರ್ಮಾಣ ಮಾಡಬೇಕು ಎಂದು ವಿದ್ಯಾರ್ಥಿಗಳು ಮನವಿ ಮಾಡಿದರು.

ಈ ಕುರಿತು ಪ್ರತಿಕ್ರಿಯಿಸಿದ ಸಚಿವ, ಸದ್ಯ ವೈಫೈ ಸೇವೆ ವಿಸ್ತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬಸ್ ಸೌಲಭ್ಯವನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ವೈದ್ಯಕೀಯ ಕಾಲೇಜಿನ ಆವರಣದಲ್ಲಿ ಆಟದ ಮೈದಾನ ಇಲ್ಲದೆ ತೊಂದರೆಯಾಗಿದೆ ಎಂದು ವಿದ್ಯಾರ್ಥಿಯೊಬ್ಬರು ಗಮನ ಸೆಳೆದರು. ಜಾಗ ವಿಶಾಲವಾಗಿ ಇರದಿರುವುದರಿಂದ ಸದ್ಯ ಬಾಸ್ಕೆಟ್‌ ಬಾಲ್‌, ವಾಲಿಬಾಲ್ ಇಂತಹ ಆಟಗಳನ್ನು ಆಡಲು ಅಗತ್ಯ ಜಾಗ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಮಧ್ಯ ಪ್ರವೇಶಿಸಿ ಮಾತನಾಡಿದ ಶಾಸಕ ಡಾ.ಮಂತರ್ ಗೌಡ, ಕಾಲೇಜಿನ ಆವರಣದಲ್ಲಿ ಕನಿಷ್ಠ 100*100 ಆಟದ ಮೈದಾನ ನಿರ್ಮಾಣ ಮಾಡಲು ಅಗತ್ಯ ಸಹಕಾರ ನೀಡಲಾಗುವುದು ಎಂದರು.

ವೈದ್ಯಕೀಯ ಕಾಲೇಜಿನಲ್ಲಿ ಕುಡಿಯುವ ನೀರಿನ ಸಂಪರ್ಕ ಸಮರ್ಪಕವಾಗಿಲ್ಲ. ಬೇಸಿಗೆ ಸಂದರ್ಭದಲ್ಲಂತೂ ತುಂಬಾ ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ವಿದ್ಯಾರ್ಥಿನಿಯೊಬ್ಬರು ತಿಳಿಸಿದರು.

ಈ ಸಂದರ್ಭ ಮಾತನಾಡಿದ ಡಾ.ಮಂತರ್ ಗೌಡ ಅವರು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವುದರಿಂದ ಜಲಜೀವನ್ ಮಿಷನ್ ಯೋಜನೆಯಡಿ ನಲ್ಲಿ ನೀರು ಸಂಪರ್ಕ ಕಲ್ಪಿಸಲಾಗಿದೆ. ಹೊಸ ಬೋರ್‌ವೆಲ್ ನಾಳೆಯೇ ಕೊರೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಯೊಬ್ಬರು ಮಾತನಾಡಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಿದ್ಯಾರ್ಥಿ ನಿಲಯ ಸ್ಥಾಪಿಸಬೇಕು. ವಿದ್ಯಾರ್ಥಿ ನಿಲಯ ಇಲ್ಲದೆ ತುಂಬಾ ತೊಂದರೆಯಾಗಿದೆ ಎಂದರು.

ಡಾ.ಮಂತರ್ ಗೌಡ ಮಾತನಾಡಿ, ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಬಿಸಿಎಂ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶಕ್ಕೆ ಅವಕಾಶ ಮಾಡಲಾಗಿದೆ ಎಂದರು.

ವೇತನ ಪಾವತಿ ಸಮಸ್ಯೆ:

ಎನ್‌ಎಚ್‌ಎಂನಡಿ ಕಳೆದ ನಾಲ್ಕು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎಂದು ವೈದ್ಯರೊಬ್ಬರು ಸಚಿವರ ಗಮನಕ್ಕೆ ತಂದರು. ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕ ಸುಜಾತಾ ರಾಥೋಡ್ ಅವರು ವೇತನ ಪಾವತಿಗೆ ಅಗತ್ಯ ಕ್ರಮವಹಿಸಲಾಗುವುದು ಎಂದರು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಡಾ. ಪಾಟೀಲ ಅವರು ಈ ಬಾರಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನದಲ್ಲಿ 29 ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶವಾಗಿದೆ ಎಂದರು.

ನೀಟ್ ಸಂಬಂಧ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು ವಿದ್ಯಾರ್ಥಿಗಳ ಜೊತೆ ಯಾರೂ ಸಹ ಚೆಲ್ಲಾಟ ಆಡಬಾರದು. ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವುದು ಪ್ರತಿಯೊಬ್ಬರದ್ದಾಗಿದೆ. ಈ ಹಿಂದೆ ರಾಜ್ಯದಲ್ಲಿ ಸಿಇಟಿ ಮೂಲಕ ಇಡೀ ದೇಶದಲ್ಲಿಯೇ ಮಾದರಿಯಾಗಿ ಪರೀಕ್ಷೆ ನಡೆಸಲಾಗುತ್ತಿತ್ತು. ಈಗ ಕೇಂದ್ರದಲ್ಲಿ ಸುಪ್ರೀಂಕೋರ್ಟ್ ನಿರ್ದೇಶನದಂತೆ ಒಂದೇ ಪರೀಕ್ಷೆ ಮಾಡಲಾಗುತ್ತಿದೆ ಎಂದರು.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜಿಗೆ ಸೂಕ್ತ ಬಂದೋ ಬಸ್ತ್ ಮಾಡಲಾಗಿದೆ. ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ಆದಷ್ಟು ಶೀಘ್ರ ಪರಿಹರಿಸಲಾಗುವುದು. ಉತ್ತಮ ಕ್ಯಾಂಪಸ್ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಸಂಸ್ಥೆಯ ಕಾಲೇಜಿನ ಆವರಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯಡಿ ‘ಔಷಧೀಯ ಸಸ್ಯವನ’ ನಿರ್ಮಾಣಕ್ಕೆ ಸಚಿವರು ಚಾಲನೆ ನೀಡಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಗ್ರಾ.ಪಂ.ಸದಸ್ಯ ಜಾನ್ಸನ್ ಪಿಂಟೋ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಕೊಡಗು ವೈದ್ಯಕೀಯ ಸಂಸ್ಥೆಯ ನಿರ್ದೇಶಕ ವಿಶಾಲ್ ಕುಮಾರ್, ಡಾ.ನಂಜುಂಡಯ್ಯ, ಡಾ.ಸತೀಶ್ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುದಾನಿತ ಪಿಯು ಕಾಲೇಜು ನಿವೃತ್ತರ ಗಳಿಕೆ ರಜೆಗೆ 30 ಕೋಟಿ ರು.
ಮೇಲ್ಮನೆಗೆ ಪತ್ರಕರ್ತರ ಕರೆತರಲು ಎಂಎಲ್‌ಸಿ ಆಫರ್‌!