ಕೊಡಗು ವಿಶ್ವವಿದ್ಯಾಲಯದ ಸ್ನಾತಕ ಪದವಿಗಳ ಫಲಿತಾಂಶ ಪ್ರಕಟ

KannadaprabhaNewsNetwork |  
Published : Feb 20, 2025, 12:48 AM IST
ಚಿತ್ರ : 19ಎಂಡಿಕೆ2 :  ಪರೀಕ್ಷಾ ಫಲಿತಾಂಶವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು ಆನ್ಲೈನ್ ತಂತ್ರಾಂಶದಲ್ಲಿ ಪ್ರಕಟಿಸಿದರು. | Kannada Prabha

ಸಾರಾಂಶ

ಪರೀಕ್ಷೆಗಳು ಮುಗಿದ ಹನ್ನೆರಡು ದಿನಗಳಲ್ಲಿ ಫಲಿತಾಂಶವನ್ನು ಪ್ರಕಟಿಸುವ ಮೂಲಕ ಅತೀ ಕಡಿಮೆ ಅವಧಿಯಲ್ಲಿ ಪರೀಕ್ಷೆಗಳನ್ನು ನಡೆಸಿ ಫಲಿತಾಂಶವನ್ನು ಪ್ರಕಟಿಸಿದ ಕೀರ್ತಿಗೆ ಕೊಡಗು ವಿಶ್ವವಿದ್ಯಾಲಯ ಭಾಜನವಾಗಿದೆ.

ಕನ್ನಡಪ್ರಭ ವಾರ್ತೆ ಕುಶಾಲನಗರ

ಕೊಡಗು ವಿಶ್ವವಿದ್ಯಾಲಯದ ಘಟಕ ಮತ್ತು ಸಂಯೋಜಿತ ಮಹಾವಿದ್ಯಾಲಯಗಳ 2024-25ನೇ ಶೈಕ್ಷಣಿಕ ಸಾಲಿನ ಬಿ.ಎ, ಬಿಕಾಂ, ಬಿಬಿಎ, ಬಿಸಿಎ ಮತ್ತು ಬಿಎಸ್ಸಿ ಪದವಿಗಳ ಪ್ರಥಮ ಮತ್ತು ತೃತೀಯ ಸೆಮಿಸ್ಟರ್‌ನ (ಆವರ್ತನ ಮತ್ತು ಪುನರಾವರ್ತನ) ಪರೀಕ್ಷೆಗಳು ಮುಗಿದ ಹನ್ನೆರಡು ದಿನಗಳಲ್ಲಿ ಫಲಿತಾಂಶವನ್ನು ಪ್ರಕಟಿಸುವ ಮೂಲಕ ಅತೀ ಕಡಿಮೆ ಅವಧಿಯಲ್ಲಿ ಪರೀಕ್ಷೆಗಳನ್ನು ನಡೆಸಿ ಫಲಿತಾಂಶವನ್ನು ಪ್ರಕಟಿಸಿದ ಕೀರ್ತಿಗೆ ಕೊಡಗು ವಿಶ್ವವಿದ್ಯಾಲಯ ಭಾಜನವಾಗಿದೆ.

ಕರ್ನಾಟಕ ಸರ್ಕಾರದ ರಾಜ್ಯ ಶಿಕ್ಷಣ ನೀತಿ -2024ರ ಅಡಿಯಲ್ಲಿ ಕೊಡಗು ವಿಶ್ವವಿದ್ಯಾಲಯದಲ್ಲಿ ಪ್ರವೇಶಾತಿ ಪಡೆದ ಪ್ರಥಮ ವರ್ಷದ ವಿವಿಧ ಸ್ನಾತಕ ಪದವಿಗಳ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿದ ಪ್ರಥಮ ವಿಶ್ವವಿದ್ಯಾಲಯ ಎಂಬ ಹಿರಿಮೆಗೂ ಕೊಡಗು ವಿಶ್ವವಿದ್ಯಾಲಯವು ಪಾತ್ರವಾಗಿದೆ. ಈ ಹಿಂದೆಯೂ ಕೂಡ ಕೊಡಗು ವಿಶ್ವವಿದ್ಯಾಲಯವು ಸ್ಥಾಪನೆಯಾದ ಪ್ರಥಮ ವರ್ಷದಲ್ಲಿ ಪ್ರಥಮ ಸೆಮಿಸ್ಟರ್‌ನ ಸ್ನಾತಕ ಪದವಿ ಪರೀಕ್ಷೆಗಳು ಮುಗಿದ 20 ದಿನಗಳೊಳಗೆ ಫಲಿತಾಂಶವನ್ನು ಪ್ರಕಟಿಸಬೇಕು ಎಂಬ ಯುಜಿಸಿಯ ನಿರ್ದೇಶನದಂತೆ ಕೇವಲ ಒಂದು ವಾರದಲ್ಲಿ ಫಲಿತಾಂಶವನ್ನು ಪ್ರಕಟಿಸುವ ಮೂಲಕ ಸಾರ್ವಜನಿಕ ಮೆಚ್ಚುಗೆಗೆ ಪಾತ್ರವಾಗಿತ್ತು.

ಇದೇ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ನಡೆದ ಪರೀಕ್ಷೆಯಲ್ಲಿ ಕೊಡಗಿನ 22 ಕಾಲೇಜುಗಳ ಸುಮಾರು 4000 ವಿದ್ಯಾರ್ಥಿಗಳು ಹಾಜರಾಗಿದ್ದರು.

ಕೊಡಗು ವಿಶ್ವವಿದ್ಯಾಲಯದ ಸ್ನಾತಕ ವಿದ್ಯಾರ್ಥಿಗಳ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಪರೀಕ್ಷೆಗಳ ಮೌಲ್ಯಮಾಪನ ಪ್ರಕ್ರಿಯೆಯನ್ನು ಘಟಕ ಮಹಾವಿದ್ಯಾಲಯವಾಗಿರುವ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನಲ್ಲಿ ವ್ಯವಸ್ಥಿತವಾಗಿ ಮೌಲ್ಯಮಾಪನ ಕೇಂದ್ರವನ್ನು ಸಿದ್ಧಪಡಿಸಿಕೊಂಡು, ಜಿಲ್ಲೆಯ ವಿವಿಧ ಸ್ನಾತಕ ಪದವಿ ಕಾಲೇಜುಗಳ ವಿಷಯವಾರು ಮೌಲ್ಯಮಾಪಕರು ಸಕ್ರಿಯವಾಗಿ ಭಾಗವಹಿಸಿ ಮೌಲ್ಯಮಾಪನ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.

ಸೆಮಿಸ್ಟರ್ ಪರೀಕ್ಷೆಗಳಿಗೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳನ್ನು ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (UUMS) ಮೂಲಕ ಯಶಸ್ವಿಯಾಗಿ ನಡೆಸಲಾಗಿದ್ದು, ಸ್ನಾತಕ ಪದವಿ ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶವನ್ನು UUCMS ಅಥವಾ ಕೊಡಗು ವಿಶ್ವವಿದ್ಯಾಲಯದ ವೆಬ್‌ಸೈಟ್ KUK.Karnataka.gov.in ಮುಖಾಂತರ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಮೂಲಕ ನೋಡಲು ಲಭ್ಯವಿದೆ.

ಪರೀಕ್ಷಾ ಫಲಿತಾಂಶವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು ಆನ್ಲೈನ್ ತಂತ್ರಾಂಶದಲ್ಲಿ ಪ್ರಕಟಿಸಿದರು.

ಇದೇ ಸಂದರ್ಭದಲ್ಲಿ ಕೊಡಗು ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಆದ ಡಾ. ಸುರೇಶ್ ಎಂ., ಕೊಡಗು ವಿವಿ ಪರೀಕ್ಷಾಂಗದ ವಿಶೇಷಾಧಿಕಾರಿ ದ ಪ್ರೊ. ರವಿಶಂಕರ್ ಎಂ ಎನ್ ಉಪಸ್ಥಿತರಿದ್ದರು.

PREV

Recommended Stories

ನೀಲಿ ಮೊಟ್ಟೆ ಇಟ್ಟ ಚನ್ನಗಿರಿಯ ನಾಟಿ ಕೋಳಿ: ಸ್ಥಳೀಯರಲ್ಲಿ ತೀವ್ರ ಕುತೂಹಲ
ಸಿಗಂದೂರಿನಲ್ಲಿ ವಾಟರ್ ಏರೋಡ್ರೋಮ್: ವಿಮಾನ ಟೇಕಾಫ್‌, ಲ್ಯಾಂಡಿಂಗ್‌! ಪ್ರವಾಸೋದ್ಯಮಕ್ಕೆ ಹೊಸ ಹೆಜ್ಜೆ?