ಕೋಟೆಕಣಿ ದರೋಡೆ: ಕೃತ್ಯ ನಡೆದ ಐದೇ ಗಂಟೆಯಲ್ಲಿ ಆರೋಪಿಗಳ ಬಂಧನ

KannadaprabhaNewsNetwork |  
Published : Jul 10, 2024, 12:42 AM IST
11 | Kannada Prabha

ಸಾರಾಂಶ

ಆರೋಪಿಗಳಿಂದ ಮಂಗಳೂರು ನಗರದಲ್ಲಿ ಸುಲಿಗೆ ಮಾಡಿದ್ದ ಎಲ್ಲ ಚಿನ್ನ ಹಾಗೂ ವಜ್ರದ ಆಭರಣಗಳು, ವಾಚ್‌ಗಳು ಹಣವನ್ನು ವಶಪಡಿಸಿ ಉರ್ವಾ ಪೊಲೀಸ್ ಅಧಿಕಾರಿಗಳ ವಶಕ್ಕೆ ನೀಡಲಾಗಿದೆ. ಉರ್ವ ಪೊಲೀಸರು ಮುಂದಿನ ತನಿಖೆ ನಡೆಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು ನಗರದ ಕೋಟೆಕಣಿಯಲ್ಲಿ ಮಂಗಳವಾರ ಬೆಳಗ್ಗಿನ ಜಾವ ಮನೆ ದರೋಡೆ ನಡೆಸಿದ ನಾಲ್ವರು ಆರೋಪಿಗಳನ್ನು (ಚಡ್ಡಿ ಗ್ಯಾಂಗ್) ಘಟನೆ ನಡೆದ ಐದೇ ಗಂಟೆಯಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಧ್ಯಪ್ರದೇಶದ ಗುಣಾ ಜಿಲ್ಲೆಯ ರಗೋಗರ್ ತಾಲೂಕು ವಿಶ್ವನಗರದ ರಾಜು ಸಿಂಗ್ವಾನಿಯ (24), ಭೂಪಾಲ್‌ನ ಗುಲಾಬ್ಗಂಜ್‌ನ ಮಯೂರ್ (30), ಆಶೋಕನಗರ ಮಾಧವ್‌ಗಡ್ ನಿವಾಸಿ ಬಾಲಿ (22), ಗುಣಾ ಜಿಲ್ಲೆಯ ವಿಕ್ಕಿ (21) ಬಂಧಿತರು. ಪ್ರಕರಣದ ವಿವರ: ಬರ್ಮುಡಾ ಚಡ್ಡಿ ಮತ್ತು ಬನಿಯನ್ ಧರಿಸಿದ ಸುಮಾರು 30 ರಿಂದ 40 ವರ್ಷ ಪ್ರಾಯದ 4 ಮಂದಿ ಯುವಕರು (ಚೆಡ್ಡಿ ಗ್ಯಾಂಗ್) ದೇರೆಬೈಲು ಗ್ರಾಮದ ಕೋಟೆಕಣಿ ರಸ್ತೆಯ ವಿಕ್ಟರ್ ಮೆಂಡೋನ್ಸಾ ಎಂಬವರ ಮನೆಯ ಕಿಟಕಿಯ ಗ್ರಿಲ್ ತುಂಡರಿಸಿ ಒಳ ಪ್ರವೇಶಿಸಿತ್ತು. ವಿಕ್ಟರ್ ಮೆಂಡೋನ್ಸಾ ಹಾಗೂ ಅವರ ಪತ್ನಿ ಪ್ಯಾಟ್ರಿಸಿಯಾ ಮೆಂಡೋನ್ಸಾ ಅವರಿಗೆ ಹಲ್ಲೆ ನಡೆಸಿ, ಬೊಬ್ಬೆ ಹಾಕದಂತೆ ಹಾಗೂ ಫೋನ್ ಮಾಡದಂತೆ ತಂಡ ಬೆದರಿಸಿತ್ತು. ಮನೆಯಲ್ಲಿದ್ದ 3 ಮೊಬೈಲ್ ಫೋನ್‌ಗಳನ್ನು ನೆಲಕ್ಕೆ ಬಡಿದು ಜಖಂಗೊಳಿಸಿ ಕಪಾಟಿನ ಲಾಕರ್ ಒಳಗೆ ಇರಿಸಿದ್ದ ಸುಮಾರು 12 ಲಕ್ಷ ರು. ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣ, ಸ್ಯಾಮ್ ಸಂಗ್ ಮೊಬೈಲ್ ಫೋನ್ ಮತ್ತು 1 ಲಕ್ಷ ರು. ಮೌಲ್ಯದ 10 ಬ್ರಾಂಡೆಡ್ ವಾಚ್‌ಗಳು, 3,000 ರು. ನಗದು ಸುಲಿಗೆ ಮಾಡಿ, ಮನೆಯ ವರಾಂಡದಲ್ಲಿದ್ದ ಕಾರಿನ ಸಮೇತ ಪರಾರಿಯಾಗಿದ್ದರು.ಹೀಗೆ ನಡೆಯಿತು ಕಾರ್ಯಾಚರಣೆ: ಪ್ರಕರಣ ನಡೆದ ಮಾಹಿತಿ ಬಂದ ಕೂಡಲೇ ಉರ್ವಾ ಠಾಣೆಯ ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿ ತಕ್ಷಣ ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ ಆರೋಪಿಗಳು ಕಾರಿನೊಂದಿಗೆ ಪರಾರಿಯಾಗಿದ್ದ ಮಾಹಿತಿಯನ್ನು ನಗರ ನಿಸ್ತಂತು ಕೊಠಡಿಗೆ ನೀಡಿತ್ತು. ಮೂಲ್ಕಿ ಬಸ್ ನಿಲ್ದಾಣದ ಸಮೀಪ ನಿಲ್ಲಿಸಿದ್ದ ಕಳವು ಮಾಡಲ್ಪಟ್ಟ ಕಾರನ್ನು ಪತ್ತೆಮಾಡಿ ವಶಕ್ಕೆ ಪಡೆದು ಸ್ಥಳದ ಆಸುಪಾಸಿನಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಕೆ.ಎಸ್.ಅರ್.ಟಿ.ಸಿ ಬಸ್ಸಿನಲ್ಲಿ ಶಂಕಿತ ಆರೋಪಿಗಳು ಮಂಗಳೂರು ಕಡೆಗೆ ಪ್ರಯಾಣಿಸಿದ್ದು ಕಂಡು ಬಂದಿತ್ತು. ಬಸ್ ಸಿಬ್ಬಂದಿಯ ಸಹಕಾರ: ಕೆ.ಎಸ್.ಆರ್‌.ಟಿ.ಸಿ ಅಧಿಕಾರಿಗಳನ್ನು ಸಂಪರ್ಕಿಸಿ, ಬೆಳಗಿನ ಜಾವ ಮೂಲ್ಕಿ ಕಡೆಯಿಂದ ಮಂಗಳೂರಿಗೆ ಬಂದ ಕೆ.ಎಸ್.ಆರ್.ಟಿ.ಸಿ ಬಸ್‌ಗಳ ಮಾಹಿತಿ ಪಡೆಯಲಾಯಿತು. ಬಾಗಲಕೋಟೆ ಕಡೆಯಿಂದ ಮಂಗಳೂರಿಗೆ ಬಂದ ಕೆ.ಎಸ್.ಅರ್.ಟಿ.ಸಿ ಬಸ್‌ನ ನಿರ್ವಾಹಕರು ಅವರ ಬಸ್ಸಿನಲ್ಲಿ ಮೂಲ್ಕಿಯಿಂದ 4 ಮಂದಿ ಒಟ್ಟಿಗೆ ಪ್ರಯಾಣಿಸಿದ ಮಾಹಿತಿ ತಿಳಿಸಿದ್ದಾರೆ. ಆ ವ್ಯಕ್ತಿಗಳು ಬೆಂಗಳೂರಿಗೆ ಹೋಗುವ ಬಸ್ಸಿನ ಬಗ್ಗೆ ವಿಚಾರಿಸಿದ್ದಾಗಿ ಕಂಡಕ್ಟರ್‌ ನೀಡಿದ ಮಾಹಿತಿಯಂತೆ ಪೊಲೀಸರು ಮಾಹಿತಿ ಕಲೆಹಾಕಲು ಆರಂಭಿಸಿದರು. ಮಂಗಳೂರಿನಿಂದ ಬೆಂಗಳೂರಿಗೆ ಹೋದ ಬಸ್ಸಿನ ಬಗ್ಗೆ ವಿವರ ಪಡೆದು ಆ ಬಸ್ಸಿನ ನಿರ್ವಾಹಕನನ್ನು ಸಂಪರ್ಕಿಸಿ ಆತ ನೀಡಿದ ಮಾಹಿತಿಯಂತೆ ವಿಷಯವನ್ನು ಹಾಸನ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ತಿಳಿಸಲಾಯಿತು.

ಸಕಲೇಶಪುರ ಡಿವೈಎಸ್ಪಿ, ಸಿಪಿಸಿ ಹಾಗೂ ಸಿಬ್ಬಂದಿ ತಂಡ ಸಕಲೇಶಪುರ ಸಮೀಪ ಬಸ್‌ ತಡೆದು ನಿಲ್ಲಿಸಿ ಅದರಲ್ಲಿ ಪ್ರಯಾಣಿಸುತ್ತಿದ್ದ 4 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅವರು ಕೃತ್ಯವೆಸಗಿದ ಬಗ್ಗೆ ಒಪ್ಪಿದ್ದರು.

ಅವರ ವಶದಲ್ಲಿದ್ದ ಮಂಗಳೂರು ನಗರದಲ್ಲಿ ಸುಲಿಗೆ ಮಾಡಿದ್ದ ಎಲ್ಲ ಚಿನ್ನ ಹಾಗೂ ವಜ್ರದ ಆಭರಣಗಳು, ವಾಚ್‌ಗಳು ಹಣವನ್ನು ವಶಪಡಿಸಿ ಉರ್ವಾ ಪೊಲೀಸ್ ಅಧಿಕಾರಿಗಳ ವಶಕ್ಕೆ ನೀಡಲಾಗಿದೆ. ಉರ್ವ ಪೊಲೀಸರು ಮುಂದಿನ ತನಿಖೆ ನಡೆಸಲಿದ್ದಾರೆ.

ಈ ಆರೋಪಿಗಳ ಬಂಧನಕ್ಕೆ ನೆರವಾದ ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಪೊಲೀಸರು, ವಿಭಾಗದ ಅಧಿಕಾರಿಗಳು ಹಾಗೂ ನಾಗರಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

PREV

Recommended Stories

ಬಾಗಲಕೋಟೆ ತೋಟಗಾರಿಕಾ ವಿಜ್ಞಾನ ವಿವಿಗೆ ಅನುದಾನ: ಸಚಿವ
ಸಂಭ್ರಮದ ಮೌನೇಶ್ವರ ಜಾತ್ರಾ ಮಹೋತ್ಸವ