ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಸಿಸಿ ಟಿವಿ ಕ್ಯಾಮೆರಾ, ಜಾಮರ್ ಅಳವಡಿಕೆ
ಭಾನುವಾರ ಇಲ್ಲಿಯ 18 ಕೇಂದ್ರಗಳಲ್ಲಿ ಎರಡು ಹಂತದಲ್ಲಿ ನಡೆದ ಕೆಪಿಎಸ್ಸಿ ಸ್ಪರ್ಧಾತ್ಮಕ ಪರೀಕ್ಷೆಗಳು ಪೊಲೀಸ್ ಬಿಗಿ ಭದ್ರತೆಯಲ್ಲಿ ಸುವ್ಯವಸ್ಥಿತ ಹಾಗೂ ಪಾರದರ್ಶಕವಾಗಿ ನಡೆದವು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ತಿಳಿಸಿದರು.
ಪರೀಕ್ಷಾ ಕೇಂದ್ರವಾದ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ, ಪರೀಕ್ಷಾ ವ್ಯವ್ಯಸ್ಥೆ ಪರಿಶೀಲಿಸಿ ಮಾತನಾಡಿದ ಅವರು, ಅಭ್ಯರ್ಥಿಗಳು ತರುವ ಬ್ಯಾಗ್‌ಗಳನ್ನು ಮೆಟಲ್ ಡಿಟೆಕ್ಟರ್ ಮೂಲಕ ಕಡ್ಡಾಯವಾಗಿ ತಪಾಸಣೆ ನಡೆಸಲಾಯಿತು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪೊಲೀಸ್ ಸಿಬ್ಬಂದಿ ನಿಯೋಜಿಸಿ ಅನಧಿಕೃತ ವ್ಯಕ್ತಿಗಳು ಪ್ರವೇಶಿಸದಂತೆ ಎಚ್ಚರಿಕೆ ವಹಿಸಲಾಗಿತ್ತು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಲಾದ ಸಿಬ್ಬಂದಿಗೆ ಜಿಲ್ಲಾಧಿಕಾರಿ ಕಚೇರಿಯಿಂದ ಗುರುತಿನ ಚೀಟಿ ನೀಡಲಾಗಿದ್ದು, ಗುರುತಿನ ಚೀಟಿ ಹೊಂದಿರುವ ಅಧಿಕೃತ ಸಿಬ್ಬಂದಿಗೆ ಮಾತ್ರ ಕ್ಯಾಂಪಸ್ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು.ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಸಿಸಿ ಟಿವಿ ಕ್ಯಾಮೆರಾ ಹಾಗೂ ಜಾಮರ್ ಅಳವಡಿಸಲಾಗಿತ್ತು. ಪ್ರತಿ ಕೊಠಡಿಗೆ ಇಬ್ಬರು ಮೇಲ್ವಿಚಾರಕರನ್ನು ನಿಯೋಜಿಸಿತ್ತು. ಪೊಲೀಸ್ ಸಿಬ್ಬಂದಿಯಿಂದಲೂ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳ ತಪಾಸಣಾ ಕಾರ್ಯ ನಡೆಯಿತು ಎಂದರು.
ಪ್ರತಿ ಪರೀಕ್ಷಾ ಕೇಂದ್ರದಿಂದ ಒಟ್ಟು ನಾಲ್ಕು ಬಂಡಲ್‌ಗಳನ್ನು ಕಡ್ಡಾಯವಾಗಿ ಸಂಗ್ರಹಿಸಿಲು ತಿಳಿಸಲಾಗಿತ್ತು. ಅವುಗಳಲ್ಲಿ ಎರಡು ಬಂಡಲ್‌ಗಳನ್ನು ಸ್ಕ್ಯಾನಿಂಗ್ ಕೇಂದ್ರಕ್ಕೆ, ಒಂದು ಬಂಡಲ್‌ನ್ನು ಜಿಲ್ಲಾಧಿಕಾರಿ ಕಚೇರಿಗೆ ಹಾಗೂ ಮತ್ತೊಂದು ಬಂಡಲ್‌ನ್ನು ಡಿಡಿಪಿಒ ಕಚೇರಿಗೆ ತಲುಪಿಸುವ ಜವಾಬ್ದಾರಿ ಸಹ ಅಧಿಕಾರಿಗಳು ನೀಡಲಾಗಿತ್ತು ಎಂದರು.
ಪರೀಕ್ಷೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದರೆ ಸಂಬಂಧಪಟ್ಟವರ ವಿರುದ್ಧ ಶಿಸ್ತಿನ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿತ್ತು. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ತಪಾಸಣಾ ಕಾರ್ಯ ವ್ಯವಸ್ಥೆ ಮಾಡಿದ್ದು, ಬಣ್ಣದ ಕೋಡಿಂಗ್ ಹೊಂದಿರುವ ಗುಣಮಟ್ಟದ ಹ್ಯಾಂಡ್‌ಹೆಲ್ಡ್ ಮೆಟಲ್ ಡಿಟೆಕ್ಟರ್‌ಗಳನ್ನು ಬಳಸಲಾಗಿದೆ.