ಕನ್ನಡಪ್ರಭ ವಾರ್ತೆ ಹಾಸನ
ನಗರದ ವಿಜಿತ ಮಹಿಳೆಯರ ಸರ್ಕಾರಿ ಪದವಿಪೂರ್ವ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಕೆ. ಎಸ್. ಲತಾ ಕುಮಾರಿ ಅವರು ನಂತರ ಮಾಧ್ಯಮದೊಂದಿಗೆ ಮಾತನಾಡಿ, ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು ೬,೪೬೮ ಅಭ್ಯರ್ಥಿಗಳು ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಲಾಗಿತ್ತು. ನಗರದ ಸರ್ಕಾರಿ ವಿಜ್ಞಾನ ಕಾಲೇಜು ಸೇರಿದಂತೆ ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತೆ ಹಾಗೂ ಅಚ್ಚುಕಟ್ಟಾದ ವ್ಯವಸ್ಥೆ ಮಾಡಲಾಗಿದೆ. ಅಭ್ಯರ್ಥಿಗಳಿಗೆ ಯಾವುದೇ ಗೊಂದಲ ಉಂಟಾಗದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರವೇಶಕ್ಕೂ ಮುನ್ನ ಅಭ್ಯರ್ಥಿಗಳ ಬ್ಯಾಗ್‌ಗಳನ್ನು ಪ್ರತ್ಯೇಕವಾಗಿ ಇರಿಸುವ ವ್ಯವಸ್ಥೆ, ತಪಾಸಣೆ ಹಾಗೂ ಬಯೋಮೆಟ್ರಿಕ್ ಹಾಜರಾತಿ ದಾಖಲಿಸಿದ ಬಳಿಕ ಪ್ರವೇಶ ಪತ್ರ ಪರಿಶೀಲಿಸಿ ಪರೀಕ್ಷಾ ಕೊಠಡಿಗಳಿಗೆ ಕಳುಹಿಸಲಾಗುತ್ತಿದೆ. ಯಾವ ಮಹಡಿಯಲ್ಲಿ ಯಾವ ಕೊಠಡಿ ಇದೆ ಎಂಬುದರ ಕುರಿತು ಸ್ಪಷ್ಟ ಸೂಚನೆಗಳನ್ನು ಅಳವಡಿಸಿ ಅಭ್ಯರ್ಥಿಗಳಿಗೆ ಅನುಕೂಲ ಕಲ್ಪಿಸಲಾಗಿದೆ ಎಂದರು. ಬೆಳಿಗ್ಗೆ ೯.೫೦ರ ನಂತರ ಯಾವುದೇ ಅಭ್ಯರ್ಥಿಗಳಿಗೆ ಪ್ರವೇಶಕ್ಕೆ ಅವಕಾಶವಿರುವುದಿಲ್ಲ. ನಿಗದಿತ ಸಮಯಕ್ಕೆ ಎಲ್ಲ ಪ್ರವೇಶ ದ್ವಾರಗಳನ್ನು ಮುಚ್ಚಲಾಗಿದ್ದು, ಪೊಲೀಸ್ ಸಿಬ್ಬಂದಿ ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದಾರೆ. ಬೆಳಿಗ್ಗೆ ೧೦ರಿಂದ ಮಧ್ಯಾಹ್ನ ೧೨ರವರೆಗೆ ಮೊದಲ ಪತ್ರಿಕೆ ಹಾಗೂ ಮಧ್ಯಾಹ್ನ ೨ರಿಂದ ಸಂಜೆ ೪ರವರೆಗೆ ಎರಡನೇ ಪತ್ರಿಕೆ ನಡೆಯಲಿದೆ. ಒಎಂಆರ್ ಉತ್ತರ ಪತ್ರಿಕೆಗಳನ್ನು ವಿತರಿಸಿದ ಬಳಿಕ ಪ್ರಶ್ನೆಪತ್ರಿಕೆಗಳನ್ನು ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು. ಹಾಸನ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಪರೀಕ್ಷೆ ಅತ್ಯಂತ ಶಿಸ್ತುಬದ್ಧವಾಗಿ, ಶಾಂತಿಯುತವಾಗಿ ನಡೆಯುತ್ತಿದ್ದು, ಯಾವುದೇ ಸಣ್ಣಪುಟ್ಟ ಗೊಂದಲಗಳೂ ವರದಿಯಾಗಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಕೆಪಿಎಸ್ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ, ತಹಸೀಲ್ದಾರ್ ಗೀತಾ ಸೇರಿದಂತೆ ಇತರೆ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿ ಸಲಹೆ ನೀಡಿದರು.