ನ್ಯಾಯಾಂಗಕ್ಕೆ ಪೆನ್‌ಡ್ರೈವ್ ಪ್ರಕರಣ ಹಸ್ತಾಂತರಕ್ಕೆ ಕೆಆರ್‌ಎಸ್ ಆಗ್ರಹ । ಹಾಸನ ಚಲೋ ನಡೆಸಿ ಜಿಲ್ಲಾಡಳಿತಕ್ಕೆ ಮನವಿ
ಕನ್ನಡಪ್ರಭ ವಾರ್ತೆ ಹಾಸನಜಿಲ್ಲೆಯ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣವು ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಮಾನವನ್ನು ಹರಾಜು ಹಾಕಿದ್ದು, ಈ ಪ್ರಕರಣವನ್ನು ನ್ಯಾಯಾಂಗದ ಉಸ್ತುವಾರಿಯಲ್ಲಿ ತನಿಖೆ ನಡೆಸುವಂತೆ ಆಗ್ರಹಿಸಿ ಕೆಆರ್‌ಎಸ್ ಪಕ್ಷದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ‘ಅಬಲೆಯರನ್ನು ಗೌರವಿಸೋಣ-ಅತ್ಯಾಚಾರಿಗೆ ತಕ್ಕ ಶಾಸ್ತಿ ಮಾಡೋಣ’ ಎನ್ನುವ ಘೋಷಣೆಯೊಂದಿಗೆ ಹಾಸನ ಚಲೋ ನಡೆಸಿ ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಕೆಆರ್‌ಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಎಸ್.ಎಚ್.ಲಿಂಗೇಗೌಡ ಮಾತನಾಡಿ, ‘ಈ ಪ್ರಕರಣವು ರಾಜ್ಯದ ಇತಿಹಾಸದಲ್ಲಿ ಕಪ್ಪುಚುಕ್ಕೆಯಾಗಿ ದಾಖಲಾಗಲಿದೆ. ಲೈಂಗಿಕ ದೌರ್ಜನ್ಯ ನಡೆದಿರುವ ಇಂತಹ ಪ್ರಕರಣದಲ್ಲಿ ನ್ಯಾಯಯುತ ತನಿಖೆಯಾಗಿ ಅಪರಾಧಿಗಳಿಗೆ ಶಿಕ್ಷೆಯಾಗಬೇಕು. ಇಲ್ಲದಿದ್ದರೆ ವ್ಯವಸ್ಥೆಯ ವಿಫಲತೆ ಎಂದು ಇತಿಹಾಸದಲ್ಲಿ ದಾಖಲಾಗಲಿದೆ. ಮಹಿಳೆಯರಿಗೆ ರಕ್ಷಣೆ ನೀಡಬೇಕಾದವರು ಸೂಕ್ತ ವ್ಯವಸ್ಥೆಯು ಇಲ್ಲದಿರುವಂತಹ ಪರಿಸ್ಥಿತಿಯಲ್ಲಿ ಇದ್ದೇವೆ. ಮಹಿಳೆಯರಿಗೆ, ಅದರಲ್ಲೂ ಸರ್ಕಾರಿ ಅಧಿಕಾರಿಗಳೂ ದೌರ್ಜನ್ಯಕ್ಕೆ ಒಳಗಾಗಿದ್ದಾರೆ. ಅವರು ತಮ್ಮನ್ನು ರಕ್ಷಿಸಿಕೊಳ್ಳಲು ಸಾಧ್ಯವಿಲ್ಲದ ಸ್ಥಿತಿ ಇದೆ’ ಎಂದು ಕಳವಳ ವ್ಯಕ್ತಪಡಿಸಿದರು.‘ಇಂತಹ ಪರಿಸ್ಥಿತಿಯಲ್ಲಿ ಈ ಅವ್ಯವಸ್ಥೆಯನ್ನು ಸರಿಪಡಿಸುವುದು ಹಾಗೂ ನ್ಯಾಯಯುತ ತನಿಖೆಯನ್ನು ನಡೆಸವುದು, ಅದಕ್ಕೆ ಪೂರಕ ವಾತಾರಣವನ್ನು ನಿರ್ಮಿಸುವುದು ತಮ್ಮ ಜವಾಬ್ದಾರಿಯಾಗಿರುತ್ತದೆ. ಇಲ್ಲಿ ಕೇವಲ ಅತ್ಯಾಚಾರ ಮತ್ತು ದೌರ್ಜನ್ಯ ಮಾತ್ರವಲ್ಲದೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತರ ಗೌರವ ಕಾಪಾಡುವುದು, ಅದೇ ಸಂದರ್ಭದಲ್ಲಿ ಅವರು ಪೊಲೀಸರಿಗೆ ದೂರು ಮತ್ತು ಹೇಳಿಕೆಗಳನ್ನು ನೀಡಿ ಅಪರಾಧಿಗಳಿಗೆ ಶಿಕ್ಷೆಯಾಗುವಂತೆ ಮಾಡಬೇಕು. ಈ ಪ್ರಕರಣದಲ್ಲಿ ಅತ್ಯಾಚಾರಿಗಳು ಒಂದು ಪಕ್ಷದವರಾದರೆ ಅದನ್ನು ಬಹಿರಂಗ ಮಾಡಿದವರು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದವರು ಎಂದು ಬೆರಳು ಮಾಡಲಾಗುತ್ತಿದೆ. ಬಹಿರಂಗ ಮಾಡಿರುವವರು ಸರ್ಕಾರದಲ್ಲಿ ಉನ್ನತ ಅಧಿಕಾರ ಸ್ಥಾನದಲ್ಲಿರುವವರು ಎಂದು ಹೇಳಲಾಗುತ್ತಿದೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರು ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹವಾಗಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ಬಲವಾಗಿ ನಂಬಿಕೆಯಿರುವ ಕೆಆರ್‌ಎಸ್ ಪಕ್ಷವು ಸಿಬಿಐಗೆ ವಹಿಸಬೇಕು ಎನ್ನುವ ವಿಚಾರವನ್ನು ಬಲವಾಗಿ ವಿರೋಧಿಸುತ್ತದೆ. ಪ್ರಸ್ತುತ ಎಸ್‌ಐಟಿ ಮೂಲಕ ನಡೆಯುತ್ತಿರುವ ತನಿಖೆಯನ್ನು ನ್ಯಾಯಾಂಗದ ಅಡಿಯಲ್ಲಿ ನಡೆಸಲು ಆದೇಶಿಸಬೇಕು ಎಂದು ಒತ್ತಾಯಿಸುತ್ತೇವೆ’ ಎಂದು ಹೇಳಿದರು.
‘ಒಟ್ಟಾರೆ ನ್ಯಾಯಾಲಯಗಳಲ್ಲಿ ವಿಚಾರಣೆಗಳು ನಿಧಾನಗತಿಯಲ್ಲಿ ನಡೆಯುತ್ತಿದ್ದು, ಇದರಿಂದ ಪ್ರಕರಣದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ದೀರ್ಘಾವಧಿ ವಿಚಾರಣೆ ಸಂದರ್ಭದಲ್ಲಿ ಸಾಕ್ಷಿಗಳ ಮೇಲೆ ಒತ್ತಡ ಹೇರಿ ಅಪರಾಧಿಗಳು ತಪ್ಪಿಸಿಕೊಳ್ಳುತ್ತಿದ್ದಾರೆ. ಈ ಪ್ರಕರಣದಲ್ಲಿ ಈ ಪರಿಸ್ಥಿತಿ ಆಗಬಾರದು ಎಂದರೆ ತನಿಖೆ ಶೀಘ್ರವಾಗಿ ನಡೆಯಬೇಕು. ನ್ಯಾಯಾಲಯದಲ್ಲಿ ವಿಚಾರಣೆಯು ಕೂಡ ಅಷ್ಟೇ ತ್ವರಿತವಾಗಿ ಮುಗಿದು ಅಪರಾಧಿಗಳಿಗೆ ಶಿಕ್ಷೆಯಾಗಬೇಕು. ಇದು ಆಗಬೇಕಾದರೆ ಈ ಪ್ರಕರಣಕ್ಕಾಗಿ ದೈನಂದಿನ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಬೇಕು’ ಎಂದು ಆಗ್ರಹಿಸಿದರು.‘ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಇಂತಹ ಕೃತ್ಯಗಳು ಅವ್ಯಾಹತವಾಗಿ ನಡೆಯಲು ಸಾಧ್ಯವಾಗಿದೆ. ಇವರು ಆಯಕಟ್ಟಿನ ಸ್ಥಾನದಲ್ಲಿರುವ ಸಂದರ್ಭದಲ್ಲಿ ಸಂತ್ರಸ್ತರು ಧೈರ್ಯವಾಗಿ ಮುಂದೆ ಬಂದು ದೂರು ನೀಡುವುದು ಸಾಧ್ಯವಾಗುವುದಿಲ್ಲ. ಆದ್ದರಿಂದ, ಹಾಸನ ಜಿಲ್ಲೆಯಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಉನ್ನತ ಸ್ಥಾನದಲ್ಲಿರುವ ಅಧಿಕಾರಿಗಳನ್ನು ಮತ್ತು ತನಿಖೆಯ ಸಂದರ್ಭದಲ್ಲಿ ಅಪರಾಧದಲ್ಲಿ ಯಾವುದೇ ರೀತಿಯಲ್ಲಿ ಭಾಗಿಯಾಗಿದ್ದಾರೆ ಎಂದು ಗುರುತಿಸಲ್ಪಡುವ ಸರ್ಕಾರಿ ನೌಕರರನ್ನು ಹಾಸನ ಜಿಲ್ಲೆಯಿಂದ ತಕ್ಷಣವೇ ವರ್ಗಾವಣೆ ಮಾಡಬೇಕು. ಈ ಪ್ರಕರಣದ ಗಂಭೀರತೆಯನ್ನು ಮನಗಂಡು, ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.