ಕುಶಾಲನಗರ: ಸರ್ಕಾರವು ಸಾರ್ವಜನಿಕರ ಕುಂದುಕೊರತೆ ಆಲಿಸಿ ಸ್ಥಳದಲ್ಲಿಯೇ ಅಥವಾ ತ್ವರಿತಗತಿಯಲ್ಲಿ ಪರಿಹಾರ ನೀಡುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜನರ ಬಳಿಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತೆರಳಿ ಅವರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಪ್ರತಿ ಶನಿವಾರ ಪ್ರಜಾಸೇವಾ ಆಂದೋಲನ ಕಾರ್ಯಕ್ರಮ ನಡೆಸಲಾಗುತ್ತಿದೆ. ಜನ ಸೇವೆಯೇ ಜನಾರ್ದನ ಸೇವೆ ಎಂದು ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಸಾರ್ವಜನಿಕ ಕೆಲಸ ಮಾಡಬೇಕಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಮಾತನಾಡಿ, ಜನರ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲು ಸರ್ಕಾರದ ಪ್ರಜಾಸೇವಾ ಎಂಬ ವಿನೂತನ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಈ ಪ್ರಜಾಸೇವಾ ಕಾರ್ಯಕ್ರಮವನ್ನು ಸಕಾಲಕ್ಕೆ ಜೋಡಿಸಲಾಗಿದೆ. ಇದನ್ನು ಅಧಿಕಾರಿಗಳು ಅರ್ಥಮಾಡಿಕೊಳ್ಳಬೇಕು. ಸಮಯಕ್ಕೆ ಸರಿಯಾಗಿ ಸ್ಪಂದಿಸಬೇಕು ಮತ್ತು ಪರಿಹಾರ ಒದಗಿಸಬೇಕು. ಇದರ ಜವಬ್ದಾರಿ ಅರಿತುಕೊಂಡು ಈ ದೇಶದ ಕಾನೂನು ಮತ್ತು ಸಂವಿಧಾನ ಅಡಿಯಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು ಎಂದರು.ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಕಳೆದ ಅನೇಕ ವರ್ಷಗಳಿಂದ ಬಗೆಹರಿಸಲು ಸಾಧ್ಯವಾಗದಂತಹ ಜ್ವಲಂತ ಸಮಸ್ಯೆಗಳನ್ನು ಜನರ ಬಳಿಗೆ ಅಧಿಕಾರಿಗಳು ಹೋಗಿ ಪರಿಹರಿಸಬೇಕು ಎಂಬ ಉದ್ದೇಶದಿಂದ ಇಂತಹ ಜನೋಪಕಾರಿ ಪ್ರಜಾಸೇವಾ ಕಾರ್ಯಕ್ರಮವನ್ನು ಸರ್ಕಾರ ಜಾರಿಗೆ ತಂದಿದೆ ಎಂದರು. ಗ್ರಾಮೀಣ ಭಾಗದ ಜನರು ಹಾಗೂ ಅನಕ್ಷರಸ್ಥ ಸಾರ್ವಜನಿಕ ತಮ್ಮ ಕೆಲಸ ಕಾರ್ಯಗಳಿಗೆ ದಿನನಿತ್ಯ ಕಚೇರಿ ಅಲೆದಾಡುವುದನ್ನು ತಪ್ಪಿಸಲು ಹಾಗೂ ತ್ವರಿತ ನ್ಯಾಯ ಒದಗಿಸಲು ಈ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ. ಸಾರ್ವಜನಿಕ ಈ ಕಾರ್ಯಕ್ರಮ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಮಸ್ಯೆಗಳಿಗೆ ಶಾಸಕರ ಸ್ಪಂದನೆ :
ಶಾಸಕ ಮಂತರ್ ಗೌಡ ಅವರು ಪ್ರತಿ ಅರ್ಜಿದಾರರನ್ನು ವೇದಿಕೆ ಬಳಿ ಕರೆದು ಅವರ ಸಮಸ್ಯೆ ಆಲಿಸುವ ಮೂಲಕ ಪರಿಹಾರಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ಸ್ಥಳದಲ್ಲಿ ಸೂಚನೆ ನೀಡಿದರು.