ಅಧ್ಯಕ್ಷರಾಗಿ ಮಹಾಂತೇಶ ಅವಿರೋಧ ಆಯ್ಕೆ, 14 ಮತ ಪಡೆದ ನಾಹಿನ್ ಬೇಗಂ ಮುಲ್ಲಾ ಉಪಾಧ್ಯಕ್ಷೆ
ಕನ್ನಡಪ್ರಭ ವಾರ್ತೆ ಕುಷ್ಟಗಿ
ಇಲ್ಲಿನ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಯು ಸೋಮವಾರ ಜರುಗಿತು.ಕಳೆದ ನಾಲ್ಕು ತಿಂಗಳ ಹಿಂದೆ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ನಡೆಯಬೇಕಿತ್ತು. ಆದರೆ ಅಧ್ಯಕ್ಷರ ಮೀಸಲಾತಿಯನ್ನು ಪ್ರಶ್ನಿಸಿ ಕೆಲ ಸದಸ್ಯರು ಕೋರ್ಟ್ ಮೆಟ್ಟಿಲೇರಿದ್ದರು. ನಂತರ ಕೋರ್ಟ್ ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆದೇಶ ಹೊರಡಿಸಿದ ಹಿನ್ನೆಲೆ ಸೋಮವಾರ ಈ ಎರಡು ಸ್ಥಾನಗಳಿಗೆ ಚುನಾವಣೆ ನಡೆಯಿತು.
ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಪಂಗಡ ಮೀಸಲಾತಿ ಇತ್ತು. 23ನೇ ವಾರ್ಡಿನ ಏಕೈಕ ಸದಸ್ಯ (ಬಿಜೆಪಿ ಬೆಂಬಲಿತ) ಮಹಾಂತೇಶ ಕಲಬಾವಿ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದರು.ಉಪಾಧ್ಯಕ್ಷ ಸ್ಥಾನವೂ ಸಾಮಾನ್ಯ ಮಹಿಳಾ ಮೀಸಲಾತಿ ಇರುವುದರಿಂದ ಪುರಸಭೆಯ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಗೀತಾ ಮಹೇಶ್ ಕೋಳೂರು ಹಾಗೂ ಬಿಜೆಪಿ ಬೆಂಬಲಿತ ಸದಸ್ಯೆ ನಾಹಿನ್ ಬೇಗಂ ಅಮೀನುದ್ದೀನ್ ಮುಲ್ಲಾ ಇಬ್ಬರು ನಾಮಪತ್ರ ಸಲ್ಲಿಸಿರುವ ಪೈಕಿ ಕೈ ಎತ್ತುವ ಮೂಲಕ ಚುನಾವಣೆ ನಡೆಸಲಾಯಿತು.
ನಾಹಿನ್ ಬೇಗಂ ಅಮೀನುದ್ದೀನ್ ಮುಲ್ಲಾ 14 ಮತ ಪಡೆಯುವ ಮೂಲಕ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಕಾಂಗ್ರೆಸ್‌ನ ಗೀತಾ ಮಹೇಶ ಕೋಳೂರು 9 ಮತ ಪಡೆಯುವ ಮೂಲಕ ಪರಾಭವಗೊಂಡರು.ಪುರಸಭೆಯ ಆಡಳಿತವೂ ಬಿಜೆಪಿಯ ಪಾಲಾಗಿದೆ. ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷರಾಗಿ ಆಯ್ಕೆಯಾದವರಿಗೆ ಶಾಸಕ ದೊಡ್ಡನಗೌಡ ಪಾಟೀಲ ಸನ್ಮಾನಿಸಿದರು.
ಚುನಾವಣೆಯ ಪ್ರಕ್ರಿಯೆಯಲ್ಲಿ ಚುನಾವಣಾಧಿಕಾರಿಯಾಗಿ ತಹಸೀಲ್ದಾರ ಅಶೋಕ ಶಿಗ್ಗಾಂವಿ ಕಾರ್ಯನಿರ್ವಹಿಸಿದರು. ಸಹಾಯಕ ಚುನಾವಣಾಧಿಕಾರಿಯಾಗಿ ಅಜೀತ ಜೋಶಿ, ಸುಂದರರಾಜ ಕಾರ್ಯ ನಿರ್ವಹಿಸಿದರು. ಪುರಸಭೆಯ ಮುಖ್ಯಾಧಿಕಾರಿ ಧರಣೇಂದ್ರ ಕುಮಾರ ಸೇರಿದಂತೆ ಪುರಸಭೆಯ ಸಿಬ್ಬಂದಿ ಇದ್ದರು.ಸಂಭ್ರಮಾಚರಣೆ:
ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷರಾಗಿ ಬಿಜೆಪಿಯ ಬೆಂಬಲಿತ ಸದಸ್ಯರು ಆಯ್ಕೆಯಾದ ಹಿನ್ನೆಲೆ ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಿದರು.ನನೆಗುದಿಗೆ ಬಿದ್ದಿದ್ದ ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮುಗಿದಿದ್ದು, ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದಾರೆ. ಅವರಿಗೆ ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ಪಟ್ಟಣದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಶಾಸಕ ದೊಡ್ಡನಗೌಡ ಪಾಟೀಲ ತಿಳಿಸಿದ್ದಾರೆ.