ವಿದ್ಯುತ್ ಸಮಸ್ಯೆಗೆ ಕುಸುಮ್ ಯೋಜನೆಯೇ ಪರಿಹಾರ

KannadaprabhaNewsNetwork |  
Published : Aug 31, 2024, 01:35 AM IST
೩೦ಕೆಎಲ್‌ಆರ್-೭-೧ಕೋಲಾರ ತಾಲೂಕಿನ ಹೊಳಲಿ ಬಳಿ ಕೊಚಿಮುಲ್‌ಗೆ ಸೇರಿದ ೫೦ ಎಕರೆ ಸ್ಥಳದಲ್ಲಿ ನಿರ್ಮಾಣವಾಗುತ್ತಿರುವ ೧೨ ಮೆ.ವ್ಯಾ ಸೋಲಾರ್ ವಿದ್ಯುತ್ ಸ್ಥಾವರ ಪರಿಶೀಲಿಸುತ್ತಿರುವ ಸಚಿವ ಕೆ.ಜೆ.ಜಾರ್ಜ್. | Kannada Prabha

ಸಾರಾಂಶ

ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್ ಗಳನ್ನು ಅಳವಡಿಸಲಾಗುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರದಿಂದ ಶೇ.೩೦ ಮತ್ತು ರಾಜ್ಯ ಸರ್ಕಾರದಿಂದ ಶೇ.೫೦ರ ಸಬ್ಸಿಡಿ ನೀಡಲಾಗುತ್ತಿದೆ. ಒಟ್ಟು ವೆಚ್ಚದ ಶೇ.೨೦ನ್ನು ಫಲಾನುಭವಿಗಳು ಭರಿಸಿದರೆ ರೈತರಿಗೆ ಸರ್ಕಾರದಿಂದಲೇ ಪಂಪ್ ಸೆಟ್ ಗಳನ್ನು ಅಳವಡಿಸಿಕೊಡಲಾಗುವುದು

ಕನ್ನಡಪ್ರಭ ವಾರ್ತೆ ಕೋಲಾರವಿದ್ಯುತ್ ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ರಾಜ್ಯದಲ್ಲಿ ಕುಸುಮ್.ಬಿ ಮತ್ತು ಕುಸುಮ್ ಸಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಕೋಲಾರದಂತಹ ಜಿಲ್ಲೆಗಳಿಗೆ ಇದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.ನಗರದ ಜಿಪಂ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಹಾಗೂ ಬೆಸ್ಕಾಂ ಮತ್ತು ಕೆಪಿಟಿಸಿಎಲ್ ಅಧಿಕಾರಿಗಳ ಜತೆ ಸಚಿವರು ಸಭೆ ನಡೆಸಿದರು.

ಸೋಲಾರ್‌ ಪಂಪ್‌ಗೆ ಸಬ್ಸಿಡಿ

ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್ ಗಳನ್ನು ಅಳವಡಿಸಲಾಗುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರದಿಂದ ಶೇ.೩೦ ಮತ್ತು ರಾಜ್ಯ ಸರ್ಕಾರದಿಂದ ಶೇ.೫೦ರ ಸಬ್ಸಿಡಿ ನೀಡಲಾಗುತ್ತಿದೆ. ಒಟ್ಟು ವೆಚ್ಚದ ಶೇ.೨೦ನ್ನು ಫಲಾನುಭವಿಗಳು ಭರಿಸಿದರೆ ರೈತರಿಗೆ ಸರ್ಕಾರದಿಂದಲೇ ಪಂಪ್ ಸೆಟ್ ಗಳನ್ನು ಅಳವಡಿಸಿಕೊಡಲಾಗುವುದು ಎಂದರು. ಅದೇ ರೀತಿ ಕುಸುಮ್ ಸಿ ಫೀಡರ್ ಸೋಲಾರೈಸೇಶನ್ ಯೋಜನೆಯಡಿ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಿ ಸಮೀಪದ ಸಬ್ ಸ್ಟೇಷನ್ ಗೆ ವಿದ್ಯುತ್ ಒದಗಿಸಲಾಗುತ್ತದೆ. ಆಯಾ ಸಬ್ ಸ್ಟೇಷನ್ ವ್ಯಾಪ್ತಿಯಲ್ಲೇ ಆಯಾ ವಿದ್ಯುತ್ ಪೂರೈಕೆಯಾಗುವುದರಿಂದ ಗ್ರಾಹಕರಿಗೆ ವಿದ್ಯುತ್ ಸಮಸ್ಯೆ ಇಲ್ಲದಂತಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಸೋಲಾರ್ ಘಟಕಗಳನ್ನು ಸ್ಥಾಪಿಸಲಾಗುವುದು ಎಂದರು.

ಎಕರೆಗೆ ವಾರ್ಷಿಕ ₹25000

ಒಂದು ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗೆ ೪ ಎಕರೆ ಜಮೀನು ಬೇಕಿದ್ದು, ಖಾಸಗಿ ಭೂಮಿಗೆ ಪ್ರತಿ ಎಕರೆಗೆ ವಾರ್ಷಿಕ ರು.೨೫ ಸಾವಿರ ನೀಡಲಾಗುತ್ತದೆ. ಸರ್ಕಾರಿ ಭೂಮಿಯಾದರೆ ಇಂಧನ ಇಲಾಖೆಯಿಂದ ಜಿಲ್ಲಾಧಿಕಾರಿ ಬಳಿ ಪ್ರತಿ ಎಕರೆಗೆ ರೂ.೨೫ ಸಾವಿರ ಠೇವಣಿ ಇಟ್ಟು ಆ ಮೊತ್ತವನ್ನು ಆ ಭಾಗದ ಅಂಗನವಾಡಿ, ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಲು ವೆಚ್ಚ ಮಾಡಲಾಗುವುದು ಎಂದು ತಿಳಿಸಿದರು.ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆ ಜಾರಿಯಲ್ಲಿರುವುದರಿಂದ ಕೇಂದ್ರ ಸರ್ಕಾರದ ಸೂರ್ಯ ಘರ್ ಯೋಜನೆಗೆ ಬೇಡಿಕೆ ಇಲ್ಲ. ಇದರ ಹೊರತಾಗಿಯೂ ಸೂರ್ಯ ಘರ್ ಯೋಜನೆ ಕುರಿತಂತೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜನ ಜಾಗೃತಿ ಮೂಡಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು. ಬೆಸ್ಕಾಂ ಎಂಜಿನಿರುಗಳಿಗೆ ಸೂಚನೆ

ಸಭೆಯಲ್ಲಿ ಜಿಲ್ಲೆಯ ಶಾಸಕರು ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೆಲವು ಸಮಸ್ಯೆಗಳನ್ನು ಹೇಳಿಕೊಂಡಾಗ ಪ್ರತಿಕ್ರಿಯಿಸಿದ ಸಚಿವರು, ಜನತೆ ತಮ್ಮ ಸಮಸ್ಯೆಗಳನ್ನು ನೇರವಾಗಿ ಶಾಸಕರೊಂದಿಗೆ ಹೇಳಿಕೊಳ್ಳುತ್ತಾರೆ. ಹೀಗಾಗಿ ಅವರಿಗೆ ಸಮಸ್ಯೆಯ ಬಗ್ಗೆ ಅರಿವಿರುತ್ತದೆ. ಆದ್ದರಿಂದ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಬೆಸ್ಕಾಂ ಇಂಜಿನಿಯರ್‌ಗಳು ತಮ್ಮ ವ್ಯಾಪ್ತಿಯ ಶಾಸಕರ ಜತೆ ಸಂಪರ್ಕದಲ್ಲಿದ್ದು, ಅವರ ಸಲಹೆಗಳನ್ನು ಪಡೆದು ಕೆಲಸ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಹೊಳಲಿ ಬಳಿ ಸೋಲಾರ್‌ ಪ್ಲಾಂಟ್‌

ಸಭೆಯ ನಂತರ ಕೋಲಾರದ ಹೊಳಲಿ ಬಳಿ ಕೊಚಿಮುಲ್‌ಗೆ ಸೇರಿದ ೫೦ ಎಕರೆ ಸ್ಥಳದಲ್ಲಿ ನಿರ್ಮಾಣವಾಗುತ್ತಿರುವ ೧೨ ಮೆ. ವ್ಯಾ ಸೋಲಾರ್ ವಿದ್ಯುತ್ ಸ್ಥಾವರ ಪರಿಶೀಲಿಸಿದರು.ಸಭೆಯಲ್ಲಿ ಸಂಸದ ಎಂ.ಮಲ್ಲೇಶ್ ಬಾಬು, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರಾದ ಕೊತ್ತೂರು ಜಿ.ಮಂಜುನಾಥ್, ಕೆ.ವೈ.ನಂಜೇಗೌಡ, ಜಿ.ಕೆ.ವೆಂಕಟಾಶಿವಾರೆಡ್ಡಿ, ಎಂಎಲ್ಸಿ ಎಂ.ಎಲ್.ಅನಿಲ್ ಕುಮಾರ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ, ಜಿಲ್ಲಾಧಿಕಾರಿ ಅಕ್ರಂ ಪಾಷ, ಜಿಲ್ಲಾ ರಕ್ಷಣಾಧಿಕಾರಿ ಬಿ.ನಿಖಿಲ್ ಇದ್ದರು.

PREV

Recommended Stories

ಮದ್ದೂರು ಗಣೇಶ ಗಲಾಟೆಗೆ ಪೂರ್ಣ ಮುಸ್ಲಿಮರೇ ಕಾರಣ: ಸಚಿವ ಚಲುವ
ಬುರುಡೆ ಕೇಸ್‌ : ಸಾಕ್ಷಿದಾರರ ಬಂಧನ..? ಮಟ್ಟಣ್ಣವರ್‌, ಜಯಂತ್‌, ಅಭಿಷೇಕ್, ಮನಾಫಾ ವಿಠಲಗೆ ಗ್ರಿಲ್