ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ಸಿಪಿಐಎಂ ಮುಖಂಡ ಮುನೀರ್ ಕಾಟಿಪಳ್ಳ, ಆದಿವಾಸಿಗಳು ಸೇರಿದಂತೆ ನೂರಾರು ಜನರು ಪ್ರತಿನಿತ್ಯ ಉಪಯೋಗಿಸುವ ಸೇತುವೆ ಮುರಿದು ಬಿದ್ದು ಎರಡು ವರ್ಷಗಳೇ ಕಳೆದರೂ ಇನ್ನೂ ಅಧಿಕಾರಿಗಳು, ಸರ್ಕಾರ ಎಚ್ಚೆತ್ತುಕೊಂಡಿಲ್ಲ ಎಂದು ಟೀಕಿಸಿದರು.
ಸರ್ಕಾರ, ಜನಪ್ರತಿನಿಧಿಗಳು ಕೂಡಲೇ ಎಚ್ಚೆತ್ತುಕೊಂಡ ಸೇತುವೆಯ ಮರು ಮಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ನಾರಾವಿ ಗ್ರಾಮ ಪಂಚಾಯಿತಿ ಮುಂಭಾಗ ಬೆಳ್ತಂಗಡಿ ತಾಲೂಕು ಕಚೇರಿಯ ಎದುರು ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿ.ಪಿ.ಐ.ಎಂ ತಾಲೂಕು ಕಾರ್ಯದರ್ಶಿ ಬಿ.ಎಂ. ಭಟ್ ಕುತ್ಲೂರಿನ ಅಲಂಬ ಪರಿಸರದ ಜನತೆ ಕಳೆದ ಎರಡು ವರ್ಷಗಳಿಂದ ಸೇತುವೆ ಕುಸಿದ ಕಾರಣ ಸಮಸ್ಯೆ ಎದುರಿಸುತ್ತಿದ್ದಾರೆ, ಆದರೆ ಯಾವ ಅಧಿಕಾರಿಗಳು ಜನಪ್ರತಿನಿಧಿಗಳು ಈ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಈ ಹಿನ್ನಲೆಯಲ್ಲಿ ಇದೀಗ ಹೋರಾಟದ ಹಾದಿಯನ್ನು ಹಿಡಿಯಬೇಕಾದ ಅನಿವಾರ್ಯತೆ ಬಂದಿದೆ ಎಂದರು.
ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಹೋರಾಟಗಾರರೊಂದಿಗೆ ಮಾತುಕತೆ ನಡೆಸಿದರು. ಸ್ಥಳೀಯ ಗ್ರಮಾಪಂಚಾಯಿತಿ ಸದಸ್ಯೆ ಯಶೋದಾ ಹಾಗೂ ಇತರರು, ಆಗಮಿಸಿ ಸಮಸ್ಯೆಯ ತೀವ್ರತೆಯ ಬಗ್ಗೆ ಅಧಿಕಾರಿಗಳ ಗಮನ ಸೆಳೆದರು.ಪ್ರತಿಭಟನೆಯ ನೇತೃತ್ವವನ್ನು ದಲಿತ ಹಕ್ಕುಗಳ ಹೋರಾಟ ಸಮಿತಿಯ ಮುಖಂಡರಾದ ಸುಕುಮಾರ ದಿಡುಪೆ, ಪೂವಪ್ಪ ಮಲೆಕುಡಿಯ ಕುತ್ಲೂರು, ಈಶ್ವರಿ, ಸುಧಾಕರ ಮಲೆಕುಡಿಯ, ಶಶಿಧರ, ಚೀಂಕ್ರ, ಸುಜಾತ, ಜಯಶ್ರೀ, ಜಯರಾಮ ಮಯ್ಯ ಹಾಗೂ ಇತರರು ಇದ್ದರು.