ಕನ್ನಡಪ್ರಭ ವಾರ್ತೆ ಮಡಿಕೇರಿ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಿಶ್ವ ಮಾನವ ಕುವೆಂಪು ಅವರ ಜನ್ಮ ದಿನವನ್ನು ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಕುವೆಂಪು ಕುರಿತು ಉಪನ್ಯಾಸ, ಕವನ ವಾಚನ, ಗಮಕ ವಾಚನ ಏರ್ಪಡಿಸುವುದು, ಗೀತಾಗಾಯನ ಮತ್ತಿತರ ಕಾರ್ಯಕ್ರಮ ಆಚರಿಸುವುದರ ಜೊತೆಗೆ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಏರ್ಪಡಿಸಲು ತೀರ್ಮಾನಿಸಲಾಯಿತು.ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ, ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳನ್ನು ಆಹ್ವಾನಿಸುವುದರ ಜೊತೆಗೆ ಹಲವು ಕಾರ್ಯಕ್ರಮ ಆಯೋಜಿಸುವ ಸಂಬಂಧ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಸೂಚಿಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಮುನೀರ್ ಅಹ್ಮದ್ ಮಾತನಾಡಿ, ಕುವೆಂಪು ಅವರ ಕುರಿತು ಭಾಷಣ ಸ್ಪರ್ಧೆ ಏರ್ಪಡಿಸುವಂತಾಗಬೇಕು ಎಂದರು
ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಲೋಕನಾಥ ಅಮೆಚೂರು ಮಾತನಾಡಿ, ಕುವೆಂಪು ಅವರ ಸಂದೇಶಗಳು ಯುವಜನರಿಗೆ ತಲುಪಬೇಕು. ಕನ್ನಡ ನಾಡು ನುಡಿಗೆ ಕುವೆಂಪು ಅವರು ನೀಡಿರುವ ಕೊಡುಗೆಯನ್ನು ಸದಾ ಸ್ಮರಿಸಬೇಕು ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರೇವತಿ ರಮೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಂಜುಳ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಚಂದ್ರಶೇಖರ್, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಪಿ.ಪಿ.ಕವಿತಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರಸನ್ನ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ನಾರಾಯಣ ಇತರರು ಇದ್ದರು.