ಕನ್ನಡಪ್ರಭ ವಾರ್ತೆ ಮೈಸೂರುರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ತತ್ವವು ಸಮಾಜಕ್ಕೆ ದಾರಿದೀಪ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.ಕುವೆಂಪುನಗರದ ಸೌಗಂಧಿಕ ಉದ್ಯಾನವನದಲ್ಲಿ ಕುವೆಂಪು ವಿಶ್ವಮಾನವ ಕ್ಷೇಮಾಭಿವೃದ್ಧಿ ಟ್ರಸ್ಟ್ ಶನಿವಾರ ಆಯೋಜಿಸಿದ್ದ 2ನೇ ವಾರ್ಷಿಕೋತ್ಸವ, ಸಾಧಕರಿಗೆ ಪ್ರಶಸ್ತಿ ಪ್ರದಾನ, ಪೌರಕಾರ್ಮಿಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು.ಕುವೆಂಪು ಅವರ ವಿಶ್ವಮಾನವ ಸಂದೇಶವು ಕೇವಲ ಸಾಹಿತ್ಯಿಕ ವಿಚಾರವಾಗಿ ಉಳಿಯದೆ, ಪ್ರತಿಯೊಬ್ಬರ ಬದುಕಿನ ನಿತ್ಯ ಮೌಲ್ಯವಾಗಬೇಕು. ಸಮಾಜದಲ್ಲಿ ಸಮಾನತೆ, ಸಹಬಾಳ್ವೆ ಮತ್ತು ಮಾನವೀಯತೆಯ ಬೆಳಕು ಸದಾ ಬೆಳಗಿದಾಗ ಮಾತ್ರ ನೈಜ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ನ್ಯಾಯ ಸಾಕಾರಗೊಳ್ಳಲು ಸಾಧ್ಯ ಎಂದರು.ಕುವೆಂಪು ಅವರು ಪ್ರತಿಪಾದಿಸಿದ ವಿಚಾರಕ್ರಾಂತಿ ಮತ್ತು ತತ್ವಗಳು ಸಮಾಜದಲ್ಲಿನ ಶೋಷಣೆ ಹಾಗೂ ತಾರತಮ್ಯಗಳನ್ನು ತೊಡೆದುಹಾಕಲು ಪ್ರೇರಣೆಯಾಗಿವೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನ ಅವಕಾಶಗಳು ತಲುಪಿದಾಗ ಮಾತ್ರ ಸಮಾನತೆ ಸಾಧ್ಯ ಎಂದು ಅವರು ಹೇಳಿದರು.ನಗರದ ನೈರ್ಮಲ್ಯ ಮತ್ತು ಸಾರ್ವಜನಿಕ ಆರೋಗ್ಯಕ್ಕಾಗಿ ಅಹೋರಾತ್ರಿ ಶ್ರಮಿಸುವ ಪೌರಕಾರ್ಮಿಕರನ್ನು ಗೌರವಿಸುವುದು ಮತ್ತು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಪ್ರತಿಭಾವಂತರನ್ನು ಪ್ರೋತ್ಸಾಹಿಸುವುದು ಕುವೆಂಪು ಅವರ ಮೌಲ್ಯಗಳಿಗೆ ನೀಡುವ ನಿಜವಾದ ಗೌರವವಾಗಿದೆ ಎಂದು ಅವರು ಶ್ಲಾಘಿಸಿದರು.ಇದೇ ವೇಳೆ ಕುವೆಂಪು ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕರ್ನಾಟಕ ಸರ್ಕಾರದ ವತಿಯಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಕ್ಕಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಲಾಯಿತು.ಸುತ್ತೂರು ಮಠದ ಶ್ರೀ ಶಿವರಾತ್ರೀಶ್ವರ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಕಾಗಿನೆಲೆ ಶಾಖಾ ಮಠದ ಶ್ರೀ ಶಿವಾನಂದಪುರಿ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ, ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.ಸಚಿವ ಎನ್. ಚಲುವರಾಯಸ್ವಾಮಿ, ಶಾಸಕರಾದ ಜಿ.ಟಿ. ದೇವೇಗೌಡ, ಎಚ್.ಎಂ. ಗಣೇಶ್ ಪ್ರಸಾದ್, ನಾಗರಾಜ್ ಯಾದವ್, ಡಾ.ಡಿ. ತಿಮ್ಮಯ್ಯ, ಟ್ರಸ್ಟ್ ಅಧ್ಯಕ್ಷ ಎಚ್.ಕೆ. ರಾಮು, ಆರ್.ಎಸ್. ರಘುರಾಮ್ ಗೌಡ, ಎಚ್.ವಿ. ರಾಜೀವ ಮೊದಲಾದವರು ಇದ್ದರು.