ಬಳ್ಳಾರಿ: ಕೇಂದ್ರ ಸರ್ಕಾರ ವಿದ್ಯುತ್ ಕಾಯ್ದೆ 2023ನ್ನು ರದ್ದುಗೊಳಿಸಬೇಕು. ಕಾರ್ಮಿಕ ಕಾಯ್ದೆ ತಿದ್ದುಪಡಿ ಸಂಹಿತೆಯನ್ನು ಹಿಂದಕ್ಕೆ ಪಡೆಯಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಹೋರಾಟ-ಕರ್ನಾಟಕ ಹಾಗೂ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ನಗರದ ಡಿಸಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.
ಕೇಂದ್ರ ಸರ್ಕಾರ ಕೃಷಿ ಕಾಯ್ದೆ, ವಿದ್ಯುತ್ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡುವ ಮೂಲಕ ದುಡಿವ ಜನರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಕೇಂದ್ರದ ಮೂರು ಕರಾಳ ಕೃಷಿ ಕಾಯ್ದೆಯಿಂದಾಗಿ ದೇಶದ ಕೃಷಿ ವಲಯದಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿದೆ. ರೈತರ ಬೆಳೆಗಳಿಗೆ ಬೆಂಬಲ ಸಿಗದೆ ಅನ್ನದಾತರು ಒದ್ದಾಡುತ್ತಿದ್ದಾರೆ. ವಿದ್ಯುತ್ ಕಾಯ್ದೆ ತಿದ್ದುಪಡಿಯಿಂದ ಕೃಷಿ ವಲಯ ಮತ್ತಷ್ಟು ಸಂಕಷ್ಟಕ್ಕೀಡಾಗಿದೆ. ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಯಾಗದೇ ಅತಂತ್ರ ಬದುಕು ದೂಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದರು.ಕಾರ್ಮಿಕ ಸಂಘಟನೆಯ ಮುಖಂಡರಾದ ಆರ್.ಸೋಮಶೇಖರಗೌಡ ಹಾಗೂ ಎಚ್.ಎ. ಆದಿಮೂರ್ತಿ ಮಾತನಾಡಿ, ಕೇಂದ್ರ ಸರ್ಕಾರ ಕೂಡಲೇ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಟ್ಟು, ದುಡಿವ ಜನರ ಹಿತ ಕಾಯುವ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ವಿ.ಎಸ್. ಶಿವಶಂಕರ್ ಹಾಗೂ ರೈತ ಸಂಘದ ಸಂಗನಕಲ್ಲು ಕೃಷ್ಣಪ್ಪ ಮಾತನಾಡಿದರು.ರಾಜ್ಯ ರೈತ ಸಂಘದ ಅಧ್ಯಕ್ಷ ಮಾಧವ ರೆಡ್ಡಿ ಕರೂರು ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಜಂಟಿ ಹೋರಾಟ ಸಮಿತಿ ನಿರಂತರ ಹೋರಾಟ ಹಮ್ಮಿಕೊಳ್ಳಲಿದೆ. ರೈತರ ಹಿತ ಕಾಯದ ಸರ್ಕಾರಕ್ಕೆ ಚಳುವಳಿಯ ಮೂಲಕವೇ ಎದುರೇಟು ನೀಡಲಾಗುವುದು ಎಂದು ಎಚ್ಚರಿಸಿದರು.
ಎಐಕೆಕೆಎಂಎಸ್ ಜಿಲ್ಲಾ ಕಾರ್ಯದರ್ಶಿ ಗುರಳ್ಳಿ ರಾಜ ಮಾತನಾಡಿದರು. ಜಿಲ್ಲಾಧ್ಯಕ್ಷ ಗೋವಿಂದ್ ಪ್ರತಿಭಟನೆಯ ಅಧ್ಯಕ್ಷತೆ ವಹಿಸಿದ್ದರು.ಕಾರ್ಮಿಕ ನಾಯಕರಾದ ಎ.ದೇವದಾಸ್, ಡಾ.ಎನ್. ಪ್ರಮೋದ್, ಸುರೇಶ್, ಮುಕ್ಕಣ್ಣ, ಮುದುಕಪ್ಪ, ಎರ್ರಿಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಿಮ್ಮಪ್ಪ, ಬಸವರಾಜ ಸ್ವಾಮಿ, ಸಲೀಮ್, ಓಂಕಾರಗೌಡ, ನಾಗಪ್ಪ, ಎಐವೈಎಫ್ ನ ಜಿಲ್ಲಾಧ್ಯಕ್ಷ ಕಟ್ಟೆ ಬಸಪ್ಪ, ಅಕ್ಕಮ್ಮ, ಮಮತಾ, ಅರುಣ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.