ಕಾರ್ಮಿಕರ ಮಕ್ಕಳಿಗಾಗಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ: ಸಚಿವ ರಾಜಣ್ಣ

KannadaprabhaNewsNetwork |  
Published : Jul 07, 2025, 11:48 PM IST
7ಎಚ್ಎಸ್ಎನ್6 :  ಹೋಬಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ ಎನ್ ರಾಜಣ್ಣ ಉದ್ಘಾಟಿಸಿದರು.  | Kannada Prabha

ಸಾರಾಂಶ

ಮಕ್ಕಳ ಶೈಕ್ಷಣಿಕ ದೃಷ್ಟಿಯಿಂದ ರಾಜ್ಯ ಸರ್ಕಾರ ರಾಜ್ಯದ ವಸತಿ ಶಾಲೆಗಳ ಆಧುನೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಶಿಸ್ತನ್ನು ಗಳಿಸಬೇಕು. ವಿದ್ಯಾರ್ಥಿಗಳಿಗೆ ಪದೇ ಪದೇ ರಜೆ ನೀಡಬಾರದು, ಇದರಿಂದ ಅವರ ಭೌದ್ಧಿಕ ಗುಣಮಟ್ಟ ಕುಸಿಯುತ್ತದೆ, ಈ ಬಗ್ಗೆ ವಸತಿ ಶಾಲೆಗಳ ಪ್ರಾಂಶುಪಾಲರು ಸೇರಿದಂತೆ ಶಿಕ್ಷಕರು ಹೆಚ್ಚಿನ ಗಮನಹರಿಸಬೇಕು.

ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ

ರಾಜ್ಯದಲ್ಲಿ ಮೊರಾರ್ಜಿ ವಸತಿ ಶಾಲೆಯಂತೆ ಕಾರ್ಮಿಕ ಇಲಾಖೆ ವತಿಯಿಂದಲೂ ಕಾರ್ಮಿಕರ ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸುವ ದೃಷ್ಟಿಯಿಂದ ವಸತಿ ಶಾಲೆಗಳನ್ನು ತೆರೆಯಲು ರಾಜ್ಯ ಸರ್ಕಾರ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಎನ್. ರಾಜಣ್ಣ ಹೇಳಿದರು.

ಹೋಬಳಿಯ ಗೂಳಿ ಹೊನ್ನೇನಹಳ್ಳಿ ಗ್ರಾಮದ ಸಮೀಪದ ಸೋಮವಾರ ಸಂತೆ ಬಳಿ ಸುಮಾರು 13.50 ಕೋಟಿ ರು. ವೆಚ್ಚದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಕರ್ನಾಟಕ ವಸತಿ ಶಿಕ್ಷಣ ಸಂಘದ ವತಿಯಿಂದ ನಿರ್ಮಾಣಗೊಂಡಿದ್ದ ಹೋಬಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿ ಪ್ರತಿ ಮಕ್ಕಳಿಗೂ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗಲೆಂದು ಶಿಕ್ಷಣ ಇಲಾಖೆಯ ಮೂಲಕ ರಾಜ್ಯ ಸರ್ಕಾರ ವಿದ್ಯಾರ್ಥಿ ಸ್ನೇಹ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಗುಣಮಟ್ಟದ ಫಲಿತಾಂಶಕ್ಕಾಗಿ ಹಲವು ಹೊಸ ಮಾರ್ಗಸೂಚಿ ಜಾರಿಗೆ ತರುವ ಮೂಲಕ ಉತ್ತಮ ಫಲಿತಾಂಶ ಬರಲು ಕಾರಣವಾಗಿದೆ. ಇದೇ ಮೊದಲ ಬಾರಿಗೆ ವಸತಿ ಶಾಲೆಗಳನ್ನು ಪ್ರಾರಂಭಿಸಲು ಇತ್ತೀಚೆಗೆ ನಂದಿ ಬೆಟ್ಟದಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ, ಮುಂಬರುವ ಶೈಕ್ಷಣಿಕ ವರ್ಷದಿಂದಲೇ ಶಾಲೆಗಳನ್ನು ತೆರೆಯಲು ಸರ್ಕಾರ ಮುಂದಾಗಿದ್ದು, ಇದರಿಂದ ರಾಜ್ಯದಲ್ಲಿರುವ ಕಾರ್ಮಿಕರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ವಸತಿ ಸಿಗಲಿದೆ ಎಂದರು.

ಕಳೆದ 2018ರಲ್ಲಿ ಹೋಬಳಿಯ ಮೊರಾರ್ಜಿ ವಸತಿ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ದೊರೆತ್ತಿತ್ತು, ಅನೇಕ ಸಮಸ್ಯೆಗಳಿಂದ ವಿಳಂಬವಾದರೂ ಕಟ್ಟಡವನ್ನು ಗುಣಮಟ್ಟದಿಂದ ಕಟ್ಟಲಾಗಿದ್ದು, ವಿದ್ಯಾರ್ಥಿಗಳಿಗೆ ಕಲಿಕೆಯ ದೃಷ್ಟಿಯಿಂದ ಉತ್ತಮ ವಾತಾವರಣದಲ್ಲಿ ಶಾಲೆಯನ್ನು ನಿರ್ಮಾಣ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ವಸತಿ ಶಾಲೆಯಲ್ಲಿ ಆಡಿಟೋರಿಯಂ, ಕ್ರೀಡಾಂಗಣ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ವತಿಯಿಂದ ಅನುದಾನ ಕೊಡಿಸುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಸಿ.ಎನ್. ಬಾಲಕೃಷ್ಣ, ಜಿಲ್ಲೆಯ ಉಸ್ತುವಾರಿ ಸಚಿವರು ಕೆ. ಎನ್. ರಾಜಣ್ಣನವರು ಜಿಲ್ಲೆಯ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದ್ದಾರೆ, ತಾಲೂಕಿನ ಅಭಿವೃದ್ಧಿಗೂ ಸಹಕಾರ ನೀಡಿದ್ದಾರೆ. ತಾಲೂಕಿನಲ್ಲಿ ಮಕ್ಕಳ ಶೈಕ್ಷಣಿಕ ದೃಷ್ಟಿಯಿಂದ ಬಾಗೂರು ಹಾಗೂ ಹಿರೀಸಾವೆ ಹೋಬಳಿಗಳಲ್ಲಿ ನೂತನ ಮೊರಾರ್ಜಿ ವಸತಿ ಶಾಲೆಗಳನ್ನು ಮಂಜೂರು ಮಾಡುವಂತೆ ಜೊತೆಗೆ ನುಗ್ಗೇಹಳ್ಳಿ ನೂತನ ಮೊರಾರ್ಜಿ ವಸತಿ ಶಾಲೆಯಲ್ಲಿ ಆಡಿಟೋರಿಯಂ ಮತ್ತು ಕ್ರೀಡಾಂಗಣ ನಿರ್ಮಾಣಕ್ಕೆ ಹೆಚ್ಚುವರಿಯಾಗಿ 2 ಕೋಟಿ ಅನುದಾನ ನೀಡುವಂತೆ ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಒತ್ತಾಯಿಸಿದರು.

ತಾಲೂಕಿನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ನಿರ್ಮಾಣಕ್ಕೆ ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್. ಸಿ. ಮಹದೇವಪ್ಪ ಅವರಿಗೆ 20 ಕೋಟಿ ರು. ಅನುದಾನ ನೀಡುವಂತೆ ಒತ್ತಾಯ ಮಾಡಲಾಗಿತ್ತು. ತಮ್ಮ ಮನವಿಯಂತೆ ಸರ್ಕಾರ ಟೆಂಡರ್ ಪ್ರಕ್ರಿಯೆ ಪ್ರಾರಂಭ ಮಾಡಿದ್ದು, ಸದ್ಯದಲ್ಲೇ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗುತ್ತದೆ. ನುಗ್ಗೇಹಳ್ಳಿ ಮೊರಾರ್ಜಿ ವಸತಿ ಶಾಲೆಯ ಗುತ್ತಿಗೆದಾರರಿಗೆ ಸರ್ಕಾರದಿಂದ ಸುಮಾರು 3 ಕೋಟಿ ರು. ಹಣ ಬಿಡುಗಡೆ ಆಗಬೇಕಾಗಿದೆ, ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಶೀಘ್ರ ಹಣ ಬಿಡುಗಡೆಗೆ ಸೂಚನೆ ನೀಡುವಂತೆ ಮನವಿ ಮಾಡಿದರು.

ಲೋಕಸಭಾ ಸದಸ್ಯ ಶ್ರೇಯಸ್ ಎಂ. ಪಟೇಲ್ ಮಾತನಾಡಿ, ಕೇಂದ್ರ ಸರ್ಕಾರದ ವ್ಯಾಪ್ತಿಗೆ ಒಳಪಡುವ ನವೋದಯ ಶಾಲೆಗಳಲ್ಲಿ ಸಿಗುವ ಸಿಬಿಎಸ್‌ಸಿ ಶಿಕ್ಷಣದಂತೆ ರಾಜ್ಯದ ಎಲ್ಲಾ ವಸತಿ ಶಾಲೆಗಳನ್ನು ಸಿಬಿಎಸ್‌ಸಿ ಶಿಕ್ಷಣವನ್ನು ನೀಡಿದರೆ ರಾಜ್ಯದ ಮಕ್ಕಳಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಈ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆಯುವುದಾಗಿ ತಿಳಿಸಿದರು.

ವಸತಿ ಶಾಲೆಗಳಲ್ಲಿ 100ಕ್ಕೆ 100ರಷ್ಟು ಫಲಿತಾಂಶ ನೀಡಲು ಸೂಚನೆ

ಮಕ್ಕಳ ಶೈಕ್ಷಣಿಕ ದೃಷ್ಟಿಯಿಂದ ರಾಜ್ಯ ಸರ್ಕಾರ ರಾಜ್ಯದ ವಸತಿ ಶಾಲೆಗಳ ಆಧುನೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಶಿಸ್ತನ್ನು ಗಳಿಸಬೇಕು. ವಿದ್ಯಾರ್ಥಿಗಳಿಗೆ ಪದೇ ಪದೇ ರಜೆ ನೀಡಬಾರದು, ಇದರಿಂದ ಅವರ ಭೌದ್ಧಿಕ ಗುಣಮಟ್ಟ ಕುಸಿಯುತ್ತದೆ, ಈ ಬಗ್ಗೆ ವಸತಿ ಶಾಲೆಗಳ ಪ್ರಾಂಶುಪಾಲರು ಸೇರಿದಂತೆ ಶಿಕ್ಷಕರು ಹೆಚ್ಚಿನ ಗಮನಹರಿಸಬೇಕು. ಮುಂಬರುವ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಮೊರಾರ್ಜಿ ವಸತಿ ಶಾಲೆ ಸೇರಿದಂತೆ ಎಲ್ಲಾ ವಸತಿ ಶಾಲೆಗಳಲ್ಲೂ 100ಕ್ಕೆ 100ರಷ್ಟು ಫಲಿತಾಂಶ ಬರಬೇಕು ಎಂದು ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಲತಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಜಿಲ್ಲಾ ಕಾರ್ಯ ನಿರ್ವಾಹಕ ಅಧಿಕಾರಿ ಪೂರ್ಣಿಮಾ, ಎಡೀಸಿ ಶಾಂತಲಾ, ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಎ. ಗೋಪಾಲಸ್ವಾಮಿ, ಕ್ರೈಸ್ ನ ಸೂಪರಿಡೆಂಟ್ ಇಂಜಿನಿಯರ್ ಜನಾರ್ದನ್, ಕಾರ್ಯಪಾಲಕ ಅಭಿಯಂತರ ಪಂಪಾಪತಿ, ಸಹಾಯಕ ಕಾರ್ಯಪಾಲಕ ಅಭಿಯಂತರ ನಟರಾಜ್, ಸಹಾಯಕ ಅಭಿಯಂತರ ಮಹೇಶ್, ಗುತ್ತಿಗೆದಾರ ಪ್ರಸನ್ನಕುಮಾರ್, ಮಟ್ಟನವಿಲೆ ಗ್ರಾಪಂ ಅಧ್ಯಕ್ಷೆ ಚಂದ್ರಕಲಾ, ಉಪಾಧ್ಯಕ್ಷ ಅಶೋಕ್, ಎಸಿ ಮಾರುತಿ, ತಹಸೀಲ್ದಾರ್ ಶಂಕರಪ್ಪ, ಬಿಇಒ ಎಚ್ಎನ್ ದೀಪಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಹರೀಶ್, ತಾಲೂಕು ಹಿಂದುಳಿದ ವರ್ಗಗಳ ಇಲಾಖೆ ವಿಸ್ತಾರಣಾಧಿಕಾರಿ ರಾಜೇಶ್ ಚೌವ್ಹಾಣ್, ಹೋಬಳಿ ಮೊರಾರ್ಜಿ ವಸತಿ ಶಾಲೆ ಪ್ರಾಂಶುಪಾಲರಾದ ಸಂಚಿತ ಎಚ್. ವಿ. ಸೇರಿದಂತೆ ಇತರರು ಹಾಜರಿದ್ದರು.

ಜಿಲ್ಲೆಯ ಅಭಿವೃದ್ಧಿಯಲ್ಲಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು ಹಾಗೂ ಎಚ್. ಡಿ. ರೇವಣ್ಣನವರು ಹೆಚ್ಚಿನ ಆದ್ಯತೆ ನೀಡಿದ್ದಾರೆ. ಕ್ಷೇತ್ರದ ಶಾಸಕರಾದ ಸಿ.ಎನ್. ಬಾಲಕೃಷ್ಣರವರು ತಾಲೂಕಿನ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಸದಾ ಮನವಿ ಮಾಡುತ್ತಿರುತ್ತಾರೆ.

-ಕೆ.ಎನ್. ರಾಜಣ್ಣ, ಜಿಲ್ಲಾ ಉಸ್ತುವಾರಿ ಸಚಿವರು

PREV