ಸಿಲಿಂಡರ್‌ ಬೆಲೆ ಏರಿಕೆಗೆ ಲಕ್ಷ್ಮೀ ಹೆಬ್ಬಾಳಕರ ಕಿಡಿ

KannadaprabhaNewsNetwork |  
Published : Jun 08, 2026, 04:00 AM IST
ಲಕ್ಷ್ಮೀ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ: ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಮತ್ತೆ ₹ 29 ಹೆಚ್ಚಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಖಂಡನೀಯ ಎಂದು ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಕನ್ನಡಪ್ರಭ ವಾರ್ತೆ ಬೆಳಗಾವಿ: ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಮತ್ತೆ ₹ 29 ಹೆಚ್ಚಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಖಂಡನೀಯ ಎಂದು ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಕಳೆದ ಮೂರು ತಿಂಗಳಲ್ಲೇ ಇದು ಎರಡನೇ ಬಾರಿ ಬೆಲೆ ಏರಿಕೆಯಾಗಿದ್ದು, ಮಾರ್ಚ್ ತಿಂಗಳಲ್ಲಿ ₹ 60 ಹೆಚ್ಚಿಸಲಾಗಿತ್ತು. ಈಗ ₹ 29 ಏರಿಕೆಯೊಂದಿಗೆ ಕೇವಲ ಮೂರು ತಿಂಗಳಲ್ಲಿ ಒಟ್ಟು ₹ 89 ಹೆಚ್ಚಳವಾಗಿದೆ. ಒಂದು ಕಡೆ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರುತ್ತಿದ್ದರೆ, ಮತ್ತೊಂದೆಡೆ ಅಡುಗೆ ಅನಿಲದ ಬೆಲೆ ಹೆಚ್ಚಿಸುವ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಮಧ್ಯಮ ವರ್ಗ, ಬಡವರು ಮತ್ತು ಗೃಹಿಣಿಯರ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಹಾಕಿದೆ ಎಂದು ಗುಡುಗಿದರು.

ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯ ನೇರ ಪರಿಣಾಮ ಮಹಿಳೆಯರು ನಿರ್ವಹಿಸುವ ಮನೆಯ ಬಜೆಟ್ ಮೇಲೆ ಬೀಳುತ್ತದೆ. ದಿನನಿತ್ಯದ ಖರ್ಚು ನಿಭಾಯಿಸಲು ಸಾಮಾನ್ಯ ಕುಟುಂಬಗಳು ಪರದಾಡುತ್ತಿರುವ ಸಂದರ್ಭದಲ್ಲಿ ಇಂತಹ ನಿರ್ಧಾರಗಳು ಜನವಿರೋಧಿ ಕ್ರಮಗಳಾಗಿವೆ. ಈಗಾಗಲೇ ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದ ಜನರು ತತ್ತರಿಸಿದ್ದಾರೆ. ಕೆಲ ದಿನಗಳ ಹಿಂದೆ ಕೇಂದ್ರ ಸರ್ಕಾರ ವಾಣಿಜ್ಯ ಸಿಲಿಂಡರ್ ದರವನ್ನು ಏರಿಸಿದೆ. ಪರಿಣಾಮ ಹೋಟೆಲ್ ತಿಂಡಿ, ತಿನಿಸುಗಳು, ಟೀ-ಕಾಫಿ ದರ ಏರಿಕೆಯಾಗಿದೆ. ಈಗ ಅಡುಗೆ ಸಿಲಿಂಡರ್ ದರವನ್ನು ಭಾರೀ ಪ್ರಮಾಣದಲ್ಲಿ ಏರಿಸಲಾಗಿದೆ. ಜನಸಾಮಾನ್ಯರ ಬದುಕು ಏನಾಗಬೇಕು? ಎಂದು ಪ್ರಶ್ನಿಸಿದರು.

ಈ ಹಿಂದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿಮ್ಮ ಮಾಂಗಲ್ಯ ಕಸಿಯುತ್ತದೆ ಎಂಬ ಕೀಳು ಮಟ್ಟದ ಹೇಳಿಕೆ ನೀಡಿದ್ದ ಪ್ರಧಾನಿ ಮೋದಿಯವರು ಇಂದು ಜನರ ಬದುಕನ್ನೇ ಕಿತ್ತುಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.ಕೇಂದ್ರ ಸರ್ಕಾರ ತಕ್ಷಣವೇ ಬೆಲೆ ಏರಿಕೆ ನಿರ್ಧಾರವನ್ನು ಹಿಂಪಡೆದು, ಸಾಮಾನ್ಯ ಕುಟುಂಬಗಳಿಗೆ ಪರಿಹಾರ ಒದಗಿಸಬೇಕು. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಬದುಕನ್ನು ಇನ್ನಷ್ಟು ಸಂಕಷ್ಟಕ್ಕೆ ತಳ್ಳುವ ಬದಲು, ಅವರ ಹಿತಾಸಕ್ತಿಯನ್ನು ಕಾಪಾಡುವ ನೀತಿಗಳನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಬಾಕ್ಸ್

ಲಕ್ಷ್ಮೀ ಹೆಬ್ಬಾಳಕರ ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಬೆಳಗಾವಿ: ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬೆಳಗಾವಿಯ ತಮ್ಮ ಗೃಹ ಕಚೇರಿಯಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ ಅಹವಾಲು ಆಲಿಸಿದರು.ಗ್ರಾಮಗಳು ಹಾಗೂ ನಗರದ ವಿವಿಧ ಭಾಗಗಳಿಂದ ಆಗಮಿಸಿದ್ದ ಜನರು ತಮ್ಮ ವೈಯಕ್ತಿಕ, ಸಾಮಾಜಿಕ ಮತ್ತು ಆಡಳಿತಾತ್ಮಕ ಸಮಸ್ಯೆಗಳನ್ನು ಗಮನಕ್ಕೆ ತಂದರು. ಜನರು ಸಲ್ಲಿಸಿದ ಅಹವಾಲುಗಳನ್ನು ಆಲಿಸಿದ ಲಕ್ಷ್ಮೀ ಹೆಬ್ಬಾಳಕರ್, ಕೇವಲ ಸಾಂತ್ವನ ಹೇಳದೇ ಹಲವು ಪ್ರಕರಣಗಳಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ದೂರವಾಣಿ ಮೂಲಕ ಮಾತನಾಡಿ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.ಸರ್ಕಾರಿ ಯೋಜನೆಗಳ ಅನುಷ್ಠಾನ, ಮೂಲಸೌಕರ್ಯ ಅಭಿವೃದ್ಧಿ, ಕಂದಾಯ ಇಲಾಖೆ, ಪಿಂಚಣಿ, ಕುಡಿಯುವ ನೀರು, ರಸ್ತೆ, ಆರೋಗ್ಯ ಹಾಗೂ ಇತರೆ ಸಾರ್ವಜನಿಕ ಸೇವೆಗಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳ ಕುರಿತು ಜನರು ಮನವಿ ಸಲ್ಲಿಸಿದರು. ಹಲವಾರು ಪ್ರಕರಣಗಳಲ್ಲಿ ತಕ್ಷಣವೇ ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕ್ರಮ ಕೈಗೊಳ್ಳಲಾಯಿತು. ಈ ವೇಳೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಖಾಸಗಿ ಶಾಲೆ ಬಸ್‌
ಜಮಖಂಡಿ ವಿವಿಧೆಡೆ ಸರಿದ ಮಳೆ, ತಂಪಾದ ಇಳೆ