ಕೃಷ್ಣಾ ಮೇಲ್ದಂಡೆ 3ನೇ ಹಂತಕ್ಕೆ ತ್ವರಿತವಾಗಿ ಭೂಸ್ವಾಧೀನ

KannadaprabhaNewsNetwork |  
Published : Jul 18, 2025, 12:57 AM IST
ಅರವಿಂದ ಬೆಲ್ಲದ | Kannada Prabha

ಸಾರಾಂಶ

ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಭೂಸ್ವಾಧೀನ ಪ್ರಕ್ರಿಯೆಯನ್ನು ಒಂದೇ ಹಂತದಲ್ಲಿ ತ್ವರಿತವಾಗಿ ಕೈಗೊಳ್ಳಲು ಹಾಗೂ ಭೂಸ್ವಾಧೀನಕ್ಕಾಗಿ ಏಕರೂಪದ ದರ ನಿಗದಿಪಡಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕಾರ ನೀಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಭೂಸ್ವಾಧೀನ ಪ್ರಕ್ರಿಯೆಯನ್ನು ಒಂದೇ ಹಂತದಲ್ಲಿ ತ್ವರಿತವಾಗಿ ಕೈಗೊಳ್ಳಲು ಹಾಗೂ ಭೂಸ್ವಾಧೀನಕ್ಕಾಗಿ ಏಕರೂಪದ ದರ ನಿಗದಿಪಡಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕಾರ ನೀಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಈ ಬಗ್ಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್‌ ಮಾಹಿತಿ ನೀಡಿದರು.

ಕೃಷ್ಣಾ ಭಾಗದ ಶಾಸಕರು ಹಲವು ಸಲಹೆ ನೀಡಿದ್ದು ಮುಖ್ಯಮಂತ್ರಿಗಳು ಸಹ ಯೋಜನೆಯನ್ನು ತ್ವರಿತವಾಗಿ ಕೈಗೆತ್ತಿಕೊಳ್ಳುವ ಅಭಿಪ್ರಾಯ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳುವ ಹಾಗೂ ಭೂಸ್ವಾಧಿನಕ್ಕೆ ಏಕರೂಪ ದರ ನಿಗದಿ ಸೇರಿ ಇತರೆ ಆಡಳಿತಾತ್ಮಕ ವಿಷಯಗಳ ಬಗ್ಗೆ ಚರ್ಚೆಗೆ ಮುಖ್ಯಮಂತ್ರಿಗಳಿಗೆ ಅಧಿಕಾರ ನೀಡಲಾಗಿದೆ.

ಮುಖ್ಯಮಂತ್ರಿಗಳು ಆ ಭಾಗದ ಹಾಲಿ ಮತ್ತು ಮಾಜಿ ಸಚಿವರು, ಶಾಸಕರು ಸೇರಿದಂತೆ ಜನಪ್ರತಿನಿಧಿ, ರೈತ ಪ್ರತಿನಿಧಿಗಳೊಂದಿಗೆ ಚರ್ಚಿಸಿ ತೀರ್ಮಾನಿಸುವುದಾಗಿ ಹೇಳಿದ್ದಾರೆ ಎಂದು ಪಾಟೀಲ್ ತಿಳಿಸಿದರು.

ಕೃಷ್ಣ ಜಲ ವಿವಾದ ನ್ಯಾಯಾಧಿಕರಣ-2ರ ತೀರ್ಪಿನ ಅನ್ವಯ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಅಡಿ ಹಂಚಿಕೆಯಾದ 130 ಟಿಎಂಸಿ ನೀರನ್ನು ಆದ್ಯತೆಯ ಬಳಕೆ ಮಾಡಲಾಗುವುದು. ಜತೆಗೆ ಉತ್ತರ ಕರ್ನಾಟಕದ ವಿಜಯಪುರ, ಬಾಗಲಕೋಟೆ, ರಾಯಚೂರು, ಕಲಬುರ್ಗಿ, ಯಾದಗಿರಿ ಮತ್ತು ಕೊಪ್ಪಳ ಹಾಗೂ ಗದಗ ಜಿಲ್ಲೆಗಳಲ್ಲಿ ಯೋಜಿತ 5.94 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶ ಹೊಂದಲಾಗಿದೆ ಎಂದು ಎಚ್.ಕೆ. ಪಾಟೀಲ್‌ ವಿವರಿಸಿದರು.

ಇಲಾಖೆಗಳ ವಿಲೀನಕ್ಕೆ ನಿರ್ಧಾರ: ಆಯುಷ್ ಇಲಾಖೆಯ ಆಯುರ್ವೇದ, ಸಿದ್ದ ಮತ್ತು ಯುನಾನಿ ಔಷಧಗಳ ಅಮಲುಜಾರಿ ವಿಭಾಗ ಹಾಗೂ ಪರೀಕ್ಷಾ ಪ್ರಯೋಗಾಲಯವನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಜೊತೆಗೆ ವಿಲೀನಗೊಳಿಸಲು ಸಂಪುಟ ಸಭೆ ನಿರ್ಣಯಿಸಿದೆ.126 ಕೆರೆಗಳಿಗೆ ಸಂಸ್ಕರಿಸಿದ ತ್ಯಾಜ್ಯ ನೀರು:ಬೆಂಗಳೂರು ನಗರದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಕೋಲಾರ ಜಿಲ್ಲೆಯ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಒಟ್ಟು 126 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಗೆ ಒಪ್ಪಿಗೆ ನೀಡಲಾಗಿದೆ. ಕಾಮಗಾರಿಯ 5 ವರ್ಷಗಳ ನಿರ್ವಹಣೆ ಸೇರಿ 128 ಕೋಟಿ ರು.ಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.ಬಾಕ್ಸ್‌

ಉತ್ತರ ಕರ್ನಾಟಕ ಪ್ರವಾಸಿ ವೃತ್ತ

ರಾಜ್ಯದಲ್ಲಿ ಪ್ರವಾಸೋದ್ಯಮ ಉತ್ತೇಜಿಸಲು ಹಂಪಿ-ಬದಾಮಿ-ಐಹೊಳೆ-ಪಟ್ಟದಕಲ್ಲು-ವಿಜಯಪುರ ಒಳಗೊಂಡಂತೆ ಉತ್ತರ ಕರ್ನಾಟಕ ಪ್ರವಾಸಿ ವೃತ್ತವನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ದಿಪಡಿಸಲಾಗುವುದು ಎಂದು ಸಚಿವ ಎಚ್.ಕೆ. ಪಾಟೀಲ್ ಹೇಳಿದರು. ಕರ್ನಾಟಕ ಪ್ರವಾಸೋದ್ಯಮ ಮೂಲಸೌಲಭ್ಯ ನಿಗಮದ ಮೂಲಕ 166.22 ಕೋಟಿ ರು. ಅಂದಾಜು ಮೊತ್ತದಲ್ಲಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. 7 ಪ್ರವಾಸಿ ಯೋಜನೆಗಳನ್ನು ಇಲಾಖೆಯ 78.26 ಎಕರೆ ಜಮೀನಿನಲ್ಲಿ ವಿನ್ಯಾಸ, ನಿರ್ಮಾಣ, ಹಣಕಾಸು, ನಿರ್ವಹಣೆ ಮತ್ತು ವರ್ಗಾವಣೆ ಮಾದರಿಯಲ್ಲಿ ಉತ್ತರ ಕರ್ನಾಟಕದ ಪ್ರವಾಸಿ ವೃತ್ತವನ್ನು ಸ್ಥಾಪಿಸಲಾಗುವುದು ಎಂದರು.ಇತರೆ ತೀರ್ಮಾನಗಳು:- ಹೇಮಾವತಿ ಯೋಜನೆಯಡಿ ನಾಗಮಂಗಲ ಶಾಖಾ ನಾಲೆಯ 0 ಕಿ.ಮೀ.ನಿಂದ 78.46 ಕಿ.ಮೀ.ವರೆಗಿನ ನಾಲೆಯ ಅಭಿವೃದ್ಧಿಗೆ 560 ಕೋಟಿ ರು.ಗಳ ವೆಚ್ಚದ ಕಾಮಗಾರಿಗೆ ಆಡಳಿತಾತ್ಮಕ ಒಪ್ಪಿಗೆ.

- ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದವು ಗ್ರಾ.ಪಂ. ಮಟ್ಟದಲ್ಲಿ ಅಳವಡಿಸಿರುವ 1,530 ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ 19.89 ಕೋಟಿ ರು.ಗಳ ವೆಚ್ಚದಲ್ಲಿ ಹೊಸ ಉಪಕರಣ ಅಳವಡಿಕೆ.

- ಮೈಸೂರು ವಿಶ್ವವಿದ್ಯಾಲಯದಲ್ಲಿ 10 ಕೋಟಿ ರು. ವೆಚ್ಚದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಸಂವಿಧಾನ ಪೀಠ ಸ್ಥಾಪನೆ.

- ಅಂತರ್ಜಲ ಬಳಕೆಗೆ ನಿರಾಕ್ಷೇಪಣಾ ಪತ್ರ ನೀಡುವ ಸಂಬಂಧ ಕೇಂದ್ರಿಯ ಅಂತರ್ಜಲ ಪ್ರಾಧಿಕಾರ ಹೊರಡಿಸಿರುವ ಮಾರ್ಗಸೂಚಿಗೆ ಸೂಕ್ತ ಮಾರ್ಪಾಡುಗಳೊಂದಿಗೆ ರಾಜ್ಯದಲ್ಲಿ ಜಾರಿ ಮಾಡಲು ತೀರ್ಮಾನ.

- 64 ಕೋಟಿ ರು. ವೆಚ್ಚದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲಾ ಕಾಲೇಜುಗಳ ಕಟ್ಟಡ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ.

- ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಕಿತ್ತೂರು ಕೋಟೆ ಆವರಣದಲ್ಲಿ 30.00 ಕೋಟಿ ರು. ವೆಚ್ಚದ ಥೀಮ್ ಪಾರ್ಕ್ ನಿರ್ಮಾಣ.

PREV

Latest Stories

ಅಂಗನವಾಡಿ ಮಕ್ಕಳ ಅನುಕೂಲಕ್ಕಾಗಿ 'ಅಪಾರ್‌ ಐಡಿ': ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿ
ರಾಜ್ಯದ 14 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ
ಲಾಕ್ಡೌನ್ನಿಂದ ಹುಟ್ಟಿ, ಕಪೆಕ್ನಿಂದ ಬೆಳೆದು ನಿಂತ ಉದ್ಯಮ