
ಕನ್ನಡಪ್ರಭ ವಾರ್ತೆ ತುಮಕೂರು
ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವತಿಯಿಂದ ಶನಿವಾರ ಆಯೋಜಿಸಿದ್ದ ಜರ್ನೋವ- 2026 ಕಾರ್ಯಕ್ರಮದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಪತ್ರಿಕೋದ್ಯಮದಲ್ಲಿ ಭಾಷೆಯ ಮೇಲಿನ ಹಿಡಿತ ಮಹತ್ವದ ಪಾತ್ರ ವಹಿಸುತ್ತದೆ. ವಿಷಯವನ್ನು ಸ್ಪಷ್ಟವಾಗಿ, ಸರಳವಾಗಿ ಮತ್ತು ಪರಿಣಾಮಕಾರಿಯಾಗಿ ಅಭಿವ್ಯಕ್ತಿಸುವ ಸಾಮರ್ಥ್ಯ ಬೆಳೆಸಿಕೊಂಡಾಗ ಮಾತ್ರ ಓದುಗರ ಗಮನ ಸೆಳೆಯಲು ಸಾಧ್ಯ. ಇದಕ್ಕಾಗಿ ವಿದ್ಯಾರ್ಥಿಗಳು ಪಠ್ಯಪುಸ್ತಕಗಳ ಅಧ್ಯಯನಕ್ಕೆ ಸೀಮಿತವಾಗದೆ, ದಿನಪತ್ರಿಕೆಗಳು, ನಿಯತಕಾಲಿಕೆಗಳು ಹಾಗೂ ವಿವಿಧ ಮಾಧ್ಯಮಗಳಲ್ಲಿ ಪ್ರಕಟವಾಗುವ ಸುದ್ದಿಗಳನ್ನು ನಿರಂತರವಾಗಿ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದರು.ಸುದ್ದಿ ಅಥವಾ ಘಟನೆಗಳನ್ನು ಕೇಳುಗರಿಗೆ ಮತ್ತು ವೀಕ್ಷಕರಿಗೆ ಸರಿಯಾದ ರೂಪದಲ್ಲಿ ತಲುಪಿಸುವುದು ಪತ್ರಕರ್ತರ ಜವಾಬ್ದಾರಿಯಾಗಿದೆ. ಸಮಾಜದಲ್ಲಿ ನಡೆಯುವ ಘಟನೆಗಳ ವಾಸ್ತವಾಂಶಗಳನ್ನು ಅರಿತು, ಸತ್ಯವನ್ನು ಜನರಿಗೆ ತಲುಪಿಸುವುದೇ ಪತ್ರಿಕೋದ್ಯಮದ ಮೂಲ ಉದ್ದೇಶ. ಸುದ್ದಿಯ ಬರವಣಿಗೆಯಲ್ಲಿ ಸ್ಪಷ್ಟತೆ ಮತ್ತು ವಸ್ತುನಿಷ್ಠತೆಗೆ ಆದ್ಯತೆ ನೀಡಬೇಕು. ಪತ್ರಕರ್ತರು ಸತ್ಯಾಸತ್ಯತೆ ಪರಿಶೀಲಿಸದೆ ಯಾವುದೇ ಸುದ್ದಿಯನ್ನು ಪ್ರಕಟಿಸಬಾರದು ಎಂದರು.
ವಿಭಾಗದ ಅಧ್ಯಕ್ಷರಾದ ಡಾ. ಸಿಬಂತಿ ಪದ್ಮನಾಭ ಕೆ.ವಿ. ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಎತ್ತರಕ್ಕೆ ಏರಿದಾಗ ಗುರುಗಳಿಗೆ ಆಗುವ ಸಂತೋಷಕ್ಕೆ ಮತ್ತೊಂದೂ ಸಾಟಿಯಿಲ್ಲ. ವಿದ್ಯಾರ್ಥಿಗಳ ಬೆಳವಣಿಗೆ ಮತ್ತು ಯಶಸ್ಸನ್ನು ಬಯಸುವವರೇ ನಿಜವಾದ ಗುರುಗಳು. ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತಮ ಅಭ್ಯಾಸಗಳನ್ನು ರೂಢಿಸಿಕೊಂಡು, ಸ್ಪಷ್ಟವಾದ ಗುರಿಯನ್ನು ಹೊಂದಿರಬೇಕು ಎಂದು ಹೇಳಿದರು.
ಹಿರಿಯ ವಿದ್ಯಾರ್ಥಿಗಳು ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು.