- 4 ವಾರ್ಡ್‌ಗಳಲ್ಲಿ ರಸ್ತೆ, ಪಾರ್ಕ್, ಚರಂಡಿ ಅಭಿವೃದ್ಧಿಗೆ ಶಾಸಕ ಭೂಮಿಪೂಜೆ
ಕನ್ನಡಪ್ರಭ ವಾರ್ತೆ ದಾವಣಗೆರೆ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವಿವಿಧ ವಾರ್ಡ್‌ಗಳಲ್ಲಿ ಮಹಾನಗರ ಪಾಲಿಕೆಯ ಸಾಮಾನ್ಯ ನಿಧಿಯಡಿ ಒಟ್ಟು ₹1.17 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಿರುವ ರಸ್ತೆ, ಉದ್ಯಾನವನ, ಚರಂಡಿ ಹಾಗೂ ಇತರ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸಮರ್ಥ್ ಶಾಮನೂರು ಸೋಮವಾರ ಭೂಮಿಪೂಜೆ ನೆರವೇರಿಸಿದರು.ಕ್ಷೇತ್ರದ ವಾರ್ಡ್ ಸಂಖ್ಯೆ 1, 7, 21 ಹಾಗೂ 25 ರಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕರು, ಸ್ಥಳೀಯ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು. ಸಾರ್ವಜನಿಕರ ಅಗತ್ಯಗಳಿಗೆ ಅನುಗುಣವಾಗಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದರ ಜೊತೆಗೆ ಕಾಮಗಾರಿಗಳನ್ನು ಗುಣಮಟ್ಟದಿಂದ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮಹಾನಗರ ಪಾಲಿಕೆಯ 7ನೇ ವಾರ್ಡ್‌ನಲ್ಲಿ 2026–27ನೇ ಸಾಲಿನ ಸಾಮಾನ್ಯ ನಿಧಿಯಡಿ ₹14.96 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಹಾಗೂ ₹9.50 ಲಕ್ಷ ವೆಚ್ಚದ ಪೇವರ್ಸ್ ಅಳವಡಿಕೆ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಈ ಕಾಮಗಾರಿಗಳಿಂದ ಸ್ಥಳೀಯ ನಿವಾಸಿಗಳಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಉದ್ದೇಶ ಹೊಂದಲಾಗಿದೆ.
1ನೇ ವಾರ್ಡ್ ಗಾಂಧಿನಗರ ಸರ್ಕಲ್ ಹಾಗೂ ಚೌಡೇಶ್ವರಿ ನಗರದ ಉದ್ಯಾನವನಗಳ ಅಭಿವೃದ್ಧಿಗೆ 2025–26ನೇ ಸಾಲಿನ ಸಾಮಾನ್ಯ ನಿಧಿಯಡಿ ₹25 ಲಕ್ಷ ವೆಚ್ಚದ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು. ಮಕ್ಕಳಿಗೆ ಆಟವಾಡಲು, ಹಿರಿಯ ನಾಗರಿಕರಿಗೆ ವಾಯುವಿಹಾರ ಹಾಗೂ ಸಾರ್ವಜನಿಕರಿಗೆ ವಿಶ್ರಾಂತಿ ಪಡೆಯಲು ಅನುಕೂಲ ಆಗುವಂತೆ ಉದ್ಯಾನಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ.
ಗುಣಮಟ್ಟಕ್ಕೆ ಆದ್ಯತೆ:
ನಗರದ ಸೌಂದರ್ಯ ಹೆಚ್ಚಿಸುವುದರ ಜೊತೆಗೆ ಮಕ್ಕಳಿಗೆ ಆಟದ ಮೈದಾನ, ಹಿರಿಯರಿಗೆ ವಾಯುವಿಹಾರಕ್ಕೆ ಅನುಕೂಲಕರ ವಾತಾವರಣ ಹಾಗೂ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕಿದೆ. ಮಳೆಗಾಲದಲ್ಲಿ ನೀರು ನಿಲ್ಲದಂತೆ ಚರಂಡಿ ವ್ಯವಸ್ಥೆ ಸುಧಾರಣೆಗೂ ಒತ್ತು ನೀಡಲಾಗುತ್ತಿದೆ. ಬೇಡಿಕೆಗಳಿಗೆ ಅನುಗುಣವಾಗಿ ಮೂಲಸೌಕರ್ಯಗಳನ್ನು ಕಲ್ಪಿಸುವ ಮೂಲಕ ಸ್ವಚ್ಛ, ಸುಂದರ ಹಾಗೂ ಸುಸಜ್ಜಿತ ದಾವಣಗೆರೆ ನಿರ್ಮಾಣಕ್ಕೆ ಶ್ರಮಿಸಲಾಗುವುದು ಎಂದು ಹೇಳಿದರು.
- - -