ಕಾಲುಬಾಯಿ ಬೇನೆ ಸಾಂಕ್ರಾಮಿಕ ರೋಗ-ಡಾ. ಸಂತಿ

KannadaprabhaNewsNetwork |  
Published : Apr 02, 2024, 01:03 AM IST
೧ಎಚ್‌ವಿಆರ್೬ | Kannada Prabha

ಸಾರಾಂಶ

ಕಾಲುಬಾಯಿ ಬೇನೆ ರೋಗವು ಸಾಂಕ್ರಾಮಿಕ ರೋಗವಾಗಿದ್ದು, ಇದನ್ನು ನಮ್ಮ ದೇಶದಿಂದ ಸಂಪೂರ್ಣವಾಗಿ ಹೋಗಲಾಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಅನುದಾನದಲ್ಲಿ ವರ್ಷಕ್ಕೆ ಎರಡು ಬಾರಿಯಂತೆ ಅರ್ಹ ಜಾನುವಾರುಗಳಿಗೆ ಕಡ್ಡಾಯ ಲಸಿಕೆ ಹಾಕಲಾಗುತ್ತಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆ ಉಪ ನಿರ್ದೇಶಕ ಡಾ. ಎಸ್.ವಿ. ಸಂತಿ ಹೇಳಿದರು.

ಹಾವೇರಿ: ಕಾಲುಬಾಯಿ ಬೇನೆ ಸಾಂಕ್ರಾಮಿಕ ರೋಗವಾಗಿದ್ದು, ಇದನ್ನು ನಮ್ಮ ದೇಶದಿಂದ ಸಂಪೂರ್ಣವಾಗಿ ಹೋಗಲಾಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಅನುದಾನದಲ್ಲಿ ವರ್ಷಕ್ಕೆ ಎರಡು ಬಾರಿಯಂತೆ ಅರ್ಹ ಜಾನುವಾರುಗಳಿಗೆ ಕಡ್ಡಾಯ ಲಸಿಕೆ ಹಾಕಲಾಗುತ್ತಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆ ಉಪ ನಿರ್ದೇಶಕ ಡಾ. ಎಸ್.ವಿ. ಸಂತಿ ಹೇಳಿದರು.ನಗರದ ಆಸ್ಪತ್ರೆ ಆವರಣದಲ್ಲಿ ಸೋಮವಾರ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಐದನೇ ಸುತ್ತಿನ ಕಾಲುಬಾಯಿ ಬೇನೆ ಲಸಿಕಾ ಕಾರ್ಯಕ್ರಮಕ್ಕೆ ಹಸುಗಳಿಗೆ ಪೂಜೆ ಮಾಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಏ.೧ರಿಂದ ಏ. ೩೦ರವರೆಗೆ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಎಲ್ಲ ರೈತರು ಸಹಕಾರ ನೀಡಬೇಕು. ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಯವರು ಪ್ರತಿ ದಿನ ಬೆಳಗ್ಗೆ ೬ರಿಂದ ನಿಗದಿಪಡಿಸಿದ ವೇಳಾಪಟ್ಟಿಯನ್ವಯ ಗ್ರಾಮಗಳಿಗೆ ತೆರಳಿ ರೈತರ ಮನೆ ಬಾಗಿಲಲ್ಲೆ ಲಸಿಕೆ ಹಾಕಲಾಗುತ್ತದೆ. ಲಸಿಕಾ ಕಾರ್ಯಕ್ರಮಕ್ಕೆ ನಿಯೋಜಿಸಲ್ಪಟ್ಟ ಮೇಲ್ವಿಚಾರಕರು ಹಾಗೂ ಲಸಿಕಾದಾರರು ಯುದ್ದೋಪಾದಿಯಲ್ಲಿ ಈ ಕಾರ್ಯಕ್ರಮವನ್ನು ಕೈಗೊಂಡು ಅರ್ಹ ಎಲ್ಲ ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಬೇಕು ಎಂದರು.ಪಾಲಿಕ್ಲಿನಿಕ್ ಉಪನಿರ್ದೇಶಕ ಡಾ.ಜಿ.ವಿ. ಜಯಣ್ಣ ಮಾತನಾಡಿ, ಹಾನುವಾರುಗಳ ಕಾಲು ಬಾಯಿ ಬೇನೆಯಿಂದ ರೈತರಿಗೆ ಆರ್ಥಿಕ ಹಾನಿ ಉಂಟಾಗುವುದಲ್ಲದೇ ಅದರ ಪರಿಣಾಮಗಳಿಂದಾಗಿ ಜೀವಿತಾವಧಿಯವರೆಗೂ ಜಾನುವಾರುಗಳ ಹಾಲು ಉತ್ಪಾದನಾ ಸಾಮರ್ಥ್ಯ ಹಾಗೂ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಹೀಗಾಗಿ ಜಾನುವಾರು ಮಾಲೀಕರು ತಮ್ಮಲ್ಲಿರುವ ತಪ್ಪುಕಲ್ಪನೆಗಳನ್ನು ಬಿಟ್ಟು ಲಸಿಕೆ ಹಾಕಲು ಬಂದ ಇಲಾಖಾ ಸಿಬ್ಬಂದಿಯವರೊಂದಿಗೆ ಸಹಕರಿಸಿ ರೋಗದ ಹತೋಟಿಗಾಗಿ ಕೈಜೋಡಿಸಬೇಕೆಂದು ಮನವಿ ಮಾಡಿಕೊಂಡರು. ಕಾಲುಬಾಯಿ ಲಸಿಕಾ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಅಂದಾಜು ೩.೫೮ ಲಕ್ಷ ಜಾನುವಾರುಗಳನ್ನು ಗುರುತಿಸಲಾಗಿದೆ. ಪಶುಪಾಲನಾ ಇಲಾಖೆಯ ಹಾಗೂ ಇಲಾಖೇತರ ಲಸಿಕೆದಾರರನ್ನು ಒಳಗೊಂಡು ಇಬ್ಬರು ಲಸಿಕಾದಾರರಿರುವ ಒಟ್ಟು ೧೪೧ ತಂಡಗಳನ್ನು ರಚಿಸಲಾಗಿದೆ. ಪ್ರತಿ ತಾಲೂಕಿನಲ್ಲಿ ಲಸಿಕಾ ವೇಳಾ ಪಟ್ಟಿ ಮತ್ತು ಜಾನುವಾರು ಹೊಂದಿರುವ ರೈತರ ಮಾಹಿತಿಯನ್ನು ಗ್ರಾಮವಾರು ತಯಾರಿಸಲಾಗಿದೆ. ಅದರಲ್ಲಿ ಗ್ರಾಮಗಳ ಹೆಸರು, ಜಾನುವಾರುಗಳ ಸಂಖ್ಯೆ, ಜಾನುವಾರು ಮಾಲೀಕರ ಹೆಸರು, ಮೊಬೈಲ್ ಸಂಖ್ಯೆ, ಆಧಾರ ಸಂಖ್ಯೆ, ಲಸಿಕಾದಾರರ ವಿವರ ಹಾಗೂ ಜಾನುವಾರುವಿನ ಕಿವಿ ಓಲೆ ಸಂಖ್ಯೆ ವಿವರಗಳು ಲಭ್ಯವಿರುತ್ತವೆ. ಪ್ರತಿ ಗ್ರಾಮ ಅಥವಾ ನಗರ ಪ್ರದೇಶವನ್ನು ೧೦೦ ರಿಂದ ೧೨೦ ಜಾನುವಾರುಗಳಿಗೆ ಒಂದು ಬ್ಲಾಕ್ ಎಂದು ವರ್ಗೀಕರಿಸಿ ಒಟ್ಟು ೩೨೧೪ ಬ್ಲಾಕ್‌ಗಳಲ್ಲಿ ಲಸಿಕಾದಾರರು ಲಸಿಕೆಯನ್ನು ಹಾಕಲಿದ್ದಾರೆ. ಪ್ರತಿ ಜಾನುವಾರಿಗೆ ಒಂದರಂತೆ ಸೀರಿಂಜ್ ಉಪಯೋಗಿಸಿ ಲಸಿಕೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಹಾವೇರಿ ತಾಲೂಕಿನ ಮುಖ್ಯ ಪಶುವೈದ್ಯಾಧಿಕಾರಿ ಡಾ.ಪಿ.ಎನ್.ಹುಬ್ಬಳ್ಳಿ ಹಾಗೂ ಹಾವೇರಿ ತಾಲೂಕಿನ ಲಸಿಕಾ ಮೇಲ್ವಿಚಾರಕರು, ಲಸಿಕಾದಾರರು ಹಾಗೂ ರೈತರು ಇದ್ದರು.

PREV

Latest Stories

ಏಕರೂಪ ಸಿನಿಮಾ ಟಿಕೆಟ್‌ ದರಕ್ಕೆ ಕರಡು- ಗರಿಷ್ಠ ಟಿಕೆಟ್‌ ದರ ₹200 ನಿಗದಿ
ಶಾಲೆಯಲ್ಲಿನ ಕಲುಷಿತ ಬಿಸಿಯೂಟ ಸೇವಿಸಿ 68 ವಿದ್ಯಾರ್ಥಿಗಳು ಅಸ್ವಸ್ಥ
ರಾಷ್ಟ್ರೀಯ ಲೋಕ ಅದಾಲತ್: 58.67 ಲಕ್ಷ ಕೇಸ್ ಇತ್ಯರ್ಥ