ಉದಯಗಿರಿ ಠಾಣೆ ಮೇಲಿನ ಕಲ್ಲು ತೂರಾಟ ಸಂಬಂಧ ಉತ್ತರಿಸಿ

KannadaprabhaNewsNetwork | Published : Feb 19, 2025 12:46 AM

ಸಾರಾಂಶ

ಉದಯಗಿರಿ ಠಾಣೆ ಮೇಲಿನ ದಾಳಿ ಪ್ರಕರಣದಲ್ಲಿ ಮೂರು ರಾಜಕೀಯ ಪಕ್ಷಗಳು ರಾಜಕಾರಣ ಮಾಡುತ್ತಿವೆ. ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಪಕ್ಷಗಳು ರಾಜಕಾರಣ ಮಾಡುತ್ತಿವೆ.

ಕನ್ನಡಪ್ರಭ ವಾರ್ತೆ ಮೈಸೂರು

ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಬೇಕು ಎಂದು ವಿಧಾನಪರಿಷತ್ತು ಸದಸ್ಯ ಎಚ್. ವಿಶ್ವನಾಥ್ ಆಗ್ರಹಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕಾನೂನಿನ ಮೇಲೆ ಯಾರಿಗೂ ಭಯ ಇಲ್ಲದಂತಾಗಿದೆ. ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಉದಯಗಿರಿ ಠಾಣೆ ಮೇಲಿನ ದಾಳಿ ಪ್ರಕರಣದಲ್ಲಿ ಮೂರು ರಾಜಕೀಯ ಪಕ್ಷಗಳು ರಾಜಕಾರಣ ಮಾಡುತ್ತಿವೆ. ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಪಕ್ಷಗಳು ರಾಜಕಾರಣ ಮಾಡುತ್ತಿವೆ. ಈ ಸರ್ಕಾರವನ್ನು ರಾಜ್ಯದ ಜನರು ಆಯ್ಕೆ ಮಾಡಿದ್ದಾರೆ. ಎಲ್ಲದಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಬೇಕು ಎಂದು ಒತ್ತಾಯಿಸಿದರು.

ಸಿದ್ದರಾಮಯ್ಯ ಸರ್ಕಾರದಲ್ಲಿ ಶಾಸಕಾಂಗಕ್ಕೆ ಬೆಲೆಯೇ ಇಲ್ಲದಂತಾಗಿದೆ. ಬಜೆಟ್ ಕುರಿತು ಶಾಸಕಾಂಗ ಒಪ್ಪಿಗೆ ನೀಡುತ್ತದೆ. ಆದರೆ, ಸರ್ಕಾರ ಶಾಸಕಾಂಗ ಒಪ್ಪಿಗೆ ನೀಡಿದ ಬಜೆಟ್ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಏನು ಮಾಡಿದೆ. ಕಳೆದ ಬಾರಿಯ ಬಜೆಟ್ ಏನಾಯಿತು ಎಂದು ಅವರು ಪ್ರಶ್ನಿಸಿದರು.

ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗುತ್ತಿಲ್ಲ. ಹೆಂಡ್ತಿಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರ್ತಿಲ್ಲ ಅಂತಾ ಗಂಡಂದಿರು ಹೇಳ್ತಿದಾರೆ. ಇದರಿಂದ ಮನೆಗಳು ಮುರಿದು ಹೋಗುವ ಪರಿಸ್ಥಿತಿ ಬಂದಿದೆ ಎಂದು ಅವರು ಕುಟುಕಿದರು.

ವಿವಿ ಕುಲಪತಿ ಹುದ್ದೆ ಪಡೆಯಲು 5 ಕೋಟಿ ಫಿಕ್ಸ್ ಮಾಡಿದ್ದೇ ಈ ಹಿಂದಿನ ಬಿಜೆಪಿ ಸರ್ಕಾರ. ಅದು ಈಗಲೂ ಮುಂದುವರಿದಿದೆ. ಈ ವಿಚಾರ ಎಲ್ಲರಿಗೂ ಗೊತ್ತಿದೆ. ಹಲವು ವಿವಿಗಳನ್ನು ಬಂದ್ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿಲುವು ಸರಿಯಾಗಿದೆ ಎಂದು ಅವರು ಸ್ವಾಗತಿಸಿದರು.

ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಉತ್ತರಪ್ರದೇಶ ಸರ್ಕಾರ ಮಾಡಿರುವ ವ್ಯವಸ್ಥೆ ಅತ್ಯುತ್ತಮವಾಗಿದೆ. ಸಣ್ಣಪುಟ್ಟ ಘಟನೆ ಹೊರತುಪಡಿಸಿ ಇಡೀ ಕುಂಭಮೇಳದ ವ್ಯವಸ್ಥೆ ಚೆನ್ನಾಗಿದೆ. ಒಂದು ಮನೆ ನಡೆಸೋದೇ ಕಷ್ಟ. ಕೋಟ್ಯಂತರ ಜನರು ಭಾಗಿಯಾಗಿರುವ ಕುಂಭಮೇಳ ಯಶಸ್ವಿಯಾಗಿ ‌ನಡೆದಿದೆ. ಇದಕ್ಕಾಗಿ ಉತ್ತರಪ್ರದೇಶ ಸರ್ಕಾರ ಸೂಕ್ತ ವ್ಯವಸ್ಥೆ ಮಾಡಿದೆ ಎಂದು ಅವರು ಶ್ಲಾಘಿಸಿದರು.

Share this article