ರಾಜ್ಯದ ಎಲ್ಲಾ ತಾಲೂಕು ವಕೀಲರ ಸಂಘಗಳಿಗೆ ವರ್ಷಕ್ಕೆ 5 ಲಕ್ಷ ರು. ಅನುದಾನ ಮಂಜೂರು ಮಾಡಬೇಕು. ಜಿಲ್ಲಾ ವಕೀಲರ ಸಂಘಗಳಿಗೆ 10 ಲಕ್ಷ ರು. ಅನುದಾನ ನೀಡಬೇಕು. ಸರ್ಕಾರ ವಕೀಲರಿಗೆ ಕಡ್ಡಾಯವಾಗಿ ವೈದ್ಯಕೀಯ ಮತ್ತು ಜೀವ ವಿಮಾ ಸೌಲಭ್ಯವನ್ನು ಒದಗಿಸಬೇಕು.
ಕನ್ನಡಪ್ರಭ ವಾರ್ತೆ ಮಂಡ್ಯ
ಪೊಲೀಸರ ಏಕಪಕ್ಷೀಯ ವರ್ತನೆಗಳಿಂದ ವಕೀಲರಿಗೆ ರಕ್ಷಣೆ ನೀಡುವುದು, ವಕೀಲರ ಸಂರಕ್ಷಣೆ ಕಾಯ್ದೆ 2024ಕ್ಕೆ ಸೂಕ್ತ ತಿದ್ದುಪಡಿಗೆ ಒತ್ತಾಯಿಸಿ, ಅಖಿಲ ಭಾರತ ವಕೀಲರ ಒಕ್ಕೂಟದ ಸದಸ್ಯರು ಜಿಲ್ಲಾಧಿಕಾರಿ ಕುಮಾರ್ ಅವರ ಮೂಲಕ ಸರ್ಕಾರಕ್ಕೆ ಶುಕ್ರವಾರ ಮನವಿ ಸಲ್ಲಿಸಿದರು.
ಡೀಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ಒಕ್ಕೂಟದ ಸದಸ್ಯರು, ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ಮಾರ್ಗಸೂಚಿಯನ್ನು ಪಾಲಿಸಬೇಕು. ಕಿರಿಯ ವಕೀಲರಿಗೆ ಎರಡು ವರ್ಷಗಳ ಕಾಲ ಮಾಸಿಕ 10 ಸಾವಿರ ರು. ಸಹಾಯಧನ ನೀಡಬೇಕು ಎಂದು ಆಗ್ರಹಿಸಿದರು.
ರಾಜ್ಯದ ಎಲ್ಲಾ ತಾಲೂಕು ವಕೀಲರ ಸಂಘಗಳಿಗೆ ವರ್ಷಕ್ಕೆ 5 ಲಕ್ಷ ರು. ಅನುದಾನ ಮಂಜೂರು ಮಾಡಬೇಕು. ಜಿಲ್ಲಾ ವಕೀಲರ ಸಂಘಗಳಿಗೆ 10 ಲಕ್ಷ ರು. ಅನುದಾನ ನೀಡಬೇಕು. ಸರ್ಕಾರ ವಕೀಲರಿಗೆ ಕಡ್ಡಾಯವಾಗಿ ವೈದ್ಯಕೀಯ ಮತ್ತು ಜೀವ ವಿಮಾ ಸೌಲಭ್ಯವನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣಗಳಲ್ಲಿ ವಕೀಲರ ಅಕಾಡೆಮಿಗಳನ್ನು ಸ್ಥಾಪಿಸಬೇಕು. ರಾಜ್ಯದಲ್ಲಿ ಹೆಚ್ಚುವರಿ ನ್ಯಾಯಾಲಯಗಳ ಸ್ಥಾಪನೆ, ಈಗಿರುವ ನ್ಯಾಯಾಲಯಗಳಲ್ಲಿ ಮೂಲ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದ ಎಲ್ಲ ನ್ಯಾಯಾಲಯಗಳ ಆವರಣದಲ್ಲಿ ವಕೀಲರಿಗೆ ಛೇಂಬರ್‌ಗಳನ್ನು ಸ್ಥಾಪಿಸಬೇಕು. ರೆವಿನ್ಯೂ ಉಪ ವಿಭಾಗಾಧಿಕಾರಿ, ಜಿಲ್ಲಾಧಿಕಾರಿ ನ್ಯಾಯಾಲಯಗಳಲ್ಲಿ ನಡೆಯುವ ಕಂದಾಯ ಪ್ರಕರಣಗಳಲ್ಲಿ ಬೇರೆ ಬೇರೆ ರೀತಿಯ ಒತ್ತಡಗಳು ಮತ್ತು ವಿಳಂಬದ ಕಾರಣ ಸರಿಯಾದ ರೀತಿಯಲ್ಲಿ ವಿಚಾರಣೆ ನಡೆಯದೆ ಸಕ್ರಮವಾದ ತೀರ್ಪುಗಳು ಆಗದೆ ಇರುವುದರಿಂದ ಕಂದಾಯ ಪ್ರಕರಣಗಳನ್ನು ಸಿವಿಲ್ ನ್ಯಾಯಾಲಯಗಳಿಗೆ ವರ್ಗಾಯಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ವಕೀಲರಿಗೆ ಟೋಲ್ ಶುಲ್ಕ ರಹಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಬೇಕು. ರಾಜ್ಯದ ಪ್ರತಿ ಜಿಲ್ಲೆಗೆ ಒಂದರಂತೆ ಸರ್ಕಾರಿ ಕಾನೂನು ಕಾಲೇಜುಗಳನ್ನು ಸ್ಥಾಪಿಸಬೇಕು. ಅನುದಾನಿತ ಮತ್ತು ಖಾಸಗಿ ಕಾನೂನು ಕಾಲೇಜುಗಳ ಶುಲ್ಕವನ್ನು ಸರ್ಕಾರ ನಿಯಂತ್ರಣ ಮಾಡಬೇಕು. ಹಾಲಿ ಇರುವ ಸರ್ಕಾರಿ ಕಾಲೇಜುಗಳಲ್ಲಿ ಮೂಲ ಸೌಕರ್ಯ ಒದಗಿಸಬೇಕು ಎಂದು ಆಗ್ರಹ ಪಡಿಸಿದರು.
ರಾಜ್ಯ ವಕೀಲರ ಪರಿಷತ್ತಿನ ಕಚೇರಿಯನ್ನು ವಿಭಾಗೀಯ ಮಟ್ಟದಲ್ಲಿ ಸ್ಥಾಪಿಸಬೇಕು. ವಕೀಲರ ಸಂಘದ, ಪರಿಷತ್ತಿನ ಚುನಾವಣೆಯಲ್ಲಿ ಮಹಿಳಾ ವಕೀಲರಿಗೆ ಶೇ.33ರಷ್ಟು ಮೀಸಲಾತಿ ನೀಡಬೇಕು. ನಮ್ಮ ಎಲ್ಲ ಬೇಡಿಕೆಗಳನ್ನು ಇನ್ನೊಂದು ತಿಂಗಳಲ್ಲಿ ಈಡೇರಿಸದಿದ್ದರೆ ವಕೀಲರ ಪ್ರತಿಭಟನೆಗೆ ಕರೆ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಟಿ.ವಿಶ್ವನಾಥ್, ರಾಜ್ಯ ಸಮಿತಿ ಸದಸ್ಯರಾದ ಆರ್.ಜಗನ್ನಾಥ್, ತಿಮ್ಮೇಗೌಡ, ಮಾಜಿ ಸರ್ಕಾರಿ ಅಭಿಯೋಜಕ ಎಂ.ಮಹೇಶ್, ವಕೀಲರಾದ ಕಿಶೋರ್ ಕೆಂಪಯ್ಯ, ಯೋಗೇಶ್ ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.