ಪ್ರತಿಭಟನೆಯಲ್ಲಿ ಮಾತನಾಡಿದ ಹಿರಿಯ ವಕೀಲ ಎಸ್. ಎನ್. ಲಿಂಗೇಶ್, “ಇತ್ತೀಚಿನ ದಿನಗಳಲ್ಲಿ ಆನೆಗಳ ದಾಳಿಗೆ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಈವರೆಗೆ 14 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸರ್ಕಾರ ಕೇವಲ ಭರವಸೆಗಳನ್ನು ನೀಡುತ್ತಿದೆಯೇ ಹೊರತು ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳುತ್ತಿಲ್ಲ. ಆನೆಗಳನ್ನು ಎಲ್ಲಿಗೆ ಸ್ಥಳಾಂತರಿಸಬೇಕು ಎಂಬ ಬಗ್ಗೆ ಸ್ಪಷ್ಟತೆಯಿಲ್ಲದೆ ಸ್ಥಳೀಯರಿಂದ ವಿರೋಧ ವ್ಯಕ್ತವಾಗುತ್ತಿದೆ. ಸರ್ಕಾರದ ಈ ನಿರ್ಲಕ್ಷ್ಯದ ವಿರುದ್ಧ ಹೈಕೋರ್ಟ್‌ನಲ್ಲಿ ಪಿಐಎಲ್ ದಾಖಲಿಸಲು ಚಿಂತನೆ ನಡೆದಿದೆ” ಎಂದರು.
ಕನ್ನಡಪ್ರಭ ವಾರ್ತೆ ಬೇಲೂರುತಾಲೂಕಿನಾದ್ಯಂತ ತೀವ್ರಗೊಂಡಿರುವ ಕಾಡಾನೆಗಳ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟಿ ಸಂತ್ರಸ್ತ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ತಾಲೂಕು ವಕೀಲರ ಸಂಘದ ವತಿಯಿಂದ ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆಯಲ್ಲಿ ಮಾತನಾಡಿದ ಹಿರಿಯ ವಕೀಲ ಎಸ್. ಎನ್. ಲಿಂಗೇಶ್, “ಇತ್ತೀಚಿನ ದಿನಗಳಲ್ಲಿ ಆನೆಗಳ ದಾಳಿಗೆ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಈವರೆಗೆ 14 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸರ್ಕಾರ ಕೇವಲ ಭರವಸೆಗಳನ್ನು ನೀಡುತ್ತಿದೆಯೇ ಹೊರತು ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳುತ್ತಿಲ್ಲ. ಆನೆಗಳನ್ನು ಎಲ್ಲಿಗೆ ಸ್ಥಳಾಂತರಿಸಬೇಕು ಎಂಬ ಬಗ್ಗೆ ಸ್ಪಷ್ಟತೆಯಿಲ್ಲದೆ ಸ್ಥಳೀಯರಿಂದ ವಿರೋಧ ವ್ಯಕ್ತವಾಗುತ್ತಿದೆ. ಸರ್ಕಾರದ ಈ ನಿರ್ಲಕ್ಷ್ಯದ ವಿರುದ್ಧ ಹೈಕೋರ್ಟ್‌ನಲ್ಲಿ ಪಿಐಎಲ್ ದಾಖಲಿಸಲು ಚಿಂತನೆ ನಡೆದಿದೆ” ಎಂದರು.
ವಕೀಲರ ಸಂಘದ ಅಧ್ಯಕ್ಷ ಕೆ. ಎಲ್. ನಟರಾಜ್ ಮಾತನಾಡಿ, “ಮಲೆನಾಡು ಭಾಗದಲ್ಲಿ ಕಳೆದ ಒಂದು ವರ್ಷದಿಂದ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಸಂಜೆ 4 ಗಂಟೆಯ ನಂತರ ರೈತರು ಹಾಗೂ ಕೂಲಿ ಕಾರ್ಮಿಕರು ರಸ್ತೆಯಲ್ಲಿ ಓಡಾಡುವುದೇ ದುಸ್ತರವಾಗಿದೆ. ರೈತರಿಗೆ ಬೆಳೆ ಪರಿಹಾರವೂ ಸರಿಯಾಗಿ ವಿತರಣೆಯಾಗುತ್ತಿಲ್ಲ. ತಕ್ಷಣವೇ ಆನೆಗಳನ್ನು ಬೇರೆಡೆಗೆ ಸ್ಥಳಾಂತರಿಸಿ ಜನಜೀವನ ಸುಗಮಗೊಳಿಸಬೇಕು. ಇಲ್ಲದಿದ್ದರೆ ಅರಣ್ಯ ಸಚಿವರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ದಾಖಲಿಸುವುದರ ಜೊತೆಗೆ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.ಸಂಘದ ಮಾಜಿ ಅಧ್ಯಕ್ಷ ಪೃಥ್ವಿ ಮಾತನಾಡಿ, ”ತಾಲೂಕಿನ ಕುಶಾವರ, ಚೌಡನಹಳ್ಳಿ ಸೇರಿದಂತೆ ವಿವಿಧ ಭಾಗಗಳಲ್ಲಿ 50 ರಿಂದ 60ಕ್ಕೂ ಹೆಚ್ಚು ಕಾಡಾನೆಗಳು ಬೀಡುಬಿಟ್ಟಿವೆ. ಕಳೆದ 3-4 ವರ್ಷಗಳಿಂದ ರೈತರಿಗೆ ಪರಿಹಾರ ಸಿಗದೆ ಪರದಾಡುತ್ತಿದ್ದಾರೆ. ಮೃತಪಟ್ಟವರಿಗೆ ನೀಡುತ್ತಿರುವ 20 ಲಕ್ಷ ರೂ. ಪರಿಹಾರ ಯಾವುದಕ್ಕೂ ಸಾಲದು, ಇದನ್ನು ಹೆಚ್ಚಿಸಬೇಕು” ಎಂದು ಆಗ್ರಹಿಸಿದರು.ಅರಣ್ಯ ಇಲಾಖೆಯ ಕಾರ್ಯವೈಖರಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ”ಆನೆ ಹಿಡಿಯುವ ಕಾರ್ಯಾಚರಣೆ ಹೆಸರಿನಲ್ಲಿ ಅಧಿಕಾರಿಗಳು ಭಾರಿ ದುಂದುವೆಚ್ಚ ಮಾಡುತ್ತಿದ್ದಾರೆ. ಒಂದೇ ಆನೆ ಹಿಡಿಯಲು 15 ಲಕ್ಷ ರೂ. ಹಾಗೂ ಪಟಾಕಿ ಸಿಡಿಸುವ ಹೆಸರಿನಲ್ಲಿ ತಿಂಗಳಿಗೆ 7ರಿಂದ 8 ಕೋಟಿ ರು. ಬಿಲ್ ಮಾಡಲಾಗುತ್ತಿದೆ. ಕೇವಲ ‘ಶಾಂತ ಆನೆ ಚಲನವಲನ’ಎಂಬ ವಾಟ್ಸಾಪ್ ಗ್ರೂಪ್‌ನಲ್ಲಿ ಮೆಸೇಜ್ ಹಾಕಿ ಕಾಲ ಕಳೆಯುತ್ತಿದ್ದಾರೆಯೇ ಹೊರತು, ರೈತರು ಮೃತಪಟ್ಟಾಗ ಯಾವುದೇ ಮಾಹಿತಿ ನೀಡುವುದಿಲ್ಲ. ಡೀಸೆಲ್ ಮತ್ತು ಓಡಾಟದ ಹೆಸರಿನಲ್ಲಿ ಹಣ ಲೂಟಿ ಮಾಡಲಾಗುತ್ತಿದೆ” ಎಂದು ಆರೋಪ ಮಾಡಿದರು.ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಚಂದ್ರೇಗೌಡ, ರಾಜಶೇಖರ್, ಮಂಜುನಾಥ್, ಎಚ್. ಆರ್. ಚಂದ್ರು, ರತೀಶ್ ಪ್ರಧಾನ ಕಾರ್ಯದರ್ಶಿ ಸುನಿಲ್, ಗಿರೀಶ್, ನಟರಾಜ್, ಚಂದ್ರು, ಶ್ರೀಧರ್, ಸಿದ್ದೇಗೌಡ, ದೇವರಾಜ್ ಹಾಗೂ ವಕೀಲರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.