ಕನ್ನಡಪ್ರಭ ವಾರ್ತೆ ತುಮಕೂರು
ನಗರದ ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಜರುಗಿದ ಡಾ. ಬಿ.ಆರ್. ಅಂಬೇಡ್ಕರ್ ಅವರ 68ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅತ್ಯಂತ ಕಡು ಬಡತನದಲ್ಲಿ ಹುಟ್ಟಿ ಅಸ್ಪೃಶ್ಯತೆ, ಅಸಮಾನತೆ ವಿರುದ್ಧ ಅಂಬೇಡ್ಕರ್ ಹೋರಾಡಿದ್ದಾರೆ. ಸಮ ಸಮಾಜ ನಿರ್ಮಾಣ ಮಾಡಲು ಜೀವನವನ್ನೇ ಮುಡಿಪಾಗಿಟ್ಟಿದ್ದರು. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದು ತಿಳಿಸಿದರು.
ಜಿಪಂ ಸಿಇಒ ಜಿ.ಪ್ರಭು ಮಾತನಾಡಿ, ದೀನ-ದಲಿತರಿಗೆ, ನೊಂದವರಿಗೆ ಪ್ರತ್ಯಕ್ಷ ದೇವರಾಗಿ ಕಾಣುವ ಮೂಲಕ ಅವರ ಪುಣ್ಯ ಸ್ಮರಣೆಯನ್ನು ಪರಿನಿರ್ವಾಣ ದಿನವೆಂದು ಆಚರಿಸಲಾಗುತ್ತದೆ. ಏಷ್ಯದ ಉಪ ಖಂಡದ ತಿರುವ ನಮ್ಮ ದೇಶದಲ್ಲಿ ಹಲವು ವೈವಿಧ್ಯತೆಗಳನ್ನು ಏಕೀಕರಣಗೊಳಿಸಿ ಸಂವಿಧಾನದ ಮೂಲಕ ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡಿದ್ದಾರೆ ಎಂದರು.ತಮ್ಮ ಅನುಭವದ ರಸಗಟ್ಟಿಯಿಂದ ಸಂವಿಧಾನದಲ್ಲಿ ಮಾನವೀಯ ಮೌಲ್ಯಗಳಿಗೆ ಒತ್ತು ನೀಡುವ ಮೂಲಕ ಪ್ರತಿ ಭಾರತೀಯ ಪ್ರಜೆಗೆ ಆತ್ಮ ವಿಶ್ವಾಸ ತಂದು ಕೊಟ್ಟಿದ್ದಾರೆ. ಸಾವಿರಾರು ವರ್ಷಗಳಿಂದ ತುಳಿತಕ್ಕೊಳಗಾದ ಮತ್ತು ಸಮಾಜದಿಂದ ಹಿಂದೆ ಉಳಿದುಕೊಂಡಿದ್ದ ಅನೇಕ ಸಮುದಾಯಗಳು ಅಂಬೇಡ್ಕರ್ ಕೊಟ್ಟ ಸಂವಿಧಾನದಿಂದ ಬದುಕನ್ನು ಕಟ್ಟಿಕೊಂಡಿವೆ ಎಂದು ತಿಳಿಸಿದರು.ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ ಮಾತನಾಡಿ, ಅಂಬೇಡ್ಕರ್ ಕೊಟ್ಟ ಸಂವಿಧಾನದಿಂದ ನಾವೆಲ್ಲರೂ ಸಮಾಜದಲ್ಲಿ ನೆಮ್ಮದಿಯಾಗಿ ಬದುಕುತ್ತಿದ್ದೇವೆ. ಪ್ರತಿಯೊಬ್ಬರಿಗೂ ಸಮಾನ ನ್ಯಾಯವನ್ನು ಒದಗಿಸುವುದು. ಎಲ್ಲರಿಗೂ ನ್ಯಾಯವನ್ನು ದೊರಕಿಸಿಕೊಡುವುದೇ ಸಂವಿಧಾನದ ಆಶಯವಾಗಿದೆ ಎಂದು ತಿಳಿಸಿದರು.
ಸಂವಿಧಾನದ ಮೂಲಕ ಸರ್ವರಿಗೂ ಸಮಬಾಳು ಸಮಪಾಲು ಎಂಬ ನ್ಯಾಯವನ್ನು ಒದಗಿಸಿದ ಅವರನ್ನು ಒಂದು ಜಾತಿ, ಧರ್ಮಕ್ಕೆ ಸೀಮಿತಗೊಳಿಸದೆ, ಅವರ ವಿಚಾರಧಾರೆಗಳನ್ನು ಅರಿತು ಬಾಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ನಾರಾಯಣಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಭೂ ದಾಖಲೆಗಳ ಇಲಾಖೆ ಉಪನಿರ್ದೇಶಕ ನಿರಂಜನ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯಕ್ರಮ ನಿರೂಪಣಾಧಿಕಾರಿ ದಿನೇಶ್, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ದಲಿತ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.