ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2025-26ನೇ ಸಾಲಿನ ಬೇಸಿಗೆ ಬೆಳೆಗೆ ನೀರು ಹರಿಸುವ ಕುರಿತು ಏರ್ಪಡಿಸಲಾಗಿದ್ದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾತನಾಡಿ, ಮುಂದಿನ ಬೇಸಿಗೆ ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಯಾವುದೇ ಅಡಚಣೆ ಆಗದಂತೆ ಅವಶ್ಯಕವಾಗಿರುವ ನೀರನ್ನು ಒದಗಿಸಲು ಮತ್ತು ನಗರ ಪಟ್ಟಣ ಪ್ರದೇಶಗಳಿಗೆ ಕುಡಿಯುವ ನೀರನ್ನು ಪೂರೈಸುವುದನ್ನು ಗಮನದಲ್ಲಿಟ್ಟುಕೊಂಡು ನೀರನ್ನು ಬಿಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಅಚ್ಚುಕಟ್ಟು ವ್ಯಾಪ್ತಿಯ ನಾಲೆ, ಕೆರೆಗಳಲ್ಲಿ ತುಂಬಿರುವ ಹೂಳನ್ನು ನರೇಗಾ ಯೋಜನೆಯಡಿ ತೆಗೆಯಿಸಬಹುದಾದರೂ ಪಟ್ಟಣ ಪ್ರದೇಶದ ವ್ಯಾಪ್ತಿಗೊಳಪಡುವ ಪ್ರದೇಶದಲ್ಲಿನ ನಾಲೆ, ಕೆರೆಗಳಲ್ಲಿನ ಹೂಳನ್ನು ತೆಗೆಯಿಸುವುದು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ನಿರೀಕ್ಷೆಯಂತೆ ಸಕಾಲದಲ್ಲಿ ಜಲಾಶಯದಿಂದ ಹರಿಸುವ ನೀರು ನಿಗಧಿತ ಗುರಿ ತಲುಪುತ್ತಿಲ್ಲ. ಆದ್ದರಿಂದ ಪ್ರಾಧಿಕಾರದ ನೀರಾವರಿ ಇಂಜಿನಿಯರ್‌ರವರು ಕೈಗೊಳ್ಳಬಹುದಾದ ಕಾಮಗಾರಿಗಳ ಕುರಿತು ಪ್ರಸ್ತಾವನೆಯನ್ನು ತಯಾರಿಸಿ ಕೂಡಲೇ ಸಲ್ಲಿಸಬೇಕು. ಈ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಅವರಲ್ಲಿ ಸಮಾಲೋಚನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಅಂಶುಮಂತ್ ಮಾತನಾಡಿ, ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಗೊಳಪಡುವ ಸಮೀಪದ ಸಾಗುವಳಿದಾರರಿಗೆ ನೀರು ದೊರೆಯುತ್ತಿರುವಂತೆಯೇ ದೂರದ ರೈತರ ಒಣಭೂಮಿಗೆ ನೀರು ಹರಿಸಬೇಕಾಗಿರುವುದು ಪ್ರಾಧಿಕಾರದ ಹೊಣೆಯಾಗಿದೆ. ನೈಸರ್ಗಿಕವಾಗಿ ದೊರೆಯುತ್ತಿರುವ ಅಮೂಲ್ಯ ಜಲವನ್ನು ಮಿತವಾಗಿ ಬಳಸಿಕೊಳ್ಳಬೇಕು ಎಂದರು.
ಶಾಸಕ ಎಸ್.ಎನ್.ಚನ್ನಬಸಪ್ಪ, ಹೊನ್ನಾಳಿ ಶಾಸಕ ಡಿ.ಜಿ.ಶಾಂತನಗೌಡರ, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಚಂದ್ರಭೂಪಾಲ, ಆರ್.ಪ್ರಸನ್ನಕುಮಾರ್, ಅಭಿಯಂತರರಾದ ರವಿಕುಮಾರ್, ರವಿಚಂದ್ರ ಸೇರಿದಂತೆ ದಾವಣಗೆರೆ, ಬಳ್ಳಾರಿ, ಶಿವಮೊಗ್ಗ ಜಿಲ್ಲೆಗಳ ನೀರಾವರಿ ಇಲಾಖೆಯ ಅಧಿಕಾರಿಗಳು, ರೈತ ಮುಖಂಡರು ಭಾಗವಹಿಸಿದ್ದರು.
ಬಸವರಾಜಪ್ಪ ಅಧ್ಯಕ್ಷ, ರಾಜ್ಯ ರೈತ ಸಂಘ.
-ಎ.ಬಿ.ಕರಿಬಸಪ್ಪ, ರೈತ.