ಅಧಿಕೃತ ರಸಗೊಬ್ಬರ ಮಾರಾಟದ ಪರವಾನಗಿ ಇಲ್ಲದೆ ರಸಗೊಬ್ಬರಗಳನ್ನು ದಾಸ್ತಾನು ಹಾಗೂ ಮಾರಾಟ ಮಾಡುವವರು ಮತ್ತು ಕಾಳಸಂತೆಯಲ್ಲಿ ರಸಗೊಬ್ಬರಗಳನ್ನು ಮಾರಾಟ ಮಾಡುವವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಹೇಳಿದರು.
ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ಅಧಿಕೃತ ರಸಗೊಬ್ಬರ ಮಾರಾಟದ ಪರವಾನಗಿ ಇಲ್ಲದೆ ರಸಗೊಬ್ಬರಗಳನ್ನು ದಾಸ್ತಾನು ಹಾಗೂ ಮಾರಾಟ ಮಾಡುವವರು ಮತ್ತು ಕಾಳಸಂತೆಯಲ್ಲಿ ರಸಗೊಬ್ಬರಗಳನ್ನು ಮಾರಾಟ ಮಾಡುವವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಹೇಳಿದರು.ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕೃಷಿ ಇಲಾಖೆ ವತಿಯಿಂದ ನಡೆದ ಮುಂಗಾರು ಹಂಗಾಮಿನ ರಸಗೊಬ್ಬರ ತಯಾರಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ರಸಗೊಬ್ಬರ ದಾಸ್ತಾನು ಮತ್ತು ಗರಿಷ್ಟ ಮಾರಾಟ (ಎಂ.ಆರ್.ಪಿ) ದರಗಳ ವಿವರ ಸಾರ್ವಜನಿಕರಿಗೆ ಎದ್ದು ಕಾಣುವಂತೆ ಪ್ರಮುಖವಾದ ಸ್ಥಳದಲ್ಲಿ ಪ್ರದರ್ಶಿಸಬೇಕು. ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಇತರೆ ಸಂಯುಕ್ತ ರಸಗೊಬ್ಬರ ಬಳಕೆ ಹಾಗೂ ಸಾವಯುವ ಗೊಬ್ಬರಗಳನ್ನು ಬಳಕೆ ಮಾಡುವಂತೆ ರೈತರಿಗೆ ಹೆಚ್ಚಿನ ಅರಿವು ಮಾಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜೊತೆಗೆ ಗರಿಷ್ಟ ಮಾರಾಟ ದರಗಳಿಗಿಂತ ಹೆಚ್ಚಿನ ಬೆಲೆಗೆ ಯಾವುದೇ ರಸಗೊಬ್ಬರಗಳನ್ನು ಮಾರಾಟ ಮಾಡಿದರೇ ಅಂತವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದೆಂದು ಕಟ್ಟುನಿಟ್ಟಾಗಿ ಸೂಚಿಸಿದರು.
ಜಂಟಿ ಕೃಷಿ ನಿರ್ದೇಶಕರಾದ ಬಿ.ಜಿ ಕಲಾವತಿ ಮಾತನಾಡಿ, ಮುಂಗಾರು 2025- ರ ಹಂಗಾಮಿಗೆ ಒಟ್ಟು 31,799 ಮೆಟ್ರಿಕ್ ಟನ್‌ಗಳಷ್ಟು ವಿವಿಧ ರಸಗೊಬ್ಬರಗಳ ಬೇಡಿಕೆಯಿದ್ದು, ಸದ್ಯಕ್ಕೆ 14,213 ಮೆಟ್ರಿಕ್ ಟನ್‌ಗಳು ವಿವಿಧ ರಸಗೊಬ್ಬರಗಳ ದಾಸ್ತನು ಲಭ್ಯವಿದೆ, ಬೇಡಿಕೆಗೆ ಅನುಗುಣವಾಗಿ ಹಂತ ಹಂತವಾಗಿ ರಸಗೊಬ್ಬರವು ಸರಬರಾಜು ಆಗುತ್ತದೆ ಎಂದು ತಿಳಿಸಿದರು.ಸಭೆಯಲ್ಲಿ ಉಪ ಕೃಷಿ ನಿರ್ದೇಶಕರಾದ ಗಾಯಿತ್ರಿ, ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಸಗಟು ಹಾಗೂ ಚಿಲ್ಲರೆ ಮಾರಾಟಗಾರರು, ರಸಗೊಬ್ಬರ ಸರಬರಾಜು ಮಾಡುವ ಸರಬರಾಜುದಾರರ ಪ್ರತಿನಿಧಿಗಳು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.