ಪೋಕ್ಸೋ ಕಾಯ್ದೆ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ
ಮಕ್ಕಳ ರಕ್ಷಣೆ, ಮಹಿಳೆಯರ ಘನತೆಯ ಬದುಕು, ಸಾಮಾಜಿಕ ಸಮಾನತೆ ಹಾಗೂ ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸುವುದು ಸಂವಿಧಾನದ ಆಶಯವಾಗಿದೆ. ಆದರೆ ಸ್ವಾತಂತ್ರ್ಯ ಬಂದು 79 ವರ್ಷಗಳಾದರೂ ಸಮಾಜದಲ್ಲಿ ಅಸಮಾನತೆ, ಅಸ್ಪೃಶ್ಯತೆ ಮತ್ತು ಶೋಷಣೆ ಸಂಪೂರ್ಣವಾಗಿ ನಿರ್ಮೂಲನೆಯಾಗಿಲ್ಲ. ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಪೋಕ್ಸೋ ಕಾಯ್ದೆಯ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಮೂಡಿಸುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಹೇಳಿದರು.
ನಗರದ ಜಿಲ್ಲಾ ಕನ್ನಡ ಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಒಂದು ದಿನದ ಪೋಕ್ಸೋ ಕಾಯ್ದೆ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 753 ಪೋಕ್ಸೋ ಪ್ರಕರಣಗಳು ದಾಖಲಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಮಕ್ಕಳೇ ದೇಶದ ಭವಿಷ್ಯವಾಗಿದ್ದು, ಅವರ ಹಕ್ಕುಗಳ ರಕ್ಷಣೆ ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಮಕ್ಕಳಿಗೆ ಶಿಕ್ಷಣ, ಸುರಕ್ಷತೆ ಮತ್ತು ಉತ್ತಮ ವಾತಾವರಣ ಕಲ್ಪಿಸಬೇಕು. ಪೋಕ್ಸೋ ಪ್ರಕರಣಗಳಲ್ಲಿ ಸಂತ್ರಸ್ತ ಮಕ್ಕಳಿಗೆ ನ್ಯಾಯ ದೊರಕಿಸುವುದರ ಜತೆಗೆ ಅಪರಾಧಿಗಳಿಗೆ ಕಾನೂನು ಪ್ರಕಾರ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದರು.ಸಂವಿಧಾನದ ಆಶಯದಂತೆ ಮಹಿಳೆಯರು, ಮಕ್ಕಳು, ದಲಿತರು ಹಾಗೂ ದುರ್ಬಲ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸುವುದು ಕಾನೂನು ಸೇವೆಗಳ ಪ್ರಾಧಿಕಾರದ ಪ್ರಮುಖ ಕರ್ತವ್ಯವಾಗಿದೆ ಆ ದಿಸೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಾದರಿಯಾಗಿ ಕೆಲಸ ಮಾಡುತ್ತಿದೆ.ಅಂಬೇಡ್ಕರ್ ನೇತೃತ್ವದಲ್ಲಿ ರಚನೆಯಾದ ಅತ್ಯುತ್ತಮ ಸಂವಿಧಾನವಿದ್ದರೂ ಸಮಾನತೆ ಇನ್ನೂ ಸಂಪೂರ್ಣವಾಗಿ ಸಾಕಾರಗೊಂಡಿಲ್ಲ. ಹೆಣ್ಣುಮಕ್ಕಳಿಗೆ ಸಮಾನ ಶಿಕ್ಷಣದ ಅವಕಾಶಗಳು ಎಲ್ಲೆಡೆ ದೊರೆತಿಲ್ಲ. ಸಮಾಜದಲ್ಲಿನ ಜಾತಿ ತಾರತಮ್ಯ ಮತ್ತು ಶೋಷಣೆಗಳನ್ನು ಹೋಗಲಾಡಿಸಲು ಕಾನೂನು ಅರಿವು ವ್ಯಾಪಕವಾಗಿ ಹರಡಬೇಕು ಎಂದು ಪ್ರತಿಪಾದಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯವೈಖರಿಯನ್ನು ಶ್ಲಾಘಿಸಿದ ಅವರು, ನಾಲ್ಕು ಲೋಕ ಅದಾಲತ್ಗಳ ಮೂಲಕ 26,667 ಪ್ರಕರಣಗಳನ್ನು ಇತ್ಯರ್ಥಪಡಿಸಿರುವುದು, 35 ದಂಪತಿಗಳನ್ನು ಮತ್ತೆ ಒಂದುಗೂಡಿಸಿ ಕೌಟುಂಬಿಕ ಜೀವನಕ್ಕೆ ಅವಕಾಶ ಕಲ್ಪಿಸಿರುವುದು ಶ್ಲಾಘನೀಯ. ಎಲ್ಲೋಡು ಜಾತ್ರೆಯಲ್ಲಿ ಜನರ ಸಮಸ್ಯೆ ಆಲಿಸಿ, ಬಾಲ್ಯವಿವಾಹದ ವಿರುದ್ಧ ಜಾಗೃತಿ ಮೂಡಿಸಿರುವುದು ಹಾಗೂ ಐದು ಲಕ್ಷ ಸಸಿಗಳನ್ನು ನೆಡಲು ಪಣ ತೊಟ್ಟು ಹಸಿರು ಜಿಲ್ಲೆ ನಿರ್ಮಿಸುವ ಕಾರ್ಯದ ಪ್ರಯತ್ನವೂ ಮೆಚ್ಚುವಂತಹದ್ದು ಎಂದರು.
ನಿಡುಮಾಮಿಡಿ ಮಠದ ಶ್ರೀ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಮಾತನಾಡಿ, ಮಾನವೀಯ ಹಾಗೂ ಜೀವನ ಮೌಲ್ಯಗಳ ಮೂಲಕ ಸಮಾಜದ ಶ್ರೇಯಸ್ಸಿಗಾಗಿ ಮಿಡಿಯುವ ವ್ಯಕ್ತಿತ್ವಗಳು ಅಪರೂಪ. ಅಂತಹವರಲ್ಲಿ ಜಸ್ಟೀಸ್ ಗೋಪಾಲಗೌಡರು ಪ್ರಮುಖರು. ಅವರು ಅಪ್ಪಟ ಪ್ರಜಾಪ್ರಭುತ್ವವಾದಿಯಾಗಿದ್ದು, ದೀನದಲಿತರು, ಬಡವರು ಮತ್ತು ಶೋಷಿತರ ಬಗ್ಗೆ ಅಪಾರ ಅಂತಃಕರಣ ಹೊಂದಿದ್ದಾರೆ. ಜೀವನದುದ್ದಕ್ಕೂ ತಮ್ಮ ಮೌಲ್ಯಗಳನ್ನು ಉಳಿಸಿಕೊಂಡು ಬಂದಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿದ ಸದಸ್ಯ ಕಾರ್ಯದರ್ಶಿ ಬಿ.ಶಿಲ್ಪ ಸೇರಿದಂತೆ ಜಿಲ್ಲೆಯ ಎಲ್ಲಾ ಗೌರವಾನ್ವಿತ ನ್ಯಾಯಾಧೀಶರುಗಳು, ಡಿವೈಎಸ್ಪಿ ಪ್ರಕಾಶ್, ವಕೀಲರ ಸಂಘದ ಅಧ್ಯಕ್ಷ ಅಭಿಲಾಷ್ ಇದ್ದರು.