ರೇಣುಕಾಂಬೆ ದೇಗುಲ ಅಭಿವೃದ್ಧಿಗೆ ಕಾನೂನೂನಾತ್ಮಕ ತೊಡಕು: ಡಿಸಿ

KannadaprabhaNewsNetwork |  
Published : Jul 31, 2024, 01:05 AM IST
ಫೋಟೋ:೨೯ಕೆಪಿಸೊರಬ-೦೨ : ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. | Kannada Prabha

ಸಾರಾಂಶ

ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಸೊರಬ

ಪುರಾತತ್ವ ಇಲಾಖೆಯ ವ್ಯಾಪ್ತಿಗೆ ಒಳಪಡುವ ತಾಲೂಕಿನ ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಾಂಬ ದೇವಸ್ಥಾನದ ಅಭಿವೃದ್ಧಿಗೆ ಕೆಲ ಕಾನೂನಾತ್ಮಕ ತೊಡಕು ಗಳಿದ್ದು, ಅವುಗಳನ್ನು ಶೀಘ್ರವೇ ನಿವಾರಿಸಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.

ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನ ಆಡಳಿತ ಮಂಡಳಿ ಕಚೇರಿಯಲ್ಲಿ ಅರಣ್ಯ, ಮುಜರಾಯಿ, ಕಂದಾಯ ಹಾಗೂ ವಿವಿಧ ಇಲಾಖೆಯ ಅಧಿಕಾರಿ ಗಳೊಂದಿಗೆ ಸಭೆ ನಡೆಸಿ, ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಶ್ರೀ ರೇಣುಕಾಂಬ ದೇವಸ್ಥಾನದ ಅಭಿವೃದ್ಧಿಗೆ ಅನುದಾನ ಕೊರತೆ ಇಲ್ಲ. ಆದರೆ, ದೇಗುಲವು ಪುರಾತತ್ವ ಇಲಾಖೆಯ ವ್ಯಾಪ್ತಿಗೆ ಒಳಪಡುವುದರಿಂದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಕಾನೂನಾತ್ಮಕ ಸಮಸ್ಯೆಗಳು ಎದುರಾಗಿವೆ. ಇವುಗಳನ್ನು ಶೀಘ್ರವೇ ನಿವಾರಿಸಿಕೊಂಡು, ಭಕ್ತರು ಹಾಗೂ ಪ್ರವಾಸಿಗರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮೂಲ ಸೌಲಭ್ಯ ಒದಗಿಸಲಾಗುವುದು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ದೇವಸ್ಥಾನದ ಬಗ್ಗೆ ಕಾಳಜಿ ಹೊಂದಿದ್ದಾರೆ. ದೇವಸ್ಥಾನ ಪ್ರಾಂಗಣದ ಸುಮಾರು ೩೦೦ ಮೀಟರ್ ಆವರಣದಲ್ಲಿ ಕೆಲಸಗಳನ್ನು ಕೈಗೊಳ್ಳುವಂತಿಲ್ಲ. ಈಗಾಗಲೇ ಅಗತ್ಯವಿರುವ ಸುಮಾರು ೨೫ ವಿವಿಧ ಕಾಮಗಾರಿಗಳ ಕುರಿತು ಪಟ್ಟಿ ತಯಾರಿಸಲಾಗಿದೆ. ಈ ಬಗ್ಗೆ ಪುರಾತತ್ವ ಇಲಾಖೆಗೆ ಮಾಹಿತಿ ನೀಡಲಾಗುವುದು ಎಂದರು.

ಮುಖ್ಯವಾಗಿ ಅರಣ್ಯ ಇಲಾಖೆಯ ಅನುಮತಿ ಪಡೆದು ಪ್ರಾಂಗಣದ ಸುತ್ತಲಿನ ಸುಮಾರು ೧೦ ಎಕರೆ ಪ್ರದೇಶವನ್ನು ಸುಫರ್ದಿಗೆ ಪಡೆದು ಪೊಲೀಸ್ ಉಪ ಠಾಣೆ, ಯಾತ್ರಿ ನಿವಾಸ ಸೇರಿದಂತೆ ಅಗತ್ಯವಾದ ಅನುಕೂಲಗಳನ್ನು ಕಲ್ಪಿಸಲಾಗುವುದು. ದೇವಸ್ಥಾನದ ಆದಾಯದ ಶೇ.೩೦ರಷ್ಟು ಬಳಕೆ ಮಾಡಿಕೊಳ್ಳಲು ಅವಕಾಶ ವಿದೆ. ಇದನ್ನು ಬಳಸಿಕೊಂಡು ಕಾಮಗಾರಿಗಳನ್ನು ನಡೆಸಲಾಗುವುದ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಸಾಗರ ಉಪ ವಿಭಾಗಾಧಿಕಾರಿ ಆರ್.ಯತೀಶ್, ತಹಶೀಲ್ದಾರ್ ಮಂಜುಳಾ ಹೆಗಡಾಳ್, ಮುಜರಾಯಿ ತಹಶೀಲ್ದಾರ್ ಪ್ರದೀಪ್, ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಪ್ರಮೀಳಾ ಕುಮಾರಿ, ಪುರಾತತ್ವ ಇಲಾಖೆಯ ಕಾರ್ಯ ನಿರ್ವಹಣಾಧಿಕಾರಿ ನಂದಕುಮಾರ್, ಪ್ರವಾಸೋದ್ಯಮ ಇಲಾಖೆಯ ಧರ್ಮಪ್ಪ ಸೇರಿದಂತೆ ಕಂದಾಯ, ಅರಣ್ಯ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. .

PREV

Recommended Stories

ವಿಶ್ವದಲ್ಲೇ ಮೊದಲ ಬಾರಿ ಬನ್ನೇರುಘಟ್ಟದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ