ಚಿತ್ತಾಕುಲದಲ್ಲಿ ಆತಂಕ ಮೂಡಿಸಿದ್ದ ಚಿರತೆ ಸೆರೆ

KannadaprabhaNewsNetwork |  
Published : Oct 06, 2026, 02:00 AM IST
ಬೋನಿಗೆ ಬಿದ್ದಿರುವ ಚಿರತೆ. | Kannada Prabha

ಸಾರಾಂಶ

ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿರಂತರವಾಗಿ ನಿಗಾ ವಹಿಸಿ, ಸೂಕ್ತ ಕಾರ್ಯತಂತ್ರ ರೂಪಿಸುವ ಮೂಲಕ ಅರಣ್ಯಕ್ಕೆ ಹೊಂದಿಕೊಂಡಿದ್ದ ಮಾಲ್ಕಿ ಜಾಗದಲ್ಲಿ ಬೋನು ಅಳವಡಿಸಿದ್ದರು.

ಕಾರವಾರ: ಪದೇ ಪದೇ ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸುರಕ್ಷಿತವಾಗಿ ಸೆರೆಹಿಡಿದು ಅರಣ್ಯ ಪ್ರದೇಶಕ್ಕೆ ರವಾನಿಸಿದ್ದಾರೆ.ಭಾನುವಾರ ರಾತ್ರಿ 10.30ರ ಸುಮಾರಿಗೆ ಕಾರವಾರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕಾರವಾರ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಗೋಪಶಿಟ್ಟಾ ವಲಯದ ವಲಯ ಅರಣ್ಯಾಧಿಕಾರಿಗಳ ಮಾರ್ಗದರ್ಶನದಲ್ಲಿ ಚಿತ್ತಾಕುಲ ವ್ಯಾಪ್ತಿಯ ಬಿಡ್ತುಲಭಾಗದಲ್ಲಿ ಚಿರತೆ ಸೆರೆ ಕಾರ್ಯಾಚರಣೆ ನಡೆಸಲಾಯಿತು.

ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿರಂತರವಾಗಿ ನಿಗಾ ವಹಿಸಿ, ಸೂಕ್ತ ಕಾರ್ಯತಂತ್ರ ರೂಪಿಸುವ ಮೂಲಕ ಅರಣ್ಯಕ್ಕೆ ಹೊಂದಿಕೊಂಡಿದ್ದ ಮಾಲ್ಕಿ ಜಾಗದಲ್ಲಿ ಬೋನು ಅಳವಡಿಸಿದ್ದರು. ಕಾರ್ಯಾಚರಣೆಯಲ್ಲಿ ಚಿರತೆ ಬೋನಿಗೆ ಸಿಲುಕಿದ್ದು, ಅದನ್ನು ಸುರಕ್ಷಿತವಾಗಿ ಸೆರೆ ಹಿಡಿಯಲಾಯಿತು.ಬಳಿಕ ಸೆರೆ ಹಿಡಿದ ಚಿರತೆಯ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿ, ಅದು ಆರೋಗ್ಯವಾಗಿರುವುದನ್ನು ಖಚಿತಪಡಿಸಿಕೊಂಡ ನಂತರ ಸುರಕ್ಷಿತ ಅರಣ್ಯ ಪ್ರದೇಶಕ್ಕೆ ರವಾನಿಸಲಾಯಿತು.ಈ ಸಂದರ್ಭದಲ್ಲಿ ಗೋಪಶಿಟ್ಟಾ ವಲಯದ ವಲಯ ಅರಣ್ಯಾಧಿಕಾರಿಗಳು ಸ್ಥಳೀಯ ಗ್ರಾಮಸ್ಥರಿಗೆ ವನ್ಯಜೀವಿಗಳೊಂದಿಗೆ ಸಹಬಾಳ್ವೆ, ಚಿರತೆಗಳ ಸಂರಕ್ಷಣೆ ಹಾಗೂ ಜನವಸತಿ ಪ್ರದೇಶಗಳಲ್ಲಿ ವನ್ಯಜೀವಿಗಳು ಕಾಣಿಸಿಕೊಂಡಾಗ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಅರಿವು ಮೂಡಿಸಿದರು.ಗೋಪಶಿಟ್ಟಾ ವಲಯದ ಅರಣ್ಯ ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆ ಹಾಗೂ ಸ್ಥಳೀಯರ ಸಹಕಾರದಿಂದ ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿದು ಸೂಕ್ತ ಅರಣ್ಯ ಪ್ರದೇಶಕ್ಕೆ ರವಾನಿಸಲಾಗಿದ್ದು, ಇದರಿಂದ ಸ್ಥಳೀಯರಲ್ಲಿದ್ದ ಆತಂಕ ನಿವಾರಣೆಯಾಗಿದೆ. ಕರಾವಳಿಯಲ್ಲಿ ಗುಡುಗು, ಮಿಂಚಿನ ಆರ್ಭಟದೊಂದಿಗೆ ಸುರಿದ ಮಳೆ

ಕಾರವಾರ: ಕಳೆದ ಹತ್ತು ದಿನಗಳಿಂದ ಮಳೆಯಿಲ್ಲದೆ ಬಿಸಿಲಿನ ತಾಪಕ್ಕೆ ಕಂಗಾಲಾಗಿದ್ದ ಜಿಲ್ಲೆಯ ಜನರಿಗೆ ಸೋಮವಾರ ಮಧ್ಯಾಹ್ನ ಸುರಿದ ಮಳೆ ಕೊಂಚ ಸಮಾಧಾನ ತಂದಿತು.ಕಾರವಾರ ಸೇರಿದಂತೆ ಜಿಲ್ಲೆಯ ಕರಾವಳಿ ಭಾಗದ ಹಲವೆಡೆ ಸೋಮವಾರ ಮಧ್ಯಾಹ್ನ ಹಠಾತ್ ದಟ್ಟ ಮೋಡ ಕವಿದು, ಗುಡುಗು- ಮಿಂಚಿನೊಂದಿಗೆ ಮಳೆ ಆರಂಭವಾಯಿತು. ಸುಮಾರು ಒಂದು ಗಂಟೆ ಕಾಲ ಮಳೆ ಸುರಿಯಿತು. ಬಿರುಸಿನ ಗಾಳಿಯೊಂದಿಗೆ ಮಳೆ ಸುರಿದ ಪರಿಣಾಮ ಕೆಲಕಾಲ ಜನಜೀವನ ಅಸ್ತವ್ಯಸ್ತಗೊಂಡಿತು.ಮಳೆ ಆರಂಭವಾಗುತ್ತಿದ್ದಂತೆ ಮಾರುಕಟ್ಟೆ ಪ್ರದೇಶಗಳಲ್ಲಿ ಜನರು ಅಂಗಡಿ, ವಾಣಿಜ್ಯ ಮಳಿಗೆ ಸೇರಿದಂತೆ ವಿವಿಧೆಡೆ ಆಶ್ರಯ ಪಡೆದರು. ವಾಹನ ಸವಾರರು ಸಹ ಮಳೆಯಿಂದಾಗಿ ಕೆಲಕಾಲ ಪರದಾಡುವಂತಾಯಿತು.

ಕಳೆದ ಹತ್ತು ದಿನಗಳಿಂದ ಜಿಲ್ಲೆಯಲ್ಲಿ ಮಳೆ ಆಗಿರಲಿಲ್ಲ. ನಿರಂತರ ಬಿಸಿಲು ಹಾಗೂ ಉಷ್ಣಾಂಶದ ಏರಿಕೆಯಿಂದ ಜನರು ತತ್ತರಿಸಿದ್ದರು. ಸೋಮವಾರ ಸುರಿದ ಮಳೆ ವಾತಾವರಣವನ್ನು ತಂಪಾಗಿಸಿದ್ದು, ಬಿಸಿಲಿನ ತಾಪದಿಂದ ಬಳಲಿದ್ದ ಜನರಿಗೆ ಕೊಂಚ ನೆಮ್ಮದಿ ನೀಡಿದೆ.ಇನ್ನೂ ಎರಡು ದಿನ ಮಳೆ: ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಡವಾಡದಲ್ಲಿ ರಸ್ತೆ ಹದಗೆಟ್ಟು ಸಂಚಾರ ದುಸ್ತರ
ನೌಕಾನೆಲೆಯಲ್ಲಿ ಸ್ಥಳೀಯರಿಗೆ ಉದ್ಯೋಗ ವಂಚನೆ: ಆರೋಪ