ತಾಲ್ಲೂಕು ಮಟ್ಟದ ಯುವ ಸಂಸತ್ ಸ್ಪರ್ಧೆಕನ್ನಡಪ್ರಭ ವಾರ್ತೆ ಕೊಪ್ಪಳ
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಯುವ ಸಂಸತ್ ಸ್ಪರ್ಧೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೇವಲ ಮತ ಚಲಾಯಿಸುವುದಷ್ಟೇ ಅಲ್ಲದೆ, ಮತದ ಶಕ್ತಿ ಮತ್ತು ಮೌಲ್ಯವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಆಯ್ಕೆ ಮಾಡಿ ಕಳುಹಿಸಿದ ಜನಪ್ರತಿನಿಧಿಗಳು ಸಂಸತ್ತು ಹಾಗೂ ವಿಧಾನಸಭೆಗಳಲ್ಲಿ ಜನರ ಪರವಾಗಿ ಹೇಗೆ ಕಾರ್ಯನಿರ್ವಹಿಸುತ್ತಾರೆ ಎಂಬುದನ್ನು ಗಮನಿಸುವ ಪ್ರಜ್ಞೆ ಬೆಳೆಸಿಕೊಳ್ಳಬೇಕು. ಈ ಕಾರ್ಯಕ್ರಮ ಪಕ್ಷಾತೀತವಾಗಿದ್ದು, ಸಾಮಾನ್ಯ ವ್ಯಕ್ತಿಯೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉನ್ನತ ಹುದ್ದೆಗಳನ್ನು ತಲುಪಲು ಅವಕಾಶವಿದೆ ಎಂಬ ಅರಿವು ಯುವಜನರಲ್ಲಿ ಮೂಡಬೇಕು ಎಂದರು.ಯುವ ಸಂಸತ್ ಸ್ಪರ್ಧೆ ಕೇವಲ ಭಾಗವಹಿಸುವಿಕೆ ಅಥವಾ ಗೆಲುವಿಗೆ ಸೀಮಿತವಾಗಬಾರದು. ವಿದ್ಯಾರ್ಥಿಗಳು ವಿಷಯಗಳನ್ನು ಗಂಭೀರವಾಗಿ ಅರ್ಥಮಾಡಿಕೊಂಡು, ತಮ್ಮ ಮನೆ, ಓಣಿ ಹಾಗೂ ಗ್ರಾಮಗಳಲ್ಲಿ ಪ್ರಜಾಪ್ರಭುತ್ವದ ಮಹತ್ವದ ಕುರಿತು ಜಾಗೃತಿ ಮೂಡಿಸುವ ಜವಾಬ್ದಾರಿ ಹೊರಬೇಕು. ಸಂಬಂಧಪಟ್ಟ ಇಲಾಖೆಗಳು ಪ್ರತಿ ಹಳ್ಳಿಯಲ್ಲೂ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದಾಗ ಮಾತ್ರ ಅವುಗಳ ಉದ್ದೇಶ ಸಾರ್ಥಕವಾಗುತ್ತದೆ ಎಂದು ತಿಳಿಸಿದರು.
ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ. ಸಿದ್ದಪ್ಪ ವಿ.ಎನ್. ಪ್ರಾಸ್ತಾವಿಕವಾಗಿ ಮಾತನಾಡಿ, ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಪ್ರತಿಯೊಬ್ಬರಿಗೂ ಸಮಗ್ರ ಅರಿವು ಅಗತ್ಯ. 12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪವು ಪ್ರಜಾಸತ್ತಾತ್ಮಕ ಚರ್ಚೆ ಮತ್ತು ಸಮಾನತೆಯ ಪರಿಕಲ್ಪನೆಗೆ ಮಹತ್ವದ ಪ್ರೇರಣೆಯಾಗಿದೆ. ವಿದ್ಯಾರ್ಥಿಗಳಲ್ಲಿ ಮತದಾನದ ಮಹತ್ವ, ಶಾಸನ ಸಭೆಗಳ ಕಲಾಪ, ಸಂಸದೀಯ ಮೌಲ್ಯಗಳು ಹಾಗೂ ಜವಾಬ್ದಾರಿಯುತ ನಾಗರಿಕತ್ವ ಬೆಳೆಸಲು ಅಣಕು ಸಂಸತ್ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದರು.
ಕಿನ್ನಾಳ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ವಾಸುದೇವ ಅಡವಿಬಾವಿ, ವಿವಿಧ ಕಾಲೇಜುಗಳ ಪ್ರಾಚಾರ್ಯರು, ಬಿಇಒ ಕಚೇರಿಯ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕ ಡಾ. ವೆಂಕಟೇಶ್ ನೆಲಗಲ್ ಸ್ವಾಗತಿಸಿದರು. ಸಹ ಪ್ರಾಧ್ಯಾಪಕ ಡಾ. ಉಮೇಶ್ ನಿರೂಪಿಸಿ ವಂದಿಸಿದರು. ಬಳಿಕ ಯುವ ಸಂಸತ್ ಸ್ಪರ್ಧೆಗಳು ನಡೆದವು.