ಪ್ರತಿ ಅರ್ಹ ಕುಟುಂಬಕ್ಕೂ ಉದ್ಯೋಗ ತಲುಪಲಿ: ರಿಷಿ ಆನಂದ

KannadaprabhaNewsNetwork |  
Published : Aug 26, 2026, 03:15 AM IST
ಪ್ರತಿ ಅರ್ಹ ಕುಟುಂಬಕ್ಕೂ ಉದ್ಯೋಗ ತಲುಪಲಿ: ಜಿ.ಪಂ. ಸಿಇಒ ರಿಷಿ ಆನಂದ | Kannada Prabha

ಸಾರಾಂಶ

ಗ್ರಾಮೀಣ ಬಡ ಕುಟುಂಬಗಳಿಗೆ ನಿರಂತರ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ವಿಬಿ-ಜಿ ರಾಮ್-ಜಿ ಯೋಜನೆಯಡಿ ಹೆಚ್ಚಿನ ಮಾನವ ದಿನಗಳನ್ನು ಸೃಷ್ಟಿಸಿ, ಅರ್ಹ ಕೂಲಿಕಾರ್ಮಿಕರಿಗೆ ಉದ್ಯೋಗ ಒದಗಿಸುವಂತೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಗ್ರಾಮೀಣ ಬಡ ಕುಟುಂಬಗಳಿಗೆ ನಿರಂತರ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ವಿಬಿ-ಜಿ ರಾಮ್-ಜಿ ಯೋಜನೆಯಡಿ ಹೆಚ್ಚಿನ ಮಾನವ ದಿನಗಳನ್ನು ಸೃಷ್ಟಿಸಿ, ಅರ್ಹ ಕೂಲಿಕಾರ್ಮಿಕರಿಗೆ ಉದ್ಯೋಗ ಒದಗಿಸುವಂತೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬಬಲೇಶ್ವರ ತಾಲೂಕಿನ ಹಲಗಣಿ ಗ್ರಾಮ ಪಂಚಾಯಿತಿಗೆ ದಿಢೀರ್‌ ಭೇಟಿ ನೀಡಿದ ಅವರು, ವಿಬಿ-ಜಿ ರಾಮ್-ಜಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳು ಹಾಗೂ ಪ್ರಗತಿ ಪರಿಶೀಲಿಸಿದರು. ವಿ.ಜಿ. ರಾಮ್ ಜಿ. ಯೋಜನೆಯಡಿ ಪ್ರಗತಿಯಲ್ಲಿರುವ ಕಾಮಗಾರಿಗಳು ಹಾಗೂ ಉದ್ಯೋಗ ಸೃಜನೆಯ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು. ಈ ವೇಳೆ ಕೆಲವು ಗ್ರಾಮ ಪಂಚಾಯಿತಿಗಳಲ್ಲಿ 100ಕ್ಕಿಂತ ಕಡಿಮೆ ಸಂಖ್ಯೆಯ ಕೂಲಿಕಾರರು ಉದ್ಯೋಗದಲ್ಲಿ ತೊಡಗಿಸಿಕೊಂಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದರು. ಸ್ಥಳದಲ್ಲಿಯೇ ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಕಾರಣ ಕೇಳುವ ನೋಟಿಸ್ ಜಾರಿ ಮಾಡಿ, ಯೋಜನೆಯಡಿ ಹೆಚ್ಚಿನ ಮಾನವ ದಿನಗಳನ್ನು ಸೃಷ್ಟಿಸುವ ಮೂಲಕ ಬಡ ಮತ್ತು ಗ್ರಾಮೀಣ ಕುಟುಂಬಗಳಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬಳಿಕ ಬೋಳಚಿಕ್ಕಲಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾತ್ರಾಳ ಕೆರೆಯ ಪುನಶ್ಚೇತನ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ ಸಿಇಒ ಅವರು, ಕೂಲಿಕಾರ್ಮಿಕರೊಂದಿಗೆ ನೇರವಾಗಿ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು. ಈಗಾಗಲೇ ಕೆಲಸ ನಿರ್ವಹಿಸಿರುವ ಕಾರ್ಮಿಕರಿಗೆ ಕೂಲಿ ಪಾವತಿಯಲ್ಲಿ ವಿಳಂಬವಾಗದಂತೆ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಯುವಜನರನ್ನು ಸಂಘಟಿಸಿ ಸಾಮಾಜಿಕ ಸಾಮರಸ್ಯ ಹಾಗೂ ಸಮುದಾಯ ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ಭಾರತ್ ಜೋಡೋ ಯುವ ಸಂಘದ ನೋಂದಣಿ ಕಾರ್ಯಕ್ಕೆ ವೇಗ ನೀಡಬೇಕು. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಇಂದೇ ಕನಿಷ್ಠ 100 ಯುವಕರನ್ನು ನೋಂದಾಯಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಿಡಿಓಗಳಿಗೆ ಸೂಚಿಸಿದರು.

ಈ ವೇಳೆ ಕಾರ್ಯನಿರ್ವಾಹಕ ಅಧಿಕಾರಿ ಜೆ.ಎಸ್.ಪಠಾಣ, ಪಿಡಿಒಗಳಾದ ರಾಜೇಶ ಗಾಯಕವಾಡ, ಗೀತಾ ಕಲ್ಲವಗೋಳ, ಕಾರ್ಯದರ್ಶಿಗಳಾದ ಶಾಂತು ಸಾವಳಗಿ, ಕಲ್ಲಪ್ಪ ಕಂಟ್ಯಪಗೋಳ ಸೇರಿದಂತೆ ತಾಂತ್ರಿಕ ಸಹಾಯಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮನೆಗಳ್ಳತನ: ಹುಬ್ಬಳ್ಳಿಯ ಇಬ್ಬರ ಬಂಧನ
ಹಬ್ಬದ ಹೊತ್ತಲ್ಲೇ ಸಕ್ಕರೆ ದರ ಏರಿಕೆ