ಕನ್ನಡಪ್ರಭ ವಾರ್ತೆ ಚಿತ್ರದುರ್ಗ
78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತ ಮತ್ತು ನಗರಸಭೆ ವತಿಯಿಂದ ಹರ್ ಘರ್ ತಿರಂಗಾ ಅಭಿಯಾನದಡಿ ಚಿತ್ರದುರ್ಗ ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಬೈಕ್ ರ್ಯಾಲಿಗೆ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಚಾಲನೆ ನೀಡಿದರು.ಪ್ರತೀ ಮನೆಯ ಮೇಲೆ ರಾಷ್ಟ್ರಧ್ವಜ ಹಾರಿಸಲು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಕನಕ ವೃತ್ತದಲ್ಲಿ ರಾಷ್ಟ್ರಧ್ವಜದೊಂದಿಗೆ ಹರ್ ಘರ್ ತಿರಂಗ ಬೈಕ್ ರ್ಯಾಲಿಗೆ ಚಾಲನೆ ನೀಡಲಾಯಿತು.
ಈ ವೇಳೆ ಮಾತನಾಡಿದ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಜನರ ಹೃದಯದಲ್ಲಿ ದೇಶಭಕ್ತಿಯ ಭಾವನೆ ಪ್ರೇರೇಪಿಸಿಕೊಂಡು ಐಕ್ಯತೆ, ಭಾವೈಕ್ಯತೆ ಮತ್ತು ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಹರ್ ಘರ್ ತಿರಂಗಾ ಬೈಕ್ ರ್ಯಾಲಿ ಆಯೋಜಿಸಲಾಗಿದೆ. ಪ್ರತಿಯೊಬ್ಬರೂ ಸ್ವಾತಂತ್ರ್ಯದ ದೀಪ ಹಚ್ಚುವಂತಾಗಲಿ ಎಂದುರು.ನಗರಸಭೆ ಪೌರಾಯುಕ್ತೆ ಎಂ. ರೇಣುಕಾ ಮಾತನಾಡಿ, ಭಾರತ ಸ್ವಾತಂತ್ರೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನವನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಬೈಕ್ ರ್ಯಾಲಿ, ದೇಶಭಕ್ತಿ ಗೀತೆಗಳ ಗಾಯನ ಸೇರಿದಂತೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಆ.13 ರಿಂದ 15 ರವರೆಗೆ ಮೂರು ದಿನಗಳ ಕಾಲ ಪ್ರತಿಯೊಬ್ಬರು ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ರಾಷ್ಟ್ರಪ್ರೇಮ ಮೆರೆಯಬೇಕು ಎಂದರು.ಚಿತ್ರದುರ್ಗ ನಗರದ ತರಾಸು ರಂಗಮಂದಿರದ ಆವರಣದಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿ, ಅಂಚೆ ಕಚೇರಿ ಹಾಗೂ ರೈಲ್ವೆ ನಿಲ್ದಾಣಗಳಲ್ಲಿಯೂ ರಾಷ್ಟ್ರಧ್ವಜ ಲಭ್ಯವಿದ್ದು, ಪ್ರತಿ ಧ್ವಜಕ್ಕೆ ₹26 ದರ ನಿಗದಿಪಡಿಸಲಾಗಿದೆ. ಹರ್ ಘರ್ ತಿರಂಗಾ ಅಭಿಯಾನದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಕನಕ ವೃತ್ತದಿಂದ ಆರಂಭವಾದ ಹರ್ ಘರ್ ತಿರಂಗಾ ಬೈಕ್ ರ್ಯಾಲಿಯು ಸಂಗೊಳ್ಳಿ ರಾಯಣ್ಣ ವೃತ್ತ, ಗಾಂಧಿವೃತ್ತ, ಎಸ್‍ಬಿಐ ವೃತ್ತ, ಪ್ರವಾಸಿ ಮಂದಿರ ಮಾರ್ಗವಾಗಿ ಅಂಬೇಡ್ಕರ್ ವೃತ್ತ, ಮದಕರಿ ವೃತ್ತದ ಮೂಲಕ ಚಳ್ಳಕೆರೆ ಗೇಟ್ ತಲುಪಿ ನಂತರ ಪುನಃ ನಗರಸಭೆಗೆ ಆಗಮಿಸಿ ರ್ಯಾಲಿ ಕೊನೆಗೊಂಡಿತು.ಈ ಸಂದರ್ಭದಲ್ಲಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಸುಚೇತಾ ನೆಲವಿಗಿ, ನಗರಸಭೆ ಸದಸ್ಯ ಸುರೇಶ್, ಶಶಿಧರ್, ನಗರಸಭೆ ವ್ಯವಸ್ಥಾಪಕಿ ಮಂಜುಳಾ, ನೌಕರರ ಸಂಘದ ಅಧ್ಯಕ್ಷೆ ರೇಣುಕಾ, ಗುತ್ತಿಗೆದಾರ ಸಂಘದ ಅಧ್ಯಕ್ಷ ಸಿದ್ದಪ್ಪ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಕ್ರೀಡಾಪಟುಗಳು, ಸಾರ್ವಜನಿಕರು ಇದ್ದರು.