ಪ್ರಜಾ ಸೇವಾ ಆಂದೋಲನದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಶಾಸಕ
ಜನರ ಸಮಸ್ಯೆಗಳನ್ನು ಆಲಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ ಇಲಾಖೆಯನ್ನು ರಾಜ್ಯ ಸರ್ಕಾರ ಆರಂಭಿಸಿದೆ. ಜನರ ಮನೆ ಬಾಗಿಲಿಗೆ ಸರ್ಕಾರದ ಯೋಜನೆಗಳು ತಲುಪಬೇಕು ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.
ಅವರು ಇಲ್ಲಿನ ಘಂಟಿಕೇರಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ವತಿಯಿಂದ ಹೋಬಳಿ ಮಟ್ಟದ ಬೃಹತ್ ಪ್ರಜಾ ಸೇವಾ ಆಂದೋಲನ ಸಭೆ ಉದ್ಘಾಟಿಸಿ ಮಾತನಾಡಿದರು.ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜನರ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ಕಲ್ಪಿಸಲು ಪ್ರಜಾ ಸೇವಾ ಇಲಾಖೆ ಆರಂಭಿಸಿದ್ದಾರೆ. ಒಂದೇ ಸೂರಿನಡಿ ಸರ್ಕಾರದ ಎಲ್ಲ ಇಲಾಖೆಗಳ ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶವನ್ನು ಹೊಂದಿದೆ. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದಲ್ಲಿ ಹಾಗೂ ಸ್ಥಳೀಯ ಶಾಸಕರ ನೇತೃತ್ವದಲ್ಲಿ ತಾಲೂಕು ಮಟ್ಟದಲ್ಲಿ ಪ್ರಜಾ ಸೇವಾ ಆಂದೋಲನ ಸಭೆಗಳು ಪ್ರತಿ ಶನಿವಾರ ನಡೆಯುತ್ತಿವೆ. ಈ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರದಲ್ಲಿಯೇ ಪರಿಹಾರ ಒದಗಿಸಲಾಗುತ್ತಿದೆ ಎಂದರು.
ಜನರಿಂದ ಮನೆಗಳು ಬೇಕು ಎಂದು ಸಾಕಷ್ಟು ಅರ್ಜಿಗಳು ಸಲ್ಲಿಕೆಯಾಗಿವೆ. ಮುಂದಿನ ದಿನಗಳಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಯೋಜನೆಯಡಿಯಲ್ಲಿ ಮನೆಗಳು ಮಂಜೂರಾಗಲಿವೆ. ಬಡವರ ಏಳಿಗೆಗಾಗಿ ರಾಜ್ಯ ಸರ್ಕಾರ ನಿರಂತರವಾಗಿ ಕಾರ್ಯ ನಿರ್ವಹಿಸಲಿದೆ. ಜನಪರ ಆಡಳಿತ ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಪಾಲಿಕೆ ಆಯುಕ್ತ ರುದ್ರೇಶ ಘಾಳಿ, ಶಹರ ತಹಸೀಲ್ದಾರ್ ಮಹೇಶ ಗಸ್ತೆ, ಶಹರ ಕ್ಷೇತ್ರ ಎಚ್.ಎಂ. ಫಡ್ನೇಶಿ, ವಲಯ ಅರಣ್ಯಾಧಿಕಾರಿ ಆರ್.ಎಸ್. ಉಪ್ಪಾರ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಸಂಗಮೇಶ ಬಂಗಾರಿಮಠ, ತೋಟಗಾರಿಕೆ ಇಲಾಖೆಯ ಅಧಿಕಾರಿ ಅಜೀತಕುಮಾರ ಮಸಾಲ್ಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಪಾಲಿಕೆಯ ಸದಸ್ಯರು, ಸಾರ್ವಜನಿಕರಿದ್ದರು.