ಜಿಲ್ಲೆಯಲ್ಲಿ ಶೇ.100ರಷ್ಟು ಕನ್ನಡ ಅನುಷ್ಠಾನವಾಗಲಿ: ಸಾಜೀದ್ ಮುಲ್ಲಾ.

KannadaprabhaNewsNetwork |  
Published : Nov 20, 2025, 01:15 AM IST
ಸಾಜೀದ್ ಮುಲ್ಲಾ  | Kannada Prabha

ಸಾರಾಂಶ

ಜಿಲ್ಲೆಯ ನಗರ, ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಉದ್ಯಮಗಳು, ಹೋಟೆಲ್‌ಗಳ ನಾಮಫಲಕಗಳ ಮೇಲ್ಬಾಗದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಮಾಡುತ್ತಿರುವ ಬಗ್ಗೆ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಪರಿಶೀಲಿಸಬೇಕು.

ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ

ಕನ್ನಡಪ್ರಭ ವಾರ್ತೆ ಕಾರವಾರ

ಜಿಲ್ಲೆಯಲ್ಲಿ ಕನ್ನಡ ಭಾಷೆಯ ಬಳಕೆಯನ್ನು ಎಲ್ಲಾ ಹಂತದಲ್ಲೂ ಸಂಪೂರ್ಣವಾಗಿ ಬಳಕೆ ಮಾಡುವ ಮೂಲಕ ಶೇ.100ರಷ್ಟು ಕನ್ನಡ ಅನುಷ್ಠಾನವಾಗುವ ನಿಟ್ಟಿನಲ್ಲಿ ಮತ್ತು ಪರಿಣಾಮಕಾರಿಯಾಗಿ ಕನ್ನಡ ಭಾಷೆಯ ಬಳಕೆ ನಡೆಯುವ ಬಗ್ಗೆ ಎಲ್ಲಾ ಅಧಿಕಾರಿಗಳು ಕಾರ್ಯೋನ್ಮುಖರಾಗುವಂತೆ ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಸೂಚನೆ ನೀಡಿದರು.

ಮಂಗಳವಾರ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022 ಹಾಗೂ (ತಿದ್ದುಪಡಿ) ಅಧಿನಿಯಮ 2024 ರ ಅನುಷ್ಠಾನ ಕುರಿತಂತೆ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವರ್ಚುವಲ್ ಮೂಲಕ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ನಗರ, ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಉದ್ಯಮಗಳು, ಹೋಟೆಲ್‌ಗಳ ನಾಮಫಲಕಗಳ ಮೇಲ್ಬಾಗದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಮಾಡುತ್ತಿರುವ ಬಗ್ಗೆ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಪರಿಶೀಲಿಸಬೇಕು, ಇದರ ಪಾಲನೆಯಾಗದೇ ಇರುವುದು ಕಂಡು ಬಂದಲ್ಲಿ ಸಂಬಂಧಪಟ್ಟ ಉದ್ಯಮ, ಮಳಿಗೆಗಳಿಗೆ ದಂಡ ವಿಧಿಸುವುದರ ಜೊತೆಗೆ ಕನ್ನಡ ಬಳಕೆಯ ಅನುಷ್ಠಾನವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲಾ ವ್ಯಾಪ್ತಿಯಲ್ಲಿನ ನಗರ ಪ್ರದೇಶಗಳಲ್ಲಿರುವ ಹೆದ್ದಾರಿಗಳು, ಗ್ರಾಮೀಣ ಪ್ರದೇಶದಲ್ಲಿರುವ ರಸ್ತೆಗಳು, ಬಡಾವಣೆ ಪ್ರದೇಶಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ.60ರಷ್ಟು ಕನ್ನಡ ಭಾಷೆ ಇರುವ ಬಗ್ಗೆ ಪರಿಶೀಲಿಸಬೇಕು, ಸ್ಥಳೀಯ ಪ್ರಾಧಿಕಾರ, ಅನುದಾನಿತ ಅಥವಾ ಅನುದಾನರಹಿತ ಸಂಸ್ಥೆಗಳು ನಡೆಸುವ ಕಾರ್ಯಕ್ರಮಗಳಲ್ಲಿ ಬಳಸುವ ಕರಪತ್ರ, ಬ್ಯಾನರ್, ಎಲೆಕ್ಟಾçನಿಕ್ ಪ್ರದರ್ಶನ ಫಲಕಗಳು, ಮಾಹಿತಿಗಳು, ಸೂಚನಾ ಫಲಕಗಳು ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿ ಇರುವ ಕುರಿತು ಪರಿಶೀಲಿಸಬೇಕು.

ಕನ್ನಡ ಭಾಷಾ ಅನುಷ್ಠಾನವನ್ನು ಅತ್ಯಂತ ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಉಪ ವಿಭಾಗಗಳ ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಸಮಿತಿ ಸಭೆಗಳನ್ನು ನಿಯಮಿತವಾಗಿ ನಡೆಸಿ, ತಾಲೂಕಿನಾದ್ಯಂತ ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಯನ್ನು ಕೈಗೊಳ್ಳುವಂತೆ ತಿಳಿಸಿದರು.

ಜಿಲ್ಲೆಯ ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ತಮ್ಮ ಗ್ರಾಹಕರೊಂದಿಗೆ ಕಡ್ಡಾಯವಾಗಿ ಕನ್ನಡದಲ್ಲೇ ವ್ಯವಹರಿಸಬೇಕು, ಹೊರ ರಾಜ್ಯದಿಂದ ಬಂದಿರುವ ನೌಕರರಿಗೆ ಕನ್ನಡ ಕಲಿಸುವ ನಿಟ್ಟಿನಲ್ಲಿ ಲೀಡ್ ಬ್ಯಾಂಕ್ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಬ್ಯಾಂಕ್‌ಗಳಲ್ಲಿ ಕನ್ನಡ ಬಳಕೆಯ ಕುರಿತಂತೆ ಸಾರ್ವಜನಿಕರಿಂದ ಯಾವುದೇ ದೂರು ಬರಬಾರದು. ತಮ್ಮ ಅಧೀನ ಸಿಬ್ಬಂದಿಗೆ ಸುಲಲಿತವಾಗಿ ಕನ್ನಡ ಮಾತಾಡಲು ಅಗತ್ಯವಿರುವ ತರಬೇತಿ ನೀಡುವಂತೆ ನಿರ್ದೇಶನ ನೀಡಿದರು.

ವಿವಿಧ ಇಲಾಖೆಗಳು ಅನುಷ್ಠಾನಗೊಳಿಸುತ್ತಿರುವ ಯಾವುದೇ ಯೋಜನೆಗೆ ಸಂಬಂಧಿಸಿದ ಫಲಕ, ಜಾಹೀರಾತು, ರಸೀದಿ ಬಿಲ್, ಸೂಚನಾ ಪತ್ರಗಳು, ಇ-ಟೆಂಡರ್ ಮತ್ತು ಇ ಆಡಳಿತ ಯೋಜನೆಗಳಲ್ಲಿ ಹಾಗೂ ಇಲಾಖೆಯ ಜಾಲತಾಣಗಳಲ್ಲಿನ ಮಾಹಿತಿಯು ಕನ್ನಡದಲ್ಲಿರಬೇಕು ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ನಾಯ್ಕ ಇದ್ದರು.

PREV

Recommended Stories

ಪರಿಶುದ್ಧ ಬದುಕಿನಿಂದ ಜೀವನ ಉಜ್ವಲ: ಡಾ. ವೀರಸೋಮೇಶ್ವರ ಸ್ವಾಮೀಜಿ
ನವವೃಂದಾವನಗಡ್ಡೆಯಲ್ಲಿ ಮಂತ್ರಾಲಯ, ಉತ್ತರಾಧಿ ಮಠಾಧೀಶರ ಸಮಾಗಮ