ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿ ಬಾರಿ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿತ್ತು. ಆದರೆ ಮೈದಾನದಲ್ಲಿ ಖಾಸಗಿ ಕಾರ್ಯಕ್ರಮದ ಪೆಂಡಾಲ್ ಹಾಕಿರುವುದರಿಂದ, ಈ ಬಾರಿ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗುವುದು.
ಶಿಷ್ಟಾಚಾರದಂತೆ ಗಣ್ಯರಿಗೆ ಹಾಗೂ ಯೋಗ ಪ್ರದರ್ಶನಕ್ಕೆ ಅನುಕೂಲವಾಗುವಂತೆ ಸುಸಜ್ಜಿತ ವೇದಿಕೆ ಹಾಗೂ ಮ್ಯಾಟ್ ವ್ಯವಸ್ಥೆ ಕಲ್ಪಿಸಬೇಕು. ಇದಕ್ಕೂ ಮುನ್ನ ನಗರಸಭೆ ವತಿಯಿಂದ ಮೈದಾನ ಸ್ವಚ್ಛತೆಗೊಳಿಸಬೇಕು. ತೋಟಗಾರಿಕೆ ಇಲಾಖೆಯಿಂದ ವೇದಿಕೆಯನ್ನು ಅಲಂಕಾರಿ ಸಸಿಗಳ ಕುಂಡಗಳಿಂದ ಅಲಂಕರಿಸಬೇಕು. ಮುಂಜಾಗ್ರತೆಯಾಗಿ ಅಗತ್ಯ ವೈದ್ಯಕೀಯ ಸಿಬ್ಬಂದಿಯೊಂದಿಗೆ ಸುಸಜ್ಜಿತ ಆಂಬ್ಯುಲೆನ್ಸ್, ಅಗ್ನಿಶಾಮಕ ವಾಹನಗಳನ್ನು ಕಾರ್ಯಕ್ರಮದ ಸ್ಥಳದಲ್ಲಿ ನಿಯೋಜಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ ಎಸ್. ನಾಗಸಮುದ್ರ ಮಾತನಾಡಿ, ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಲು ಭರದ ಸಿದ್ಧತೆಗಳು ನಡೆಯುತ್ತಿದ್ದು, ಈಗಾಗಲೇ ವಿವಿಧ ಯೋಗ ಸಂಸ್ಥೆಗಳ ಸಹಯೋಗದೊಂದಿಗೆ ಸರಣಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಬಾರಿಯ ಘೋಷವಾಕ್ಯ ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಎಂಬುದಾಗಿದೆ. ಹಿರಿಯ ನಾಗರಿಕರಿಗೆ ಯೋಗ ತರಬೇತಿ ನೀಡುವ ಸಲುವಾಗಿ ವಿಶೇಷ ಆಪ್ ಸಿದ್ದಪಡಿಸಲಾಗಿದೆ. ಇದರೊಂದಿಗೆ ಆಯ್ಯುಷ್ ಇಲಾಖೆ ವತಿಯಿಂದ ಈಗಾಗಲೇ ಜಿಲ್ಲೆಯ ಪ್ರಮುಖ ಹೈಸ್ಕೂಲ್ ಹಾಗೂ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತಿದಿನ ಯೋಗಾಭ್ಯಾಸವನ್ನು ಮಾಡಿಸಲಾಗುತ್ತಿದೆ ಎಂದರು.
ಅಂತಾರಾಷ್ಟ್ರಿಯ ಯೋಗ ದಿನಾಚರಣೆ ಪೂರ್ವಭಾವಿಯಾಗಿ ಜನರಲ್ಲಿ ಯೋಗದ ಮಹತ್ವ ಸಾರಲು ಜೂ.20 ಶನಿವಾರದಂದು ಬೃಹತ್ ಜಾಗೃತಿ ಜಾಥವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 7 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಾಥಕ್ಕೆ ಚಾಲನೆ ನೀಡಲಾಗುವುದು. ಜಿಲ್ಲೆಯ ಯೋಗ ಸಂಸ್ಥೆಗಳು, ಆಯುರ್ವೇದ ಕಾಲೇಜು ವಿದ್ಯಾರ್ಥಿಗಳು ಹಾಗೂ ಚಿತ್ರದುರ್ಗ ನಗರದಲ್ಲಿನ ಎಲ್ಲಾ ಸರ್ಕಾರಿ ಕಚೇರಿ ಸಿಬ್ಬಂದಿ ಜಾಗೃತಿ ಜಾಥದಲ್ಲಿ ಪಾಲ್ಗೊಳ್ಳುವರು. ಓನಕೆ ಒಬವ್ವ ವೃತ್ತ, ಮದಕರಿ ನಾಯಕ ವೃತ್ತ, ಜಿಲ್ಲಾ ಆಸ್ಪತ್ರೆ, ಎಲ್.ಐ.ಸಿ ಕಚೇರಿ ಮೂಲಕ ನಗರದ ವಿಜ್ಞಾನ ಕಾಲೇಜು ಮೈದಾನದಲ್ಲಿ ಜಾಥ ಸಂಪನ್ನಗೊಳ್ಳಲಿದೆ.