-- ಹಸಿರು ಹೊರತು ಪಡಿಸಿ ಬೇರೆ ಪಟಾಕಿ ನಿಷೇಧ । ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುದೀಪಾವಳಿ ಹಬ್ಬದಲ್ಲಿ ಹಸಿರು ಪಟಾಕಿಗಳನ್ನು ಹೊರತು ಪಡಿಸಿ ಬೇರೆ ಯಾವುದೇ ಪಟಾಕಿಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಕೆಸ್ವಾನ್‌ನಲ್ಲಿ ಜಿಲ್ಲೆಯಲ್ಲಿ ಪಟಾಕಿ ತಯಾರಿಕೆ, ದಸ್ತಾನು ಹಾಗೂ ಹಸಿರು ಪಟಾಕಿ ಮಾರಾಟ ಮಾಡುವ ಕುರಿತು ಅಧಿಕಾರಿಗಳೊಂದಿಗೆ ನಡೆದ ವೀಡಿಯೋ ಸಂವಾದದಲ್ಲಿ ಅವರು ಮಾತನಾಡಿದರು.ಹಸಿರು ಪಟಾಕಿಗಳನ್ನು ಹೊರತುಪಡಿಸಿ ಬೇರೆ ಪಟಾಕಿಗಳನ್ನು ಬಳಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶ ಮಾಡಿದೆ. ರಾತ್ರಿ 8 ರಿಂದ 10 ಗಂಟೆ ವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಿದೆ. ಆದ ಕಾರಣ ವ್ಯಾಪಾರಸ್ಥರು ಸಾರ್ವಜನಿಕರಿಗೆ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕೆಂದು ತಿಳಿಸಿದ ಅವರು, ಪರಿಸರ ಸ್ನೇಹಿ ಪಟಾಕಿ ಗಳನ್ನು ಸಿಡಿಸುವ ಕುರಿತು ತಮ್ಮ ವ್ಯಾಪ್ತಿಯ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಂ ಅಮಟೆ ಮಾತನಾಡಿ, ಜಿಲ್ಲೆಯಲ್ಲಿ ಪಟಾಕಿ ಮಾರಾಟ ಮಾಡಲು ಪರವಾನಗಿ ಪಡೆದಿರುವ ಮಾರಾಟಗಾರರು ಮಾತ್ರ ಪಟಾಕಿ ಮಾರಾಟ ಮಾಡಬೇಕು. ಅನಧಿಕೃತವಾಗಿ ಪಟಾಕಿ ಮಾರಾಟ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಆನ್ ಲೈನ್ ಮೂಲಕ ಪಟಾಕಿ ಖರೀದಿಸುವುದನ್ನು ನಿಷೇಧಿಸಲಾಗಿದೆ ಎಂದರು.ಸಭೆಯಲ್ಲಿ ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ದಲ್ಜಿತ್ ಕುಮಾರ್, ನಗರಸಭೆ ಆಯುಕ್ತ ಬಸವರಾಜು, ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಹಾಜರಿದ್ದರು.-- ಬಾಕ್ಸ್--ಜಿಲ್ಲೆಯಲ್ಲಿ 121 ಪಟಾಕಿ ಮಾರಾಟ ಸ್ಟಾಲ್‌ಗಳುಈ ಬಾರಿ ಜಿಲ್ಲೆಯಲ್ಲಿ ಪಟಾಕಿ ಮಾರಾಟ ಮಾಡಲು 121 ಮಂದಿ ಪರವಾನಿಗೆ ಪಡೆದುಕೊಂಡಿದ್ದಾರೆ. ಈ ಪೈಕಿ ಚಿಕ್ಕಮಗಳೂರಿನಲ್ಲಿ 30, ಮೂಡಿಗೆರೆ 18, ಕೊಪ್ಪ, 10, ಅಜ್ಜಂಪುರದಲ್ಲಿ 9 ಹಾಗೂ ಇನ್ನಿತರೆ ತಾಲೂಕುಗಳಲ್ಲಿ ಪಟಾಕಿ ಮಾರಾಟ ಮಾಡಲು ಅನುಮತಿ ನೀಡಲಾಗಿದೆ.
ಪಟಾಕಿ ಸ್ಟಾಲ್ ತೆರೆದಿರುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಸ್ಥಳೀಯ ಸಂಸ್ಥೆ ಅಧಿಕಾರಿಗಳು ಹಾಗೂ ಅಗ್ನಿ ಶಾಮಕ ಮತ್ತು ಕಂದಾಯ ಅಧಿಕಾರಿ, ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಹಸಿರು ಅಲ್ಲದೆ ಬೇರೆ ಯಾವುದೇ ಪಟಾಕಿ ಮಾರಾಟ ಮಾಡುವುದು ಕಂಡು ಬಂದರೆ ಸಂಬಂಧಪಟ್ಟ ಮಾರಾಟಗಾರರ ಮೇಲೆ ಕ್ರಮ ಜರುಗಿಸುವ ಜತೆಗೆ ಅವರನ್ನು ಬ್ಲಾಕ್ ಲೀಸ್ಟ್‌ಗೆ ಸೇರಿಸಲಾಗುವುದು, ಮುಂದಿನ ದಿನಗಳಲ್ಲಿ ಅವರಿಗೆ ಪಟಾಕಿ ಮಾರಾಟ ಮಾಡಲು ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ ಎಚ್ಚರಿಕೆ ನೀಡಿದ್ದಾರೆ.
30 ಕೆಸಿಕೆಎಂ 1ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಕೆಸ್ವಾನ್‌ನಲ್ಲಿ ಪಟಾಕಿ ತಯಾರಿಕೆ, ದಸ್ತಾನು ಹಾಗೂ ಹಸಿರು ಪಟಾಕಿ ಮಾರಾಟ ಮಾಡುವ ಕುರಿತು ಅಧಿಕಾರಿಗಳೊಂದಿಗೆ ಡಿಸಿ ಮೀನಾ ನಾಗರಾಜ್ ಅವರು ವೀಡಿಯೋ ಸಂವಾದ ನಡೆಸಿದರು. ಎಸ್ಪಿ ಡಾ.ವಿಕ್ರಂ ಅಮಟೆ ಇದ್ದರು.