ಹೊಸಪೇಟೆ: ಮುಂಬರುವ ಜೂ. 12ರ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಕೇವಲ ಸಾಂಪ್ರದಾಯಿಕ ಕಾರ್ಯಕ್ರಮವಾಗಿಸದೇ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚಿಸಿದರು.
ಕಾರ್ಯಕ್ರಮ ಕೇವಲ ಸಾಂಕೇತಿಕವಾಗಿ ಆಯೋಜಿಸದೇ ನುರಿತ ವಿಶೇಷ ಸಂಪನ್ಮೂಲ ವ್ಯಕ್ತಿಗಳ ಕರೆಸಿ ಮಕ್ಕಳಿಗೆ ಬಾಲ ಕಾರ್ಮಿಕ ಪದ್ಧತಿ ಕುರಿತು ವಿಶೇಷ ಉಪನ್ಯಾಸ ಆಯೋಜಿಸಬೇಕು. ಶಾಲಾ ಮಕ್ಕಳಿಂದ 10 ನಿಮಿಷಗಳ ಬಾಲಕಾರ್ಮಿಕ ಜಾಗೃತಿ ನಾಟಕ ಪ್ರದರ್ಶನ ಏರ್ಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಿಸಿದ ಅವರು, ವಿದ್ಯಾರ್ಥಿ ನಿಲಯ, ಶಾಲಾ-ಕಾಲೇಜುಗಳಿಗೆ ನಿರಂತರವಾಗಿ ಭೇಟಿ ನೀಡಿ ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ ಎಂದರು.
ಜಿಲ್ಲಾ ಮತ್ತು ತಾಲೂಕು ಮಟ್ಟದ ಟಾಸ್ಕ್‌ಫೋರ್ಸ್ ಸಮಿತಿ ಅಥವಾ ವಿವಿಧ ಇಲಾಖೆ ಅಧಿಕಾರಿಗಳ ಜತೆ ಹೋಟೆಲ್, ಗ್ಯಾರೇಜ್, ಬೇಕರಿ ಹಾಗೂ ಇಟ್ಟಿಗೆ ಭಟ್ಟಿಗಳನ್ನು ಗುರಿಯಾಗಿಸಿಕೊಂಡು ನಿರಂತರ ಜಂಟಿ ದಾಳಿ ನಡೆಸಲು ಸೂಚನೆ ನೀಡಿದರು.ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಪ್ರತಿಕ್ರಿಯಿಸಿ, ಈಗಾಗಲೇ ಇಲಾಖೆಯಿಂದ ಜಿಲ್ಲೆಯ ಪ್ರಮುಖ ವಾಣಿಜ್ಯ ಮಳಿಗೆಗಳು ಹಾಗೂ ಉದ್ದಿಮೆಗಳಲ್ಲಿ ಕರಪತ್ರ ಮತ್ತು ಪೋಸ್ಟರ್‌ಗಳನ್ನು ಅಂಟಿಸಲಾಗಿದೆ. ಮಾಲೀಕರಿಂದ ನಾವು ಯಾವುದೇ ಕಾರಣಕ್ಕೂ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಳ್ಳುವುದಿಲ್ಲ ಎಂಬ ಲಿಖಿತ ಮುಚ್ಚಳಿಕೆ ಪತ್ರ ಪಡೆಯುವ ಪ್ರಕ್ರಿಯೆ ನಡೆಸಲಾಗುತ್ತಿದೆ. ಈ ಕಾರ್ಯಕ್ಕೆ ಮತ್ತಷ್ಟು ಚುರುಕುಗೊಳಿಸಿದೆ. ಸಾರ್ವಜನಿಕರು ಕೂಡ ತಮ್ಮ ಆಸುಪಾಸಿನಲ್ಲಿ ಮಕ್ಕಳ ಶೋಷಣೆ ಕಂಡುಬಂದಲ್ಲಿ ತಕ್ಷಣ ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಮನವಿ ಮಾಡಿದರು.
ಸಾರ್ವಜನಿಕರಲ್ಲಿ ಬಾಲಕಾರ್ಮಿಕ ಪದ್ಧತಿ ವಿರುದ್ಧ ಜಾಗೃತಿ ಮೂಡಿಸಲು ಜೂ. 12ರಂದು ಬೆಳಗ್ಗೆ 9 ಗಂಟೆಗೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಜಾಥಾ ಕಾರ್ಯಕ್ರಮ ಆಯೋಜಿಸಲಾಗಿದೆ. ಜಾಥಾವು ನಗರದ ಅಂಬೇಡ್ಕರ್ ವೃತ್ತದಲ್ಲಿ ಆರಂಭವಾಗಿ ಪುಣ್ಯಮೂರ್ತಿ ವೃತ್ತ, ಅಪ್ಪು ವೃತ್ತ, ಬಸ್ ನಿಲ್ದಾಣ, ನಗರಸಭೆ ರಸ್ತೆ ಹಾಗೂ ವಿಜಯನಗರ ಕಾಲೇಜು ರಸ್ತೆಯ ಮೂಲಕ ಸಂಚರಿಸಿ ಜಿಲ್ಲಾ ಕ್ರೀಡಾಂಗಣದಲ್ಲಿ ಮುಕ್ತಾಯಗೊಳ್ಳಲಿದೆ. ಆನಂತರ ಬೆಳಗ್ಗೆ 10 ಗಂಟೆಗೆ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.