ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಜಿಲ್ಲಾಡಳಿತ ಮತ್ತು ಜಿಲ್ಲಾ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ‘ವಿಶ್ವ ಡೆಂಗ್ಯೂ ನಿಯಂತ್ರಣ ದಿನಾಚರಣೆ’ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿ, ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯನ್ನು ಸಮುದಾಯದೊಂದಿಗೆ ಸೇರಿ ‘ಡೆಂಗ್ಯೂ ಜ್ವರವನ್ನು ನಿಯಂತ್ರಿಸೋಣ’ ಎಂಬ ಈ ವರ್ಷದ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಅದರ ಪ್ರಯುಕ್ತ ಇಂದು ಚಿಕ್ಕಬಳ್ಳಾಪುರ ನಗರದ ತಾಯಿ ಮತ್ತು ಮಕ್ಕಳು ಆಸ್ಪತ್ರೆಯಿಂದ ಅಂಬೇಡ್ಕರ್ ವೃತ್ತದವರೆಗೂ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಡೆಂಗ್ಯೂ, ಚಿಕುನ್ ಗುನ್ಯ ಜ್ವರವು ವೈರಸ್ ನಿಂದ ಉಂಟಾಗುತ್ತದೆ. ಹಗಲು ಹೊತ್ತಿನಲ್ಲಿ ಕಚ್ಚುವ ಈಡಿಸ್ ಸೊಳ್ಳೆಗಳಿಂದ ಡೆಂಗ್ಯೂ, ಚಿಕನ್ ಗುನ್ಯ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಈ ಜ್ವರವನ್ನು ರಕ್ತ ಪರೀಕ್ಷೆಯಿಂದ ಪತ್ತೆ ಹಚ್ಚಬಹುದು. ಈಡಿಸ್ ಸೊಳ್ಳೆಗಳು ಮನೆಯಲ್ಲಿನ ಸ್ವಚ್ಛ ನೀರಿನ ಸಂಗ್ರಹಗಳಲ್ಲಿ ಉತ್ಪತ್ತಿಯಾಗುತ್ತವೆ. ಅಂತಹ ನೀರಿನ ತಾಣಗಳನ್ನು ವಾರಕ್ಕೆ ಒಮ್ಮೆ ನೀರನ್ನು ಖಾಲಿ ಮಾಡಿ ಸ್ವಚ್ಛಗೊಳಿಸಬೇಕು ಎಂದರು.ಮುಂಜಾಗ್ರತೆ ವಹಿಸಿ:
ಡೆಂಗ್ಯೂ ಜ್ವರ, ಚಿಕನ್ ಗುನ್ಯಾ ರೋಗಕ್ಕೊಳಪಟ್ಟವರಲ್ಲಿ ಇದ್ದಕ್ಕಿದ್ದಂತೆ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು, ವಾಕರಿಕೆ ಈ ಲಕ್ಷಣಗಳು ಕಂಡುಬರಲಿವೆ. ಅಂತಹವರು ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗಳ ವೈದ್ಯರನ್ನು ಸಂಪರ್ಕಿಸಬೇಕು. ಚಿಕಿತ್ಸೆಯು ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಉಚಿತವಾಗಿ ಲಭ್ಯವಿರುತ್ತದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಮಾಹಿತಿ ನೀಡಿದರು.
ಜಿಲ್ಲಾ ಅರೋಗ್ಯ ಶಿಕ್ಷಣಾಧಿಕಾರಿ ಹರೀಶ್, ವೈದ್ಯಾಧಿಕಾರಿ ಡಾ.ಉಮಾ, ಡಾ. ಕೃಷ್ಣಪ್ರಸಾದ್, ಡಾ. ಪ್ರಕಾಶ್, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಅರೆ ವ್ಯೆದ್ಯಕೀಯ ವಿದ್ಯಾರ್ಥಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿ, ಪೊಲೀಸ್ ಇಲಾಖೆ ಸಿಬ್ಬಂದಿ, ಸಾರ್ವಜನಿಕರು ಇದ್ದರು.