ಹೊಸಪೇಟೆ: 2030ಕ್ಕೆ ಭಾರತ ಬಾಲ್ಯವಿವಾಹ ಮುಕ್ತ ದೇಶವಾಗಬೇಕು. ಈ ನಿಟ್ಟಿನಲ್ಲಿ ವಿಜಯನಗರ ಜಿಲ್ಲೆಯ ಎಲ್ಲ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಮಕ್ಕಳ ಹಕ್ಕುಗಳ ರಕ್ಷಣೆಗೆ ಎಲ್ಲರೂ ಕೈಜೋಡಿಸಿದರೆ ಯಶಸ್ಸು ದೊರೆಯಲಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ತಿಳಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಗಳಸಹಯೋಗದೊಂದಿಗೆ ಬಾಲ್ಯವಿವಾಹ ನಿಷೇಧ ಕಾಯ್ದೆ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಕುರಿತ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಮಟ್ಟದ ಅಧಿಕಾರಿಗಳಿಗೆ ಆಯೋಜಿಸಿರುವ ಎರಡು ದಿನಗಳ ಕಾರ್ಯಾಗಾರವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
ಬಾಲ್ಯ ವಿವಾಹಗಳ ತಡೆಗೆ ರಾಜ್ಯದಲ್ಲಿ 59 ಸಾವಿರ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದಾರೆ. ಹೀಗಿದ್ದರೂ ರಾಜ್ಯದಲ್ಲಿ 80 ಸಾವಿರ ಅಪ್ರಾಪ್ತರು ಗರ್ಭಧಾರಣೆ ಮಾಡಿರುವ ಪ್ರಕರಣಗಳು ವರದಿಯಾಗಿವೆ. ವಿಜಯನಗರ ಜಿಲ್ಲೆಯಲ್ಲಿ 53 ಫೋಕ್ಸೋ ಪ್ರಕರಣಗಳು ದಾಖಲಾಗಿವೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 62 ಸಾವಿರ ಮಕ್ಕಳು ಶಾಲೆಗಳಿಂದ ಹೊರಗುಳಿದಿದ್ದಾರೆ. ಈ ಮಕ್ಕಳ ಅಪಹರಣವಾಗಿದೆಯೇ ಎಂಬುದರ ಬಗ್ಗೆಯೂ ಸತ್ಯಶೋಧನೆ ಮಾಡಲಾಗುತ್ತಿದೆ ಎಂದರು.ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಮಾತನಾಡಿ, ಮಕ್ಕಳ ಹಕ್ಕುಗಳ ರಕ್ಷಣೆಗೆ ಎಲ್ಲರ ಸಂಘಟಿತ ಪ್ರಯತ್ನದಿಂದ ಮಾತ್ರ ಸಾಧ್ಯ ಎಂಬುದರಲ್ಲಿ ಎರಡು ಮಾತಿಲ್ಲ. ಪೋಕ್ಸೋ ಕಾಯ್ದೆಯ ಸೆಕ್ಷನ್ 19 ಹಾಗೂ 20ಅನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಿ ಜಿಲ್ಲೆಯಲ್ಲಿ 53 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದರು.
ಅಪರ ಜಿಲ್ಲಾಧಿಕಾರಿ ಜಿ. ಅನುರಾಧಾ, ಜಿಪಂ ಯೋಜನಾಧಿಕಾರಿ ಅನ್ನದಾನಸ್ವಾಮಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುದೀಪ್ ಕುಮಾರ ಉಂಕಿ, ಸಂಪನ್ಮೂಲ ವ್ಯಕ್ತಿ ರಾಘವೇಂದ್ರ ಎಚ್.ಸಿ. ಮತ್ತಿತರರಿದ್ದರು. ಮಕ್ಕಳ ರಕ್ಷಣಾ ಘಟಕ, ಸಖಿ ಕೇಂದ್ರ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಬ್ಬಂದಿ ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿ ಹಾಗೂ ಅಧಿಕಾರಿಗಳು ಇದ್ದರು.ಏಷ್ಯಾನೆಟ್ ಸುವರ್ಣ ವಾಹಿನಿ ವರದಿಗೆ ಶ್ಲಾಘನೆ
ಹೊಸಪೇಟೆ: ವಿಜಯಪುರದಲ್ಲಿ ಭ್ರೂಣಹತ್ಯೆ ನಡೆಯುತ್ತಿರುವ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್‌ನ ಕವರ್ ಸ್ಟೋರಿ ತಂಡ ನಡೆಸಿದ ಕಾರ್ಯಾಚರಣೆಗೆ ಶ್ಲಾಘಿಸುವೆ. ಇಂತಹ ಕುಕೃತ್ಯಗಳನ್ನು ಬಯಲಿಗೆಳೆಯುವ ಕಾರ್ಯವನ್ನು ಮಾಡಿದ ಏಷ್ಯಾನೆಟ್ ಸುವರ್ಣ ನ್ಯೂಸ್‌ನ ಕಾರ್ಯ ನಿಜಕ್ಕೂ ಎಲ್ಲರಿಗೂ ಅನುಕರಣೀಯವಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ತಿಳಿಸಿದರು.ಸ್ಟಾಫ್ ನರ್ಸ್‌ಗಳೇ ಇಂತಹ ಹೀನ ಕಾರ್ಯದಲ್ಲಿ ಭಾಗಿಯಾಗಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ವಿಜಯಪುರ ಜಿಲ್ಲಾಧಿಕಾರಿ ಅವರಿಗೂ ನಾನು ಅಭಿನಂದಿಸುವೆ. ಕೂಡಲೇ ಅವರು ಅಧಿಕಾರಿಗಳನ್ನು ಕಳುಹಿಸಿ ಈ ಕೃತ್ಯದಲ್ಲಿ ಭಾಗಿಯಾದವರನ್ನು ಬಂಧಿಸಲು ಕಾರಣರಾಗಿದ್ದಾರೆ ಎಂದರು.